ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್, ಶಾಲಾ ಶಿಕ್ಷಣ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕರ ಯೋಜನಾ ಸೊಸೈಟಿ ಹಾಗೂ ಇತರೆ ಸಂಘ ಸಂಸ್ಥೆಗಳ ಸಹಯೋಗದಲ್ಲಿ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಳ್ಳಲಾದ ವಿಶ್ವ ಬಾಲ ಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ನಗರ ಪ್ರದೇಶದ ಹೋಟೆಲ್, ಮೆಕಾನಿಕ್ ಶಾಪ್‌ಗಳು, ಅಂಗಡಿ ಮುಂಗಟ್ಟು, ಕಾರ್ಖನೆಗಳಲ್ಲಿ ಸದ್ಯ ಬಾಲ ಕಾರ್ಮಿಕ ನಿಷೇಧ ಕಾಯ್ದೆಯ ಕುರಿತು ಜಾಗೃತಿ ಉಂಟಾಗಿದೆ. ಆದರೆ ಗ್ರಾಮೀಣ ಪ್ರದೇಶದಲ್ಲಿ ಜಾಗೃತಿ ಕೊರತೆಯಿದೆ. ಕೃಷಿ ಹಾಗೂ ಪಶುಸಂಗೋಪನೆ ಕೆಲಸಗಳಲ್ಲಿ ಮಕ್ಕಳನ್ನು ತೊಡಗಿಸುವ ಪ್ರವೃತ್ತಿಯಿದೆ. ಆದ್ದರಿಂದ ಅಧಿಕಾರಿಗಳು ಗ್ರಾಮಿಣ ಭಾಗದಲ್ಲಿ ಹೆಚ್ಚಿನ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.ಸರ್ಕಾರ 14 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಉಚಿತ ಹಾಗೂ ಕಡ್ಡಾಯ ಶಿಕ್ಷಣವನ್ನು ನೀಡುತ್ತಿದೆ. ನಂತರದ ವಿದ್ಯಾಭ್ಯಾಸಕ್ಕೆ ವಿದ್ಯಾರ್ಥಿ ವೇತನ, ಹಾಸ್ಟೆಲ್ ಸೌಲಭ್ಯ ಕಲ್ಪಿಸಿದೆ. ಇದರ ಸದುಪಯೋಗ ಪಡೆದುಕೊಳ್ಳಬೇಕು. ಜಿಲ್ಲೆಯಲ್ಲಿ ಮಕ್ಕಳ ಗೈರು ಹಾಜರಿ ಹೆಚ್ಚಾಗಿದೆ. ಇದು ಶೈಕ್ಷಣಿಕ ಫಲಿತಾಂಶ ಕುಸಿತ, ಬಾಲ ಕಾರ್ಮಿಕ, ಬಾಲ್ಯ ವಿವಾಹ ಸೇರಿದಂತೆ ಇತರೆ ಅನಿಷ್ಟ ಪದ್ಧತಿಗಳಿಗೆ ಕಾರಣವಾಗಿದೆ. ಇದನ್ನು ತಡೆಗಟ್ಟಲು ಜಿಲ್ಲಾ ಮಟ್ಟದಲ್ಲಿ ನೋಡಲ್ ಅಧಿಕಾರಿಯನ್ನು ನೇಮಕ ಮಾಡಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಸಮಿತಿಗಳನ್ನು ರಚನೆ ಮಾಡಲಾಗಿದೆ. ಕ್ಷೇತ್ರದ ಮಟ್ಟದಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಮಕ್ಕಳ ಮಾಹಿತಿಯನ್ನು ಹೊಂದಿರಬೇಕು. ಬಾಲ ಕಾರ್ಮಿಕ ಹಾಗೂ ಬಾಲ್ಯ ವಿವಾಹಗಳನ್ನು ತಡೆಯುವಲ್ಲಿ ಪ್ರಯತ್ನಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.
ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನದ ಅಂಗವಾಗಿ ನಗರದ ಹೊಳಲ್ಕೆರೆ ರಸ್ತೆಯ ಸಂಪಿಗೆ ಸಿದ್ದೇಶ್ವರ ಪ್ರೌಢಶಾಲೆಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಮೀಪದ ಒನಕೆ ಓಬವ್ವ ವೃತ್ತದವರೆಗೂ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು. ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿದರು. ಜಾಥಾವು ಸಿದ್ದೇಶ್ವರ ಪ್ರೌಢಶಾಲೆ ಆವರಣದಿಂದ ಪ್ರಾರಂಭವಾಗಿ ನೀಲಕಂಠೇಶ್ವರ ರಸ್ತೆ, ಗಾಂಧಿ ವೃತ್ತ, ಎಸ್.ಬಿ.ಐ ವೃತ್ತ, ಐ.ಬಿ.ರಸ್ತೆಯ ಮೂಲಕ ಒನಕೆ ಓಬವ್ವ ವೃತ್ತ ತಲುಪಿತು. ಓಬವ್ವ ವೃತ್ತದಲ್ಲಿ ವಿದ್ಯಾರ್ಥಿಗಳು ಮಾನವ ಸರಪಳಿ ರಚಿಸಿ, ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರ ಸೇವೆ ಪಡೆಯುವುದಿಲ್ಲ ಎಂದು ಪ್ರಮಾಣ ವಚನ ಸ್ವೀಕರಿಸಿದರು.
ವೇದಿಕೆ ಕಾರ್ಯಕ್ರಮದಲ್ಲಿ ವಿಶ್ರಾಂತ ಪ್ರಾಧ್ಯಾಪಕ ಡಾ.ನಟರಾಜ್ ಬಾಲ ಕಾರ್ಮಿಕ ನಿಷೇಧ ಕಾಯ್ದೆ ಕುರಿತು ಉಪನ್ಯಾಸ ನೀಡಿದರು. ಬಾಲಕಾರ್ಮಿಕ ನಿಷೇಧ ಕಾಯ್ದೆ ಕುರಿತು ಪ್ರೌಢಶಾಲೆ ಮಕ್ಕಳಿಗೆ ಏರ್ಪಡಿಸಲಾದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವಿರಿಗೆ ವೇದಿಕೆಯಲ್ಲಿ ನಗದು, ಪ್ರಶಸ್ತಿ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು.ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಕೆ.ತಾಜ್‌ಪೀರ್, ನಗರ ಸಭೆ ಅಧ್ಯಕ್ಷೆ ಬಿ.ಎನ್.ಸುಮಿತಾ ರಾಘವೇಂದ್ರ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಮಂಜುನಾಥ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಭಾರತಿ ಆರ್ ಬಣಕಾರ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸವಿತಾ, ಕಾರ್ಮಿಕ ಅಧಿಕಾರಿ ಅನಿಲ ಬಾಲಚಂದ್ರ ಬಗಟಿ, ಕಾರ್ಮಿಕ ನಿರೀಕ್ಷಕ ಪಿ.ಭೀಮೇಶ್, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ ಯೋಜನಾ ನಿರ್ದೇಶಕ ಪಿ.ಸತೀಶ್ ಕುಮಾರ್ ಇದ್ದರು.