ಮಕ್ಕಳ ಹಕ್ಕುಗಳ ರಕ್ಷಣೆ ಜವಾಬ್ದಾರಿ ಅರಿತು ಅನುಷ್ಠಾನಗೊಳಿಸಿ: ಜಿಪಂ ಸಿಇಒ ಮಹಮ್ಮದ್ ಹಾರೀಸ್ ಸುಮೈರ್

KannadaprabhaNewsNetwork |  
Published : Sep 25, 2025, 01:02 AM IST
ಬಳ್ಳಾರಿ ಜಿ.ಪಂ.ಸಭಾಂಗಣದಲ್ಲಿ ಮಹಿಳೆಯರ ಮತ್ತು ಮಕ್ಕಳ ರಕ್ಷಣೆಯ ಕಾವಲು ಸಮಿತಿ” ಕುರಿತು ಏರ್ಪಡಿಸಿದ್ದ ಒಂದು ದಿನ ತರಬೇತಿ ಕಾರ್ಯಾಗಾರದಲ್ಲಿ ಗ್ರಾಮ ಪಂಚಾಯತಿ ಮಹಿಳಾ ಅಧ್ಯಕ್ಷರು ಭಾಗವಹಿಸಿದ್ದರು.  | Kannada Prabha

ಸಾರಾಂಶ

ದೇಶದ ಪ್ರತಿ ಮಗುವಿನ ಕಾನೂನಾತ್ಮಕ ಹಕ್ಕುಗಳ ರಕ್ಷಣೆಯ ಹೊಣೆ ಸರ್ಕಾರದ್ದಾಗಿದೆ.

ಬಳ್ಳಾರಿ: ದೇಶದ ಪ್ರತಿ ಮಗುವಿನ ಕಾನೂನಾತ್ಮಕ ಹಕ್ಕುಗಳ ರಕ್ಷಣೆಯ ಹೊಣೆ ಸರ್ಕಾರದ್ದಾಗಿದೆ. ಅಧೀನದ ಅಧಿಕಾರಿಗಳು ಗ್ರಾಪಂ, ತಾಪಂ ಮಟ್ಟದ ಅಧ್ಯಕ್ಷರು ಸೇರಿದಂತೆ ಪ್ರತಿಯೊಬ್ಬರೂ ಮಕ್ಕಳ ಹಕ್ಕುಗಳ ರಕ್ಷಣೆಯ ಜವಾಬ್ದಾರಿ ಅರಿತು ಅನುಷ್ಠಾನಕ್ಕೆ ಮುಂದಾಗಬೇಕು ಎಂದು ಜಿಪಂ ಸಿಇಒ ಮಹಮ್ಮದ್ ಹಾರೀಸ್ ಸುಮೈರ್ ತಿಳಿಸಿದರು.

ಸೋಮವಾರ ನಗರದ ಜಿಪಂನ ಹೊಸ ನಜೀರಸಾಬ್ ಸಭಾಂಗಣದಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳ ಸಹಯೋಗದಲ್ಲಿ ಪಿಡಿಒಗಳು, ಗ್ರಾಪಂ ಮಹಿಳಾ ಅಧ್ಯಕ್ಷರು, ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳಿಗೆ “ಮಹಿಳೆಯರ ಮತ್ತು ಮಕ್ಕಳ ರಕ್ಷಣೆಯ ಕಾವಲು ಸಮಿತಿ” ಕುರಿತು ಏರ್ಪಡಿಸಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಅಧಿಕಾರಿಗಳು ಹೆಣ್ಣು ಮಕ್ಕಳನ್ನು ರಕ್ಷಿಸುವ ನಿಟ್ಟಿನಲ್ಲಿ ಪೋಕ್ಸೋ, ಬಾಲ್ಯವಿವಾಹ, ಬಾಲ ಗರ್ಭಿಣಿಯಂತಹ ಪ್ರಕರಣಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಪಂಚಾಯಿತಿ ಮಟ್ಟದ ಕಾವಲು ಸಮಿತಿ ಮೂಲಕ ಕ್ರಮ ವಹಿಸಲಾಗಿದೆ.

ಪ್ರತೀ ಗ್ರಾಪಂ ಮಟ್ಟದಲ್ಲಿ ಮಕ್ಕಳ ಹಕ್ಕು ಕಾವಲು ಸಮಿತಿ ಸಮರ್ಥವಾಗಿ ಕಾರ್ಯ ನಿರ್ವಹಿಸಿದರೆ ಮಾತ್ರ ಮಕ್ಕಳ ಮೇಲಿನ ದೌರ್ಜನ್ಯಗಳಿಗೆ ಕಡಿವಾಣ ಬೀಳಲಿದೆ ಎಂದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ರಾಜೇಶ್ ಎನ್.ಹೊಸಮನೆ ಮಾತನಾಡಿ, ಬೆಳೆಯುವ ಮಗುವಿಗೆ ಸುರಕ್ಷಿತ ವಾತಾವರಣ ಕಲ್ಪಿಸಿ ಕೊಡುವುದು ನಮ್ಮೆಲ್ಲರ ಕರ್ತವ್ಯ ಎಂದು ತಿಳಿಸಿದರು.

ಜಿಲ್ಲೆಯಲ್ಲಿ (ಏಪ್ರಿಲ್ ನಿಂದ ಇಲ್ಲಿಯವರೆಗೆ) 83 ಬಾಲ್ಯವಿವಾಹ ನಡೆದಿವೆ. ಅದರಲ್ಲಿ 64 ಬಾಲ್ಯವಿವಾಹಗಳನ್ನು ತಡೆಯಲಾಗಿದೆ. 19 ಪ್ರಕರಣ ಬಾಲ್ಯವಿವಾಹ ಮತ್ತು ಪೋಕ್ಸೋ ಒಳಗೊಂಡಿದ್ದು, 9 ಪ್ರಕರಣಗಳಿಗೆ ಎಫ್‌ಐಆರ್ ದಾಖಲಿಸಲಾಗಿದೆ. 10 ಪ್ರಕರಣ ಎಫ್‌ಐಆರ್ ದಾಖಲಿಸಲು ಬಾಕಿ ಇವೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸುಭದ್ರಾ ದೇವಿ ತಿಳಿಸಿದರು.

ಕಾರ್ಯಾಗಾರದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಉಚಿತ ಕಾನೂನು ಸೇವೆಯ ಸಹಾಯವಾಣಿ ಸಂಖ್ಯೆ 15100 ಕುರಿತ ಭಿತ್ತಿಪತ್ರ ಬಿಡುಗಡೆ ಮಾಡಲಾಯಿತು.

ಕೊಪ್ಪಳದ ಮಕ್ಕಳ ಸಂರಕ್ಷಣಾ ಯೋಜನೆಯ ಯುನಿಸೆಫ್ ಪ್ರಾದೇಶಿಕ ಸಂಯೋಜಕ ಡಾ.ರಾಘವೇಂದ್ರ ಭಟ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ‘ಮಹಿಳೆಯರ ಮತ್ತು ಮಕ್ಕಳ ರಕ್ಷಣೆಯ ಕಾವಲು ಸಮಿತಿ ಹಾಗೂ ಬಾಲನ್ಯಾಯ ಕಾಯ್ದೆ, ಬಾಲ್ಯವಿವಾಹ ನಿಷೇಧ ಕಾಯ್ದೆ, ಪೋಕ್ಸೋ ಕಾಯ್ದೆ’ ಕುರಿತು ಸವಿವರವಾಗಿ ತಿಳಿಸಿಕೊಟ್ಟರು.

ಎಎಸ್ಪಿ ನವೀನಕುಮಾರ್, ಜಿಪಂನ ಉಪ ಕಾರ್ಯದರ್ಶಿ ಶಶಿಕಾಂತ ಶಿವಪೂರೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಮಕೃಷ್ಣ ನಾಯಕ, ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯರಾದ ಕಲಾವತಿ ಸೇರಿದಂತೆ ವಿವಿಧ ಗ್ರಾಪಂ ಮಹಿಳಾ ಅಧ್ಯಕ್ಷರು, ತಾಪಂ ಇಒ, ಗ್ರಾಪಂ ಪಿಡಿಒ ಅಧಿಕಾರಿಗಳು ಇದ್ದರು.

ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಮಕ್ಕಳ ರಕ್ಷಣಾಧಿಕಾರಿ ದೊಡ್ಡನಗೌಡ್ರು ಮಂಜುನಾಥ ಕಾರ್ಯಾಗಾರ ನಿರೂಪಿಸಿದರು. ಮಕ್ಕಳ ರಕ್ಷಣಾಧಿಕಾರಿ ಚನ್ನಬಸಪ್ಪ ಪಾಟೀಲ್ ಸ್ವಾಗತಿಸಿದರು. ಕಾನೂನು ಪರಿವೀಕ್ಷಣಾಧಿಕಾರಿ ಈಶ್ವರ್ ರಾವ್.ಸಿ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ