ಸೂಕ್ತ ಭದ್ರತೆ, ಶಿಷ್ಟಾಚಾರ ಪಾಲನೆ ಕುರಿತಂತೆ ಜಿಲ್ಲಾ ಮಟ್ಟದ ಅಧಿಕಾರಿ ನಿರ್ದೇಶನ
ಗದಗ: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿ.೧೭ರಂದು ಗದುಗಿಗೆ ಆಗಮಿಸಿ ಖಾಸಗಿ ಕಾರ್ಯಕ್ರಮದಲ್ಲಿಪಾಲ್ಗೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅವರು ಸೂಕ್ತ ಭದ್ರತೆ ಹಾಗೂ ಶಿಷ್ಟಾಚಾರ ಪಾಲನೆ ಕುರಿತಂತೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಜಿಲ್ಲಾಡಳಿತದ ಸಭಾ ಭವನದಲ್ಲಿ ಶುಕ್ರವಾರ ಸಂಜೆ ಸಭೆ ನಡೆಸಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಈ ವೇಳೆ ಮಾತನಾಡಿದ ಅವರು, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿ. ೧೭ರಂದು ಬೆಳಗ್ಗೆ ೧೦.೩೦ಕ್ಕೆ ಹುಬ್ಬಳ್ಳಿಯಿಂದ ಹೆಲಿಕಾಪ್ಟರ್ ಮೂಲಕ ಹೊರಟು ಬೆಳಗ್ಗೆ ೧೦.೪೫ಕ್ಕೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣಕ್ಕೆ ಆಗಮಿಸಿ ನಗರದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ನಂತರ ಬೆಳಗ್ಗೆ ೧೧.೪೫ ಕ್ಕೆ ಗದಗಿನಿಂದ ಹುಬ್ಬಳ್ಳಿಗೆ ಹೆಲಿಕಾಪ್ಟರ್ ಮುಖಾಂತರ ಪ್ರಯಾಣ ಬೆಳೆಸಲಿದ್ದು, ಈ ವೇಳೆ ಮುಖ್ಯಮಂತ್ರಿಗಳಿಗೆ ಸೂಕ್ತ ಭದ್ರತೆ ಒದಗಿಸಬೇಕು. ಕಾನೂನು ಸುವ್ಯವಸ್ಥೆ ಕುರಿತಂತೆ ಹಾಗೂ ಸಂಚಾರ ವ್ಯವಸ್ಥೆ ಸರಿಯಾಗಿ ನಿರ್ವಹಿಸಲು ಪೊಲೀಸ್ ಇಲಾಖಾಧಿಕಾರಿಗಳು ಸರ್ವಸನ್ನದ್ಧರಾಗಿ ಯೋಜನೆ ರೂಪಿಸಬೇಕು ಎಂದರು.ಮುಖ್ಯಮಂತ್ರಿಗಳು ಜಿಲ್ಲೆಗೆ ಆಗಮಿಸುವ ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟದ ಎಲ್ಲ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ತಮ್ಮ ಇಲಾಖೆಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯೊಂದಿಗೆ ಹಾಜರಿರಬೇಕು. ಯಾವುದೇ ಸಂದರ್ಭದಲ್ಲೂ ಸೂಕ್ತ ಮಾಹಿತಿಯನ್ನು ಒದಗಿಸಲು ಸಿದ್ಧರಿರಬೇಕು ಎಂದು ಸೂಚಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ ಮಾತನಾಡಿ, ಮುಖ್ಯಮಂತ್ರಿಗಳು ಸಂಚರಿಸುವ ಮಾರ್ಗದುದ್ದಕ್ಕೂ ಇರುವ ರಸ್ತೆಗಳಲ್ಲಿನ ರಸ್ತೆ ತಡೆಗಳನ್ನು ವೈಜ್ಞಾನಿಕವಾಗಿ ಮಾಡಬೇಕು ಹಾಗೂ ರಸ್ತೆಗಳ ಸಣ್ಣ ಪುಟ್ಟ ದುರಸ್ತಿಗಳಿದ್ದಲ್ಲಿ ತಕ್ಷಣ ಪೂರ್ಣಗೊಳಿಸಬೇಕು. ಕಾನೂನು ಸುವ್ಯವಸ್ಥೆ ಕುರಿತಂತೆ ಪೊಲೀಸ್ ಇಲಾಖೆಯ ಅಧಿಕಾರಿಗಳು ಕಾರ್ಯನಿರ್ವಹಿಸಲಿದ್ದಾರೆ. ಒಟ್ಟಾರೆ ಮುಖ್ಯಮಂತ್ರಿಗಳು ಬಂದು ಹೋಗುವವರೆಗೆ ಎಲ್ಲ ಇಲಾಖೆ ಅಧಿಕಾರಿಗಳು ತಮ್ಮ ಇಲಾಖೆಗಳ ಬಗ್ಗೆ ಸಂಪೂರ್ಣ ನಿಗಾ ಇರಬೇಕು ಎಂದು ತಿಳಿಸಿದರು.ಸಭೆಯಲ್ಲಿ ಮುಖ್ಯಮಂತ್ರಿಗಳು ತೆರಳುವ ಮಾರ್ಗ, ಹೆಲಿಪ್ಯಾಡ್, ಪ್ರವಾಸಿ ಮಂದಿರ, ಕಾರ್ಯಕ್ರಮದ ಸ್ಥಳ, ವಿದ್ಯುತ್ ವ್ಯವಸ್ಥೆ, ಮುಖ್ಯಮಂತ್ರಿಗಳ ಉಪಾಹಾರ, ಊಟದ ವ್ಯವಸ್ಥೆ , ಆರೋಗ್ಯ ವ್ಯವಸ್ಥೆ ಕುರಿತಂತೆ ಅಗತ್ಯ ಸಲಹೆ ಸೂಚನೆಗಳನ್ನು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅವರು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಮಾಡಿಕೊಳ್ಳುವಂತೆ ಸೂಚಿಸಿದರು.
ಈ ವೇಳೆ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ., ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ, ಉಪವಿಭಾಗಾಧಿಕಾರಿ ಡಾ. ವೆಂಕಟೇಶ ನಾಯಕ, ಜಿಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಿಬ್ಬಂದಿಗಳು ಹಾಜರಿದ್ದರು.ಜಿಲ್ಲಾ ಪ್ರವಾಸ ಕಾರ್ಯಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿ. ೧೭ರಂದು ಬೆಳಗ್ಗೆ ೧೦.೩೦ಕ್ಕೆ ಹುಬ್ಬಳ್ಳಿಯಿಂದ ಹೆಲಿಕಾಪ್ಟರ್ ಮೂಲಕ ಹೊರಟು ಬೆಳಗ್ಗೆ.೧೦.೪೫ ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಆವರಣಕ್ಕೆ ಆಗಮಿಸಿ ನಗರದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ನಂತರ ಬೆಳಗ್ಗೆ ೧೧.೪೫ಕ್ಕೆ ಗದಗಿನಿಂದ ಹುಬ್ಬಳ್ಳಿಗೆ ಹೆಲಿಕಾಪ್ಟರ್ ಮುಖಾಂತರ ಪ್ರಯಾಣ ಬೆಳೆಸುವರು ಎಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.