ಕನ್ನಡಪ್ರಭ ವಾರ್ತೆ ಹಾಸನ
ಬೇಸಿಗೆ ರಜೆ ಮುಗಿಸಿ ಮತ್ತೆ ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳಲ್ಲಿ ಉತ್ಸಾಹ ಮನೆಮಾಡಿತ್ತು. ಶಾಲಾ ಆವರಣವನ್ನು ಅಲಂಕರಿಸಲಾಗಿದ್ದು, ಶಿಕ್ಷಕರು ಹಾಗೂ ಸಾರ್ವಜನಿಕ ಪ್ರತಿನಿಧಿಗಳು ಮಕ್ಕಳನ್ನು ಪ್ರೀತಿಯಿಂದ ಬರಮಾಡಿಕೊಂಡರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳು ಹಾಗೂ ಶೈಕ್ಷಣಿಕ ಸಾಮಗ್ರಿಗಳ ವಿತರಣೆಯೂ ನಡೆಯಿತು.ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಸ್ವರೂಪ್ ಪ್ರಕಾಶ್, ಶಿಕ್ಷಣವು ಪ್ರತಿಯೊಬ್ಬ ಮಗುವಿನ ಜೀವನ ರೂಪಿಸುವ ಪ್ರಮುಖ ಸಾಧನವಾಗಿದೆ. ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವಂತೆ ರಾಜ್ಯ ಸರ್ಕಾರ ಹಲವು ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿದ್ದು, ವಿದ್ಯಾರ್ಥಿಗಳು ಅವುಗಳ ಸದುಪಯೋಗ ಪಡೆದುಕೊಂಡು ಉತ್ತಮ ಶಿಕ್ಷಣ ಪಡೆಯಬೇಕು ಎಂದು ಕರೆ ನೀಡಿದರು. ಇಂದಿನ ಮಕ್ಕಳು ನಾಳಿನ ದೇಶದ ಭವಿಷ್ಯ. ಶಿಸ್ತು, ಪರಿಶ್ರಮ ಹಾಗೂ ಗುರಿಯೊಂದಿಗೆ ವಿದ್ಯಾಭ್ಯಾಸ ಮಾಡಿದರೆ ಜೀವನದಲ್ಲಿ ಉನ್ನತ ಸ್ಥಾನ ತಲುಪಬಹುದು. ಗ್ರಾಮೀಣ ಹಾಗೂ ನಗರ ಪ್ರದೇಶದ ಎಲ್ಲ ವಿದ್ಯಾರ್ಥಿಗಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂಬುದು ಸರ್ಕಾರದ ಉದ್ದೇಶವಾಗಿದೆ ಎಂದು ಹೇಳಿದರು. ಮಕ್ಕಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಅಗತ್ಯ ಮೂಲಸೌಕರ್ಯ, ಶಾಲಾ ಅಭಿವೃದ್ಧಿ ಹಾಗೂ ಶಿಕ್ಷಣಕ್ಕೆ ಸಂಬಂಧಿಸಿದ ಎಲ್ಲ ರೀತಿಯ ಸಹಕಾರ ನೀಡಲು ತಾನು ಸದಾ ಸಿದ್ಧನಿದ್ದೇನೆ ಎಂದು ಭರವಸೆ ನೀಡಿದರು. ಶಿಕ್ಷಕರು ವಿದ್ಯಾರ್ಥಿಗಳ ಪ್ರತಿಭೆ ಗುರುತಿಸಿ ಉತ್ತಮ ಮಾರ್ಗದರ್ಶನ ನೀಡಬೇಕು ಎಂದೂ ಸಲಹೆ ನೀಡಿದರು.ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ, ಜನಪ್ರತಿನಿಧಿಗಳು, ಪೋಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಶಾಲಾ ಆರಂಭದ ಮೊದಲ ದಿನವೇ ಮಕ್ಕಳಿಗೆ ಆತ್ಮೀಯ ಸ್ವಾಗತ ದೊರೆತಿದ್ದು, ವಿದ್ಯಾರ್ಥಿಗಳ ಮುಖದಲ್ಲಿ ಸಂತಸ ಮೂಡಿಸಿತು.