ಮಕ್ಕಳ ಹಕ್ಕು ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ

KannadaprabhaNewsNetwork |  
Published : Dec 04, 2024, 12:34 AM IST
ಕಾರ್ಯಕ್ರಮವನ್ನು ಅತಿಥಿಗಳು ಉದ್ಘಾಟಿಸಿದರು.  | Kannada Prabha

ಸಾರಾಂಶ

ಮಕ್ಕಳೊಂದಿಗೆ ಸಮಾಲೋಚನೆ ನಡೆಸಿ ಅವರ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು

ಗದಗ: ಮಕ್ಕಳ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ ಆಗಿದೆ, ಈ ನಿಟ್ಟಿನಲ್ಲಿ ಮಕ್ಕಳ ರಕ್ಷಣಾ ಕಾರ್ಯದಲ್ಲಿ ಆಸಕ್ತಿ ವಹಿಸಿ ಕರ್ತವ್ಯಕ್ಕೆ ಚ್ಯುತಿಯಾಗದಂತೆ ಶ್ರದ್ಧೆಯಿಂದ ಕೆಲಸ ನಿರ್ವಹಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ರಾಮತ್ನಾಳ ಹೇಳಿದರು.

ಅವರು ಮಂಗಳವಾರ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ದಲ್ಲಿ ಗದಗ ಜಿಲ್ಲಾ ಆಡಳಿತ, ಜಿಪಂ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿ, ಸಿಬ್ಬಂದಿಗಳಿಗೆ ಬಾಲ್ಯವಿವಾಹ, ಫೋಕ್ಸೋ, ಭ್ರೂಣ ಹತ್ಯೆ, ಮಕ್ಕಳ ಸಾಗಾಣಿಕೆ ಮತ್ತು ಮಾರಾಟ ಹಾಗೂ ವಲಸೆ ಕುಟುಂಬದ ಮಕ್ಕಳ ರಕ್ಷಣೆ ಕುರಿತು ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಶಾಲೆ ಹಾಗೂ ಪಿಯು ಕಾಲೇಜುಗಳಲ್ಲಿ ಶಿಕ್ಷಕರು ವಿದ್ಯಾರ್ಥಿಗಳಿಗೆ ಮೌಲ್ಯಯುತ ಶಿಕ್ಷಣ ನೀಡಬೇಕು. ಮಕ್ಕಳೊಂದಿಗೆ ಸಮಾಲೋಚನೆ ನಡೆಸಿ ಅವರ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು. ಅಂತಹ ಮಕ್ಕಳು ಭವಿಷ್ಯದಲ್ಲಿ ಉನ್ನತ ಹುದ್ದೆ ಅಲಂಕರಿಸಲು ಸಾಧ್ಯವಾಗುತ್ತದೆ. ಬಾಲ್ಯ ವಿವಾಹದಿಂದ ಉಂಟಾಗುವ ದುಷ್ಪರಿಣಾಮದ ಕುರಿತು ಮಕ್ಕಳಿಗೆ ತಿಳಿವಳಿಕೆ ನೀಡಬೇಕು.

ಬಾಲ್ಯ ವಿವಾಹದ ನಿಷೇಧ ಕಾಯ್ದೆ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಉಧಾಸೀನ ಮಾಡದೇ ಇಲಾಖೆಗಳ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಸಮಾಜಘಾತುಕ ಚಟುವಟಿಕೆಗಳಲ್ಲಿ ತೊಡಗಿಸಲು ಮಕ್ಕಳ ಸಾಗಾಣಿಕೆ ಮತ್ತು ಮಾರಾಟ ಮಾಡಲಾಗುತ್ತದೆ. ಮಕ್ಕಳನ್ನು ಇಂತಹ ಅಪಾಯಕಾರಿ ಸನ್ನಿವೇಶದಿಂದ ರಕ್ಷಣೆ ಮಾಡುವುದು ಎಲ್ಲರ ಜವಾಬ್ದಾರಿಯಾಗಿದೆ. ಮಕ್ಕಳ ಸಹಾಯವಾಣಿ ಸಂಖ್ಯೆ 1098 ಕುರಿತು ಜಾಗೃತಿ ಮೂಡಿಸಬೇಕು. ಆರ್.ಟಿ.ಇ.ಕಾಯ್ದೆ ಸರ್ಕಾರದ ಮಹತ್ತರ ಕಾಯ್ದೆಯಾಗಿದ್ದು ಶಾಲೆಯಲ್ಲಿ ಮಕ್ಕಳ ಹಾಜರಾತಿ ಕಡೆಗೆ ಶಿಕ್ಷಕರು ಹಾಗೂ ಪ್ರಾಚಾರ್ಯರು ಗಮನ ಹರಿಸಬೇಕು ಎಂದರು.

ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಂ.ಬಿ. ಸಂಕದ ಮಾತನಾಡಿ, ಇಲಾಖೆಯ ಅಧಿಕಾರಿಗಳು ಮಕ್ಕಳ ರಕ್ಷಣಾ ಕಾರ್ಯದಲ್ಲಿ ಮಾನವೀಯತೆಯಿಂದ ಕೆಲಸ ನಿರ್ವಹಿಸಬೇಕಾದ ಅಗತ್ಯತೆಯಿದೆ. ಪೊಲೀಸ್‌ ಇಲಾಖೆಯಿಂದ ಪ್ರತಿ ಶನಿವಾರ ಬಾಲ್ಯ ವಿವಾಹ ನಿಷೇಧ ಕಾಯ್ದೆ ಕುರಿತಂತೆ ಅರಿವು ಕಾರ್ಯಕ್ರಮ ಮಾಡಲಾಗುತ್ತಿದೆ ಎಂದರು.

ವಕೀಲ ಜೆ.ಸಿ.ರೇಶ್ಮಿ ಬಾಲ್ಯ ವಿವಾಹದಂತಹ ಅನಿಷ್ಠ ಪಿಡುಗು ತಡೆಗಟ್ಟಲು ವಿವಿಧ ಇಲಾಖೆಗಳು ನಿರ್ಲಕ್ಷ್ಯ ಮಾಡಬಾರದು. ಕಾನೂನಿನಲ್ಲಿರುವ ಅವಕಾಶಗಳು ಗೊತ್ತಿದ್ದರೂ ಸಹಿತ ಅವುಗಳ ಸದ್ಭಳಕೆ ಮಾಡಿಕೊಳ್ಳುವ ಮನೋಭಾವ ಜನರಿಗೆ ಇರಬೇಕು. ಕಾಯ್ದೆ ಜಾರಿ ಮಾಡಿದ ನಂತರ ಅದರ ಪರಿಣಾಮಕಾರಿ ಅನುಷ್ಠಾನವೂ ಸಹ ಮುಖ್ಯವಾಗಿದೆ ಎಂದರು.

ವಕೀಲ ಗುರುರಾಜ ಗೌರಿ ಫೋಕ್ಸೋ ಕಾಯ್ದೆ 2012 ಕುರಿತು ಉಪನ್ಯಾಸ ನೀಡಿದರು. ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ. ಮಕ್ಕಳ ರಕ್ಷಣಾ ಆಯೋಗದ ಮಾಹಿತಿ ಫಲಕ ಉದ್ಘಾಟಿಸಿದರು. ಕಾರ್ಯಾಗಾರದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್.ಬಿ. ಮಸನಾಯಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ರಾಧಾ ಮಣ್ಣೂರ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿ ಹಾಗೂ ಸಿಬ್ಬಂದಿಗಳು ಹಾಜರಿದ್ದರು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಫೀಕಾ ಹಳ್ಳೂರ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಮಲ್ಲಪ್ಪ ಹೊಸಳ್ಳಿ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!