₹101 ಕೋಟಿ ಕಾಮಗಾರಿ ಉದ್ಘಾಟನೆ
ಕನ್ನಡಪ್ರಭ ವಾರ್ತೆ ಹಾಸನನಗರ ಹಾಗೂ ಜಿಲ್ಲೆಯಲ್ಲಿ ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿ ಪೂರ್ಣಗೊಂಡಿರುವ ೧೦೧.೬೩ ಕೋಟಿ ರು. ವೆಚ್ಚದ ಕಾಮಗಾರಿಗಳ ಉದ್ಘಾಟನೆ ಹಾಗೂ ೧,೨೪೩.೩೩ ಕೋಟಿ ರು. ವೆಚ್ಚದ ಕಾಮಗಾರಿಗಳಿಗೆ ಶಂಕುಸ್ಥಾಪನೆಯನ್ನು ಮಾ.೧ ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೆರವೇರಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾರ್ಯಕ್ರಮ ನಗರದ ಎಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ನಡೆಯಲಿದೆ. ಶಂಕುಸ್ಥಾಪನೆ ಹಾಗೂ ಉದ್ಘಾಟನೆಯ ಹೊರತು ಪಡಿಸಿ ಈಗಾಗಲೇ ಉದ್ಘಾಟನೆ ಆಗಿರುವ ಕಟ್ಟಡಗಳನ್ನು ಸಾರ್ವಜನಿಕರ ಬಳಕೆಗೆ ಸಮರ್ಪಣೆ ಮಾಡಲಾಗುವುದು ಎಂದು ತಿಳಿಸಿದರು.ಇದೇ ವೇಳೆ ವಿವಿಧ ಇಲಾಖೆಗಳು ಹಾಗೂ ನಿಗಮಗಳಿಂದ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಲಾಗುವುದು ಎಂದು ತಿಳಿಸಿದರು.
ಪ್ರವಾಸೋದ್ಯಮ, ಕೃಷಿ, ಲೋಕೋಪಯೋಗಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ತೋಟಗಾರಿಕೆ, ಶಾಲಾ ಶಿಕ್ಷಣ ಇಲಾಖೆ, ನಗರಸಭೆ ಸೇರಿದಂತೆ ೧೫ ಇಲಾಖೆಯ ಪೂರ್ಣಗೊಂಡು ಉದ್ಘಾಟನೆಗೆ ಸಿದ್ದವಿರುವ ೧೦೧.೬೦ ಕೋಟಿ ರು. ವೆಚ್ಚದ ಕಾಮಗಾರಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ ಎಂದು ಹೇಳಿದರು.ಗ್ರಾಮೀಣ ಕುಡಿಯುವ ನೀರು, ಸಮಾಜ ಕಲ್ಯಾಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇರಿದಂತೆ ೯ ಇಲಾಖೆಯ ೧,೨೪೩.೩೩ ಕೋಟಿ ರು. ವೆಚ್ಚದ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದರು.
ಕಾರ್ಯಕ್ರಮಕ್ಕೆ ಫಲಾನುಭವಿಗಳನ್ನು ಕರೆದುಕೊಂಡು ಬರಲು ೭೦೦ ಬಸ್‌ಗಳ ವ್ಯವಸ್ಥೆಯನ್ನು ಸರ್ಕಾರದ ವತಿಯಿಂದ ಮಾಡಲಾಗಿದೆ. ಎಲ್ಲಾ ತಾಲೂಕುಗಳಿಂದ ಒಟ್ಟು ಸುಮಾರು ೪೦ ರಿಂದ ೫೦ ಸಾವಿರ ಫಲಾನುಭವಿಗಳು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.ಫಲಾನುಭವಿಗಳ ಕರೆತರುವ ಜವಾಬ್ದಾರಿಯನ್ನು ಸ್ಥಳೀಯ ಅಧಿಕಾರಿಗಳಿಗೆ ವಹಿಸಿದ್ದು ಮೇಲುಸ್ತುವಾರಿಯನ್ನು ತಹಸೀಲ್ದಾರ್‌ಗಳು ಹಾಗೂ ತಾಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ವಹಿಸಲಾಗಿದೆ ಎಂದು ಹೇಳಿದರು.
ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಹಾಗೂ ಸಹಕಾರ ಸಚಿವ ಕೆ.ಎನ್.ರಾಜಣ್ಣ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಆರ್ ಪೂರ್ಣಿಮಾ, ಅಪರ ಜಿಲ್ಲಾಧಿಕಾರಿ ಕೆ.ಟಿ.ಶಾಂತಲಾ ಇದ್ದರು.
ಹಾಸನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಸತ್ಯಭಾಮ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.