.ಬಾಲ್ಯವಿವಾಹ ತಡೆಗ ಕಾವಲು ಪಡೆಗಳ ಬಲಪಡಿಸಬೇಕು

KannadaprabhaNewsNetwork |  
Published : Aug 01, 2025, 12:00 AM IST
ಸಿಕೆಬಿ-3  ನಗರದ ಕನ್ನಡ ಭವನದಲ್ಲಿ   ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ ಹಾಗೂ   ಬಾಲ್ಯ ವಿವಾಹ ನಿಷೇಧ ಕಾಯ್ದೆ, ಪೋಕ್ಸೋ ಕಾಯ್ದೆ ಮತ್ತು ಮಕ್ಕಳ ರಕ್ಷಣೆಯ ಕುರಿತು ಜಿಲ್ಲಾ ಮಟ್ಟದ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಉದ್ಘಾಟಿಸಿದರು | Kannada Prabha

ಸಾರಾಂಶ

ಮಾನವ ಕಳ್ಳಸಾಗಣೆ ಕುರಿತು ಗ್ರಾಮಾಂತರ ಪ್ರದೇಶಗಳಲ್ಲಿ ಅರಿವಿನ‌ ಕೊರತೆಯಿಂದಾಗಿ ಬಾಲ್ಯ ವಿವಾಹ ಮತ್ತು ಪೋಕ್ಸೋ ಪ್ರಕರಣಗಳ ಹೆಚ್ಚುತ್ತಿರುವುದು ಕಂಡು ಬಂದಿದೆ. ಈ ಬಗ್ಗೆ ಕಾನೂನಿನ ಅರಿವು ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಂಡು ವ್ಯಾಪಕ ಜಾಗೃತಿ‌ ಮೂಡಿಸುವ ಅಗತ್ಯವಿದೆ.

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ಜಿಲ್ಲೆಯಲ್ಲಿ ಕಳೆದ ವರ್ಷ ಬಾಲ್ಯ ವಿವಾಹ, ಪೋಕ್ಸೋ ಮತ್ತು ಮಾನವ ಕಳ್ಳ ಸಾಗಾಣಿಕೆ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡು ಬಂದಿದ್ದು, ಇವುಗಳೆಲ್ಲವನ್ನೂ ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಸಂಬಂಧಪಟ್ಟ ಕಾವಲು ಪಡೆ ಸಮಿತಿಗಳನ್ನು ಬಲಪಡಿಸುವ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದರು.

ನಗರದ ಕನ್ನಡ ಭವನದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ ಹಾಗೂ ಗ್ರಾಮ ಪಂಚಾಯಿತಿ ಮಟ್ಟದ ಮಹಿಳೆಯರು ಮತ್ತು ಮಕ್ಕಳ ರಕ್ಷಣೆಯ ಕಾವಲು ಸಮಿತಿ ಅಧ್ಯಕ್ಷರು, ಸದಸ್ಯರು ಮತ್ತು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಬಾಲ್ಯ ವಿವಾಹ ನಿಷೇಧ ಕಾಯ್ದೆ, ಪೋಕ್ಸೋ ಕಾಯ್ದೆ ಮತ್ತು ಮಕ್ಕಳ ರಕ್ಷಣೆಯ ಕುರಿತು ಜಿಲ್ಲಾ ಮಟ್ಟದ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಅರಿವಿನ ಕೊರತೆ ಕಾರಣ

ಮುಖ್ಯವಾಗಿ ಗ್ರಾಮಾಂತರ ಪ್ರದೇಶಗಳಲ್ಲಿ ಅರಿವಿನ‌ ಕೊರತೆಯಿಂದಾಗಿ ಬಾಲ್ಯ ವಿವಾಹ ಮತ್ತು ಪೋಕ್ಸೋ ಪ್ರಕರಣಗಳ ಹೆಚ್ಚುತ್ತಿರುವುದು ಕಂಡು ಬಂದಿದೆ. ಈ ಬಗ್ಗೆ ಕಾನೂನಿನ ಅರಿವು ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಂಡು ವ್ಯಾಪಕ ಜಾಗೃತಿ‌ ಮೂಡಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ರಚನೆಯಾಗಿರುವ ಕಾವಲು ಸಮಿತಿಗಳು ಮತ್ತಷ್ಟು ಕ್ರಿಯಾಶೀಲವಾಗಿ ಮತ್ತು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಬೇಕು. ಶಾಲೆಗಳ ಮುಖ್ಯಸ್ಥರು, ಶಿಕ್ಷಕರು ಅಂತ ಮಕ್ಕಳ ಮೇಲೆ ಹೆಚ್ಚಿನ‌ ನಿಗಾ ಇಟ್ಟು ಮಕ್ಕಳ ಹಕ್ಕುಗಳನ್ನು ರಕ್ಷಿಸಬೇಕು ಎಂದರು. ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಶಿಲ್ಪಾ ಅವರು ಬಾಲ್ಯ ವಿವಾಹ ನಿಯಂತ್ರಣ ಕುರಿತು ಜಾಗೃತಿ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.

ಆಧಾರ್ ಕಾರ್ಡ್ ವಿತರಣೆ

ಈ ವೇಳೆ ನಿರ್ಗತಿಕರಿಗೆ ಮತ್ತು ಅನಾಥ ಮಕ್ಕಳಿಗೆ ಆಧಾರ್ ಕಾರ್ಡ್ ಮತ್ತು ಜನನ ಪ್ರಮಾಣ ಪತ್ರ ವಿತರಿಸಲಾಯಿತು ಬಾಲ್ಯ ವಿವಾಹ ನಿಯಂತ್ರಣದ ಕುರಿತು ಜಾಗೃತಿ ಗೀತೆಗಳನ್ನು ರಚಿಸಿ ವ್ಯಾಪಕವಾಗಿ ಗಾಯನದ ಮೂಲಕ ಅರಿವು ಮೂಡಿಸುತ್ತಿರುವ ರಾಜ್ಯ ಪ್ರಶಸ್ತಿ ಪುರಸ್ಕೃತ ಗಾನ ಅಶ್ವತ್ ರವರಿಗೆ ಸನ್ಮಾನ ಮಾಡಲಾಯಿತು.

ಈ ವೇಳೆ ಬಾಲ್ಯ ವಿವಾಹ ನಿಯಂತ್ರಣದ ಜಾಗೃತಿ ಕುರಿತ ಕರಪತ್ರಗಳು, ಬಿತ್ತಿ ಪತ್ರಗಳು ಹಾಗೂ ಗಾನ ಅಶ್ವತ್ ರವರು ಗಾಯನ ಮಾಡಿರುವ ಧ್ವನಿ ಸುರಳಿಯನ್ನು ಗಣ್ಯರು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ, ಅಪರ ಜಿಲ್ಲಾಧಿಕಾರಿ ಡಾ. ಎನ್. ಭಾಸ್ಕರ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಕೆ.ವಿ. ಅಭಿಲಾಷ್, ಅಪರ ಪೊಲೀಸ್ ಅಧೀಕ್ಷಕ ಜಗನ್ನಾಥ್ ರೈ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಆರ್.ವೆಂಕಟೇಶರೆಡ್ಡಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಹೇಶ್ ಕುಮಾರ್, ಮಕ್ಕಳ ರಕ್ಷಣಾಧಿಕಾರಿ ಬಿ. ನೌತಾಜ್ ಹಾಗೂ ವಿವಿಧ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಸದಸ್ಯರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಬಾಲ್ಯ ವಿವಾಹ ತಡೆ ಕಾವಲು ಪಡೆಯ ಸದಸ್ಯರು, ಪದಾಧಿಕಾರಿಗಳು, ಸರ್ಕಾರೇತರ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಇದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ