ಮಕ್ಕಳ ಭವಿಷ್ಯ ಶಿಕ್ಷಕರ ಕೈಯಲ್ಲಿದೆ: ರಾಘವೇಂದ್ರ ಹಿಟ್ನಾಳ್

KannadaprabhaNewsNetwork |  
Published : Sep 06, 2024, 01:10 AM IST
5ಕೆಪಿಎಳ್25 ಕೊಪ್ಪಳ  ನಗರದ ಸಾಹಿತ್ಯ ಭವನದಲ್ಲಿ ಹಮ್ಮಿಕೊಳ್ಳಾಗಿದ್ದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಮತ್ತು ಜಿಲ್ಲಾ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿ ಪ್ರದಾನ ಸಮಾರಂಭ | Kannada Prabha

ಸಾರಾಂಶ

ಮಕ್ಕಳು ಮನೆಯಲ್ಲಿರುವುದಕ್ಕಿಂತ ಶಾಲೆಯಲ್ಲಿ ಇರುವುದೇ ಹೆಚ್ಚು. ಪಾಲಕರ ಮಾತಿಗಿಂತ ಶಿಕ್ಷಕರ ಮಾತನ್ನೇ ಹೆಚ್ಚು ಕೇಳುತ್ತಾರೆ. ಹೀಗಾಗಿ, ಮಕ್ಕಳ ಭವಿಷ್ಯ ಶಿಕ್ಷಕರ ಕೈಯಲ್ಲಿದೆ.

ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ, ಜಿಲ್ಲಾ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶಾಸಕ

ಕನ್ನಡಪ್ರಭ ವಾರ್ತೆ ಕೊಪ್ಪಳ

ಮಕ್ಕಳು ಮನೆಯಲ್ಲಿರುವುದಕ್ಕಿಂತ ಶಾಲೆಯಲ್ಲಿ ಇರುವುದೇ ಹೆಚ್ಚು. ಪಾಲಕರ ಮಾತಿಗಿಂತ ಶಿಕ್ಷಕರ ಮಾತನ್ನೇ ಹೆಚ್ಚು ಕೇಳುತ್ತಾರೆ. ಹೀಗಾಗಿ, ಮಕ್ಕಳ ಭವಿಷ್ಯ ಶಿಕ್ಷಕರ ಕೈಯಲ್ಲಿದೆ ಎಂದು ಶಾಸಕ ಕೆ.ರಾಘವೇಂದ್ರ ಹಿಟ್ನಾಳ್ ಹೇಳಿದರು.

ಜಿಲ್ಲಾಡಳಿತ, ಜಿಪಂ, ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ, ಬೆಂಗಳೂರು ಹಾಗೂ ಶಾಲಾ ಶಿಕ್ಷಣ ಇಲಾಖೆ, ಕೊಪ್ಪಳ ಇವುಗಳ ಸಹಯೋಗದಲ್ಲಿ ನಗರದ ಸಾಹಿತ್ಯ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಮತ್ತು ಜಿಲ್ಲಾ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಶಿಕ್ಷಕರು ದೇಶದ ನಿರ್ಮಾಪಕರಾಗಿದ್ದಾರೆ. ಡಾ. ಸರ್ವಪಲ್ಲಿ ರಾಧಕೃಷ್ಣನ್ ದೇಶದ ರಾಷ್ಟ್ರಪತಿಗಳು, ಉಪರಾಷ್ಟ್ರಪತಿಗಳಾಗಿ ಅಪಾರ ಕೊಡುಗೆ ನೀಡಿದ್ದಾರೆ. ಕಲ್ಯಾಣ ಕರ್ನಾಟಕ ಭಾಗಕ್ಕೆ 371ಜೆ ವಿಶೇಷ ಸ್ಥಾನ ಸಿಕ್ಕಿದ್ದು, ಈ ಭಾಗದ ಜನರಿಗೆ ಸರ್ಕಾರಗಳ ಯೋಜನೆಗಳು, ಶಿಕ್ಷಣಕ್ಕಾಗಿ ವಿಶೇಷ ಸೌಲಭ್ಯಗಳು, ಇತರ ಅವಕಾಶಗಳು ಸಿಗಲಿವೆ. ಇದಕ್ಕಾಗಿ ಹಲವಾರು ನಾಯಕರ ಪರಿಶ್ರಮ ಅಡಗಿದೆ. ಅದರ ಸದ್ಬಳಕೆ ಆಗಬೇಕು. ಈ ಬಾರಿಯ ಜಿಲ್ಲೆಯ ಎಸ್.ಎಸ್.ಎಲ್.ಸಿ ಫಲಿತಾಂಶ ಕಡಿಮೆಯಾಗಿದ್ದು, ಫಲಿತಾಂಶ ಸುಧಾರಣೆಗಾಗಿ ಅಗತ್ಯ ಕ್ರಮಕೈಗೊಳ್ಳಬೇಕು. ವೇತನ ಪರಿಷ್ಕರಣೆಗಾಗಿ ಸರ್ಕಾರಿ ನೌಕರರ ಬೇಡಿಕೆಯನ್ನು ಪರಿಗಣಿಸಿದ ರಾಜ್ಯ ಸರ್ಕಾರವು 7ನೇ ವೇತನವನ್ನು ಜಾರಿಗೊಳಿಸಿದೆ. ಜಿಲ್ಲೆಯಲ್ಲಿ ಗುರುಭವನ ನಿರ್ಮಾಣ ಕಾಮಗಾರಿಗೆ ವೇಗ ನೀಡಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದರು.

ವಿಧಾನಪರಿಷತ್ ಸದಸ್ಯೆ ಹೇಮಲತಾ ನಾಯಕ ಮಾತನಾಡಿ, ಯಾವುದೇ ಒಬ್ಬ ವ್ಯಕ್ತಿ ಒಂದು ಒಳ್ಳೆಯ ಸ್ಥಾನಕ್ಕೆ ಬರಲು ಶಿಕ್ಷಕರ ಪಾತ್ರ ಪ್ರಮುಖವಾಗಿರುತ್ತದೆ. ಇಂದು ನಾನು ಈ ಸ್ಥಾನಕ್ಕೆ ಬರಲು ನನ್ನ ಶಿಕ್ಷಕರ ಪರಿಶ್ರಮವು ಇದೆ. ಶಿಕ್ಷಕ ವೃತ್ತಿಯು ಅತ್ಯಂತ ಪವಿತ್ರವಾದದ್ದು. ಮಕ್ಕಳಿಗೆ ಸುಂದರ ಭವಿಷ್ಯ ಕಟ್ಟಿಕೊಡಬೇಕು. ಮಕ್ಕಳ ಉತ್ತಮ ಭವಿಷ್ಯ ರೂಪಿಸುವಲ್ಲಿ ಪೋಷಕರು ಹಾಗೂ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದರು.

ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆಯ, ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕೊಪ್ಪಳ ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್ ಮಾತನಾಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಕಸಪಾ ಅಧ್ಯಕ್ಷ ಶರಣೇಗೌಡ ಪೊಲೀಸ್ ಪಾಟೀಲ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್.ಎಸ್. ಬಿರಾದಾರ, ಜಿಲ್ಲಾ ಸರ್ಕಾರಿ ನೌಕರ ಸಂಘದ ಪ್ರಧಾನ ಕಾರ್ಯದರ್ಶಿ ಶಿವಪ್ಪ ಜೋಗಿ, ವಿಕಲಚೇತನರ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಬೀರಪ್ಪ ಅಂಡಗಿ, ಶಿಕ್ಷಣಾಧಿಕಾರಿಗಳ ಸಂಘದ ಜಿಲ್ಲಾ ಅಧ್ಯಕ್ಷ ಬಾಬುಸಾಬ ಲೈನ್‌ದಾರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶರಣಬಸನಗೌಡ ಪಾಟೀಲ, ಕೊಪ್ಪಳ ಬೋಧಕೇತರ ನೌಕರರ ಸಂಘದ ಅಧ್ಯಕ್ಷ ಶಿವಶಂಕ್ರಪ್ಪ ಮರಡಿ, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಾರುತಿ ಮ್ಯಾಗಳಮನಿ, ಕೊಪ್ಪಳ ಬಿಇಒ ಶಂಕ್ರಯ್ಯ ಟಿ.ಎಸ್., ಕಾರ್ಯಕ್ರಮ ಶಿಕ್ಷಣಾಧಿಕಾರಿ ಅನಿತಾ ಎಸ್.ಆರ್. ಸೇರಿದಂತೆ ಶಿಕ್ಷಕರ ಮತ್ತು ಪದವಿ ಪೂರ್ವ ಉಪನ್ಯಾಸಕರ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳು, ಕೊಪ್ಪಳ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸಂವಿಧಾನ ಪೀಠಿಕೆ ಓದಲಾಯಿತು. ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿ ಪುರಷ್ಕೃತ ಶಿಕ್ಷಕರನ್ನು ಹಾಗೂ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಲಾಯಿತು.

ಭಾವಚಿತ್ರದ ಮೆರವಣಿಗೆ:

ಶಿಕ್ಷಕರ ದಿನಾಚರಣೆಯ ಅಂಗವಾಗಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರದ ಮೆರವಣಿಗೆಗೆ ಜಿಲ್ಲಾ ಪಂಚಾಯಿತಿಯ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ ಕಾವ್ಯಾನಂದ ಉದ್ಯಾನವನದಿಂದ ಚಾಲನೆ ನೀಡಿದರು.

ಈ ಸಮಯದಲ್ಲಿ ಮಾತನಾಡಿದ ಅವರು, ಶಿಕ್ಷಕರು ಸಮಾಜವನ್ನು ತಿದ್ದುವ ಶಿಲ್ಪಿಗಳಾಗಿದ್ದಾರೆ. ಶಿಕ್ಷಕರ ದಿನಾಚರಣೆಯನ್ನು ಶಿಕ್ಷಕರೇ ಸೇರಿಕೊಂಡು ಆಚರಣೆ ಮಾಡುವ ಬದಲಾಗಿ ಸಮಾಜವೇ ಈ ಒಂದು ದಿನಾಚರಣೆಯನ್ನು ಮಾಡುವಂತಾಗಬೇಕಿದೆ. ಸಮಾಜದಲ್ಲಿ ಶಿಕ್ಷಕರಿಗೆ ಶ್ರೇಷ್ಠ ಸ್ಥಾನ-ಮಾನಗಳಿದ್ದು, ಶಿಕ್ಷಕರು ತಮ್ಮ ಜವಾಬ್ದಾರಿ ಅರಿತು ಕಾರ್ಯನಿರ್ವಹಿಸಬೇಕು ಎಂದರು.

PREV

Recommended Stories

ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಎಮ್ಮೆ ಕೊಡಿಸುವುದಾಗಿ ಪ್ರೇಮ್‌ಗೆ ವಂಚನೆ : ₹4.75 ಲಕ್ಷ ಮೋಸ