₹22 ಕೋಟಿ ವೆಚ್ಚದ ಚಿಕ್ಕಮಗಳೂರು ರೈಲ್ವೆ ನಿಲ್ದಾಣ ಅಭಿವೃದ್ಧಿ ಕಾಮಗಾರಿ ಪೂರ್ಣ

KannadaprabhaNewsNetwork |  
Published : Nov 13, 2026, 01:15 AM IST
 | Kannada Prabha

ಸಾರಾಂಶ

ಚಿಕ್ಕಮಗಳೂರುನಗರದ ರೈಲ್ವೆ ನಿಲ್ದಾಣದಲ್ಲಿ ಸುಮಾರು ₹22 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾದ ವಿವಿಧ ಅಭಿವೃದ್ಧಿ ಕಾಮಗಾರಿಗಳು ಪೂರ್ಣ ಗೊಂಡಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಬೆಂಗಳೂರಿನಲ್ಲಿ ನಡೆಯಲಿರುವ ಕಾರ್ಯಕ್ರಮದ ಮೂಲಕ ಆನ್‌ಲೈನ್‌ನಲ್ಲಿ ಉದ್ಘಾಟಿಸಲಿದ್ದಾರೆ.

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಆನ್‌ಲೈನ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಚಾಲನೆ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುನಗರದ ರೈಲ್ವೆ ನಿಲ್ದಾಣದಲ್ಲಿ ಸುಮಾರು ₹22 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾದ ವಿವಿಧ ಅಭಿವೃದ್ಧಿ ಕಾಮಗಾರಿಗಳು ಪೂರ್ಣ ಗೊಂಡಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಬೆಂಗಳೂರಿನಲ್ಲಿ ನಡೆಯಲಿರುವ ಕಾರ್ಯಕ್ರಮದ ಮೂಲಕ ಆನ್‌ಲೈನ್‌ನಲ್ಲಿ ಉದ್ಘಾಟಿಸಲಿದ್ದಾರೆ.ಈ ಹಿನ್ನೆಲೆಯಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಗುರುವಾರ ಚಿಕ್ಕಮಗಳೂರು ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ ಪೂರ್ಣಗೊಂಡಿರುವ ಕಾಮಗಾರಿಗಳ ಪರಿಶೀಲಿಸಿದರು. ಕಾಮಗಾರಿಗಳ ಗುಣಮಟ್ಟ, ಪ್ರಯಾಣಿಕರಿಗೆ ಕಲ್ಪಿಸಿರುವ ಸೌಲಭ್ಯಗಳ ಸ್ಥಿತಿಗತಿ ಹಾಗೂ ಉದ್ಘಾಟನಾ ಕಾರ್ಯಕ್ರಮದ ಪೂರ್ವಸಿದ್ಧತೆ ಪರಿಶೀಲಿಸಿ ರೈಲ್ವೆ ಅಧಿಕಾರಿಗಳೊಂದಿಗೆ ಚರ್ಚಿಸಿದರು. ಕಾರ್ಯಕ್ರಮಕ್ಕೆ ಅಗತ್ಯವಿರುವ ಎಲ್ಲ ವ್ಯವಸ್ಥೆಗಳನ್ನು ಸಮರ್ಪಕವಾಗಿ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.ಬಳಿಕ ಮಾತನಾಡಿ ಚಿಕ್ಕಮಗಳೂರು ರೈಲ್ವೆ ನಿಲ್ದಾಣದಲ್ಲಿ ₹22 ಕೋಟಿ ವೆಚ್ಚದಲ್ಲಿ ಪಾರ್ಕಿಂಗ್ ವ್ಯವಸ್ಥೆ, ಸಭಾಂಗಣ, ವಿಶ್ರಾಂತಿ ಕೊಠಡಿ, ರಸ್ತೆ ಸೇರಿದಂತೆ ವಿವಿಧ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ. ಕಾಮಗಾರಿಗಳು ಪೂರ್ಣಗೊಂಡಿದ್ದು, ಇನ್ನೂ ಕೆಲವು ಸಣ್ಣಪುಟ್ಟ ಕಾಮಗಾರಿಗಳು ಬಾಕಿ ಉಳಿದಿವೆ. ಅವುಗಳನ್ನೂ ಶೀಘ್ರ ಪೂರ್ಣಗೊಳಿ ಸುವಂತೆ ರೈಲ್ವೆ ಎಂಜಿನಿಯರ್‌ಗಳಿಗೆ ಸೂಚಿಸಲಾಗಿದೆ ಎಂದರು.ಮೈಸೂರು ರೈಲ್ವೆ ವಿಭಾಗದ ವ್ಯಾಪ್ತಿಯಲ್ಲಿ ಚಾಮರಾಜನಗರ, ಚಿಕ್ಕಮಗಳೂರು ಸೇರಿದಂತೆ ನಾಲ್ಕು ಸ್ಥಳಗಳಲ್ಲಿ ಪೂರ್ಣ ಗೊಂಡ ರೈಲ್ವೆ ಅಭಿವೃದ್ಧಿ ಕಾಮಗಾರಿಗಳಿಗೆ ಏಕಕಾಲದಲ್ಲಿ ಚಾಲನೆ ದೊರೆಯಲಿದೆ. ಬೆಂಗಳೂರಿನಲ್ಲಿ ನಡೆವ ಕಾರ್ಯಕ್ರಮದಲ್ಲಿ ಬೆಂಗಳೂರು ಮತ್ತು ಕರಾವಳಿ ಸಂಪರ್ಕಿಸುವ ವಂದೇ ಭಾರತ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಹಸಿರು ನಿಶಾನೆ ತೋರಲಿದ್ದು, ಇದೇ ಸಂದರ್ಭದಲ್ಲಿ ಚಿಕ್ಕಮಗಳೂರು ರೈಲ್ವೆ ನಿಲ್ದಾಣದ ಅಭಿವೃದ್ಧಿ ಕಾಮಗಾರಿಯನ್ನೂ ಆನ್‌ಲೈನ್ ಮೂಲಕ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.ಚಿಕ್ಕಮಗಳೂರಿನಲ್ಲಿ ಅಗತ್ಯ ಮೂಲಸೌಕರ್ಯಗಳ ಕೊರತೆ ಕಾರಣದಿಂದ ಹೆಚ್ಚಿನ ರೈಲುಗಳ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲು ಸಾಧ್ಯವಾಗುತ್ತಿರಲಿಲ್ಲ. ಇದೀಗ ರೈಲ್ವೆ ನಿಲ್ದಾಣದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ಇದರಿಂದ ಮುಂದಿನ ದಿನಗಳಲ್ಲಿ ಹೆಚ್ಚಿನ ರೈಲುಗಳ ಸಂಚಾರಕ್ಕೆ ಅಗತ್ಯ ವ್ಯವಸ್ಥೆ ಕಲ್ಪಿಸಲು ಅನುಕೂಲವಾಗಲಿದೆ. ಚಿಕ್ಕಮಗಳೂರಿಗೆ ಇಂಟರ್‌ಸಿಟಿ ರೈಲು ಒದಗಿಸುವ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹಾಗೂ ರಾಜ್ಯ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ ಭರವಸೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ಪ್ರಯತ್ನ ಮುಂದುವರಿಸಲಾಗಿದೆ ಎಂದರು.ಚಿಕ್ಕಮಗಳೂರಿನಿಂದ ಬೆಂಗಳೂರಿಗೆ ರಾತ್ರಿ ರೈಲು ಸಂಚಾರದ ಅಗತ್ಯವಿದೆ. ರಾತ್ರಿ ಚಿಕ್ಕಮಗಳೂರಿನಿಂದ ಹೊರಟು ಬೆಳಗ್ಗೆ ಬೆಂಗಳೂರಿಗೆ ತಲುಪುವಂತಹ ರೈಲು ವ್ಯವಸ್ಥೆ ಕಲ್ಪಿಸಿದರೆ ಉದ್ಯೋಗಿಗಳು, ವ್ಯಾಪಾರಸ್ಥರು ಸೇರಿದಂತೆ ಜಿಲ್ಲೆಯ ಜನರಿಗೆ ಹೆಚ್ಚಿನ ಅನುಕೂಲ. ಈ ಬೇಡಿಕೆ ಈಡೇರಿಸಲು ಸಂಬಂಧಪಟ್ಟ ರೈಲ್ವೆ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿ ಪ್ರಯತ್ನಿಸಲಾಗುತ್ತಿದೆ ಎಂದು ಹೇಳಿದರು.ಇದೇ ವೇಳೆ, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಶುಕ್ರವಾರ ಉಡುಪಿ ಮತ್ತು ಮಂಗಳೂರು ಭಾಗಗಳಿಗೆ ಭೇಟಿ ನೀಡಲಿ ರುವ ಹಿನ್ನೆಲೆಯಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅಲ್ಲಿನ ಕಾರ್ಯಕ್ರಮಗಳಲ್ಲಿಯೂ ಭಾಗವಹಿಸಲಿದ್ದಾರೆ.ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ದೇವರಾಜ್ ಶೆಟ್ಟಿ, ಮುಖಂಡರಾದ ಪುಷ್ಪರಾಜ್, ವಿನೋದ್, ರಾಜೀವ್, ಸೋಮಣ್ಣ, ಪ್ರೇಮ್ ಕುಮಾರ್, ದೇವವೃಂದ ದಿನೇಶ್, ಶಶಿ ಆಲ್ದೂರು, ಪ್ರದೀಪ್, ಬಸವರಾಜ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೀಳಗಿ ಶುಗರ್ಸ್‌ನಿಂದ 10 ಲಕ್ಷ ಟನ್‌ ಕಬ್ಬು ನುರಿಸುವ ಗುರಿ
14ರವರೆಗೆ 6ನೇ ಲಿಸಾಕಾನ್-2026 ಅಂತಾರಾಷ್ಟ್ರೀಯ ಸಮ್ಮೇಳನ