ಶೃಂಗೇರಿ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ಸೂಕ್ತ ದಾಖಲೆಗಳೊಂದಿಗೆ ವಿಚಾರಣೆ ನಡೆಸುವಂತೆ ಕರ್ನಾಟಕ ಹೈಕೋರ್ಟ್‌ಗೆ ಶುಕ್ರವಾರ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.
ನವದೆಹಲಿ : ಶೃಂಗೇರಿ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ಸೂಕ್ತ ದಾಖಲೆಗಳೊಂದಿಗೆ ವಿಚಾರಣೆ ನಡೆಸುವಂತೆ ಕರ್ನಾಟಕ ಹೈಕೋರ್ಟ್‌ಗೆ ಶುಕ್ರವಾರ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.
ಕಳೆದ 2023 ಮೇ ತಿಂಗಳಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ, ಮಾಜಿ ಶಾಸಕ ಡಿ.ಎನ್.ಜೀವರಾಜ್ ಅವರು ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ. ರಾಜೇಗೌಡ ವಿರುದ್ಧ 201 ಮತಗಳ ಅಂತರದಿಂದ ಸೋಲು ಕಂಡಿದ್ದರು. ಈ ವೇಳೆ ಮತ ಎಣಿಕೆ ಕುರಿತು ಆಕ್ಷೇಪ ವ್ಯಕ್ತಪಡಿಸಿದ್ದ ಪರಾಜಿತ ಅಭ್ಯರ್ಥಿ ಜೀವಾರಾಜ್ ಅವರು, ಚುನಾವಣೆಯಲ್ಲಿ 279 ಕುಲಗೆಟ್ಟ ಮತಗಳಿದ್ದು, ಮರು ಎಣಿಕೆ ಮಾಡುವಂತೆ ಆಗ್ರಹಿಸಿದ್ದರು. ಆದರೆ, ಈ ಮನವಿಯನ್ನು ಚುನಾವಣಾಧಿಕಾರಿಗಳು ಪುರಸ್ಕರಿಸಿರಲಿಲ್ಲ. ಅಧಿಕಾರಗಳ ನಡೆಗೆ ಆಕ್ಷೇಪಿಸಿ ಜೀವರಾಜ್ ಅವರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.
ಶುಕ್ರವಾರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅವರು, ಸೋತಿರುವ ಮತಗಳಿಗಿಂತ ಕುಲಗೆಟ್ಟ ಮತಗಳೇ ಹೆಚ್ಚಾಗಿವೆ ಎಂದು ಅರ್ಜಿದಾರರ ಪರ ವಕೀಲರು ಮಂಡಿಸಿದ ವಾದ ನ್ಯಾಯಯುತವಾಗಿದ್ದು, ಕರ್ನಾಟಕ ಹೈಕೋರ್ಟ್ ಶೃಂಗೇರಿ ವಿಧಾನಸಭಾ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ ಬಗ್ಗೆ ದಾಖಲೆಗಳೊಂದಿಗೆ ವಿಚಾರಣೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಆದೇಶಿಸಿದ್ದಾರೆ.