ಬಾಲ್ಯ ವಿವಾಹ, ಲೈಂಗಿಕ ದೌರ್ಜನ್ಯ ಪ್ರಕರಣ ಹೆಚ್ಚಳ: ಆತಂಕ

KannadaprabhaNewsNetwork |  
Published : Feb 18, 2026, 01:45 AM IST
ವೇದಿಕೆಯಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವಕೀಲರಾದ ಮನು, ಡಿವೈಎಸ್ಪಿ ಗಂಗಾಧರಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಧರಣಿ ಕುಮಾರ್ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ದಿಲಿಪ್ ಕೆ.ಜಿ. ಉಪಸ್ಥಿತರಿದ್ದರು. | Kannada Prabha

ಸಾರಾಂಶ

ಶಾಲೆ, ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮಗಳು, ಗ್ರಾಮ ಸಭೆಗಳು, ಮಕ್ಕಳ ಗ್ರಾಮಸಭೆಗಳು ಹಾಗೂ ಸಂವಾದ ಕಾರ್ಯಕ್ರಮಗಳನ್ನು ಆಯೋಜಿಸಿ ಬಾಲ್ಯ ವಿವಾಹ ನಿಷೇಧ ಕಾಯ್ದೆ, ಬಾಲ ನ್ಯಾಯ ಕಾಯ್ದೆ, ಮಕ್ಕಳ ಹಕ್ಕುಗಳು ಮತ್ತು ಪೋಕ್ಸೋ ಕಾಯ್ದೆಗಳ ಕುರಿತು ಅರಿವು ಮೂಡಿಸಬೇಕು.

ಕನ್ನಡಪ್ರಭ ವಾರ್ತೆ ಹಾಸನ

ಬಾಲ್ಯ ವಿವಾಹ ಹಾಗೂ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದ್ದು, ಜಾಗೃತಿ ಮೂಡಿಸುವ ಜವಾಬ್ಧಾರಿ ಪಿಡಿಒಗಳ ಮೇಲಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಆರ್. ಪೂರ್ಣಿಮಾ ತಿಳಿಸಿದರು.

ನಗರದ ಅಂಬೇಡ್ಕರ್ ಭವನದಲ್ಲಿ ಜಿಪಂ, ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಮಕ್ಕಳ ರಕ್ಷಣಾ ಘಟಕದ ಸಂಯುಕ್ತ ಆಶ್ರಯದಲ್ಲಿ ಮಂಗಳವಾರದಂದು ಬೆಳಗ್ಗೆ ಹಮ್ಮಿಕೊಳ್ಳಲಾಗಿದ್ದ ಬಾಲ್ಯ ವಿವಾಹ ಮುಕ್ತ ಭಾರತ ಅಭಿಯಾನದ ಅಂಗವಾಗಿ ‘ಬಾಲ್ಯ ವಿವಾಹ ಮುಕ್ತ ಹಾಸನ’ ಗುರಿ ಸಾಧಿಸುವ ನಿಟ್ಟಿನಲ್ಲಿ ಮಂಗಳವಾರದಂದು ಹಮ್ಮಿಕೊಳ್ಳಲಾಗಿದ್ದ ಎಲ್ಲಾ ಪಿಡಿಒಗಳಿಗೆ ಕಾನೂನು ಅರಿವು ಮತ್ತು ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಬಾಲ್ಯ ವಿವಾಹ ಹಾಗೂ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದ ಅವರು, ಗ್ರಾಮ ಮಟ್ಟದಲ್ಲೇ ಜಾಗೃತಿ ಮೂಡಿಸುವ ಜವಾಬ್ದಾರಿ ಪಿಡಿಒಗಳ ಮೇಲಿದೆ ಎಂದು ಹೇಳಿದರು.

ಶಾಲೆ, ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮಗಳು, ಗ್ರಾಮ ಸಭೆಗಳು, ಮಕ್ಕಳ ಗ್ರಾಮಸಭೆಗಳು ಹಾಗೂ ಸಂವಾದ ಕಾರ್ಯಕ್ರಮಗಳನ್ನು ಆಯೋಜಿಸಿ ಬಾಲ್ಯ ವಿವಾಹ ನಿಷೇಧ ಕಾಯ್ದೆ, ಬಾಲ ನ್ಯಾಯ ಕಾಯ್ದೆ, ಮಕ್ಕಳ ಹಕ್ಕುಗಳು ಮತ್ತು ಪೋಕ್ಸೋ ಕಾಯ್ದೆಗಳ ಕುರಿತು ಅರಿವು ಮೂಡಿಸಬೇಕು ಎಂದು ಸೂಚಿಸಿದರು. ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಯುವಕರೇ ಹೆಚ್ಚಿನ ಪ್ರಮಾಣದಲ್ಲಿ ಭಾಗಿಯಾಗುತ್ತಿರುವುದು ಚಿಂತಾಜನಕ. ಕಾನೂನು ಅರಿವಿಲ್ಲದೆ ಪ್ರೀತಿ, ಪ್ರೇಮದ ಹೆಸರಿನಲ್ಲಿ ಮನೆ ಬಿಟ್ಟು ಹೋಗುವುದು, ದೈಹಿಕ ಸಂಪರ್ಕ ಹೊಂದುವುದು ಮುಂತಾದ ಘಟನೆಗಳು ನಡೆಯುತ್ತಿವೆ. ಇದರಿಂದ ಬಾಲ್ಯ ವಿವಾಹ, ಪೋಕ್ಸೋ

ಪ್ರಕರಣಗಳು ಹಾಗೂ ಬಾಲ ಗರ್ಭಿಣಿಯರ ಸಂಖ್ಯೆ ಹೆಚ್ಚುತ್ತಿದೆ. ಯುವಜನತೆಗೆ ಕಾನೂನು ತಿಳಿವಳಿಕೆ ನೀಡುವುದು ತುರ್ತು ಅಗತ್ಯವಾಗಿದೆ ಎಂದು ಒತ್ತಿ ಹೇಳಿದರು.

ಪ್ರಾಸ್ತಾವಿಕವಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕೆ.ಜಿ. ದಿಲೀಪ್ ಮಾತನಾಡಿ, ಹಾಸನ ಜಿಲ್ಲೆಯಲ್ಲಿ ಮಕ್ಕಳ ಸಂರಕ್ಷಣೆಗೆ ಪ್ರತ್ಯೇಕ ವ್ಯವಸ್ಥೆ ಇರುವುದನ್ನು ತಿಳಿಸಿ, ಮಕ್ಕಳ ಸಹಾಯವಾಣಿ 1098 ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು.

ಮಕ್ಕಳ ಮೇಲಿನ ಯಾವುದೇ ದೌರ್ಜನ್ಯ, ಕಿರುಕುಳ ಅಥವಾ ಹಿಂಸೆ ಕಂಡುಬಂದಲ್ಲಿ ತಕ್ಷಣ 1098ಕ್ಕೆ ಕರೆ ಮಾಡಿ ಮಾಹಿತಿ ನೀಡುವಂತೆ ಮನವಿ ಮಾಡಿದರು.

ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸ್ಥಳೀಯ ಮಟ್ಟದಲ್ಲಿ ಮಕ್ಕಳ ಸಮಸ್ಯೆಗಳ ಬಗ್ಗೆ ಮುತುವರ್ಜಿಯಿಂದ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಕಾರ್ಯಕ್ರಮದ ನಿರ್ವಹಣೆಯನ್ನು ರಕ್ಷಣಾಧಿಕಾರಿ ಕಾಂತರಾಜು ವಹಿಸಿದ್ದರು. ಜಿಲ್ಲೆಯಾದ್ಯಂತ ಬಾಲ್ಯ ವಿವಾಹ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ಸಮಗ್ರ ಜಾಗೃತಿ ಮೂಡಿಸುವ ದಿಸೆಯಲ್ಲಿ ಈ ತರಬೇತಿ ಕಾರ್ಯಾಗಾರ ಮಹತ್ವದ ಹೆಜ್ಜೆಯಾಗಿ ಪರಿಣಮಿಸಿದೆ ಎಂದರು.

ವೇದಿಕೆಯಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವಕೀಲರಾದ ಮನು, ಡಿವೈಎಸ್ಪಿ ಗಂಗಾಧರಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಧರಣಿ ಕುಮಾರ್ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ದಿಲಿಪ್ ಕೆ.ಜಿ. ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಾಲಿಕೆ ವಾರ್ಡ್ ರಚನೆ ಅವೈಜ್ಞಾನಿಕ: ಪಾಲಿಕೆ ಸದಸ್ಯರ ಬೇಸರ
ಫೆ.24ರಿಂದ ಕೋಟೆ ಶ್ರೀ ಮಾರಿಕಾಂಬ ಜಾತ್ರೆ: ಎಸ್.ಕೆ. ಮರಿಯಪ್ಪ ಮಾಹಿತಿ