ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ತಾಲೂಕ ಸಮಾಜ ಕಲ್ಯಾಣ ಇಲಾಖೆಯಿಂದ ಗುರುವಾರ ಆಯೋಜಿಸಿದ್ದ ಯುವ ಸಂಸತ್ ಕಾರ್ಯಕ್ರಮವನ್ನು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸಂತೋಷ್ ಚೌವ್ಹಾಣ್ ಉದ್ಘಾಟಿಸಿದರು.
ಕನ್ನಡಪ್ರಭ ವಾರ್ತೆ ಚಿಂಚೋಳಿ
ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ತಾಲೂಕ ಸಮಾಜ ಕಲ್ಯಾಣ ಇಲಾಖೆಯಿಂದ ಗುರುವಾರ ಆಯೋಜಿಸಿದ್ದ ಯುವ ಸಂಸತ್ ಕಾರ್ಯಕ್ರಮವನ್ನು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸಂತೋಷ್ ಚೌವ್ಹಾಣ್ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಯುವ ಪೀಳಿಗೆಗೆ ಸಂಸತ್ ಕಲಾಪಗಳ ಬಗ್ಗೆ ಪ್ರಾಯೋಗಿಕ ಅರಿವು ಮೂಡಿಸುವುದು ಹಾಗೂ ಭವಿಷ್ಯದಲ್ಲಿ ಅವರನ್ನು ದೇಶದ ಉತ್ತಮ ಪ್ರಜೆಗಳಾಗಿ ರೂಪಿಸುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯು ಪ್ರಜೆಗಳಿಂದ, ಪ್ರಜೆಗಳಿಗಾಗಿ ಇರುವ ವ್ಯವಸ್ಥೆಯಾಗಿದೆ. ಈ ವ್ಯವಸ್ಥೆಯನ್ನು ಬಲಪಡಿಸುವಲ್ಲಿ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಹಾಗೂ ಪತ್ರಿಕಾರಂಗ ಈ ನಾಲ್ಕು ಸ್ತಂಭಗಳು ನಮಗೆ ಅತ್ಯಂತ ಪ್ರಮುಖವಾಗಿವೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಡಾ. ಶೃತಿ ಎಂ. ಹಾಗೂ ತಾಲೂಕು ವಕೀಲರ ಸಂಘದ ಅಧ್ಯಕ್ಷ ಶಶಿಕಾಂತ ಆಡಕಿ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ದೇವೇಂದ್ರಪ್ಪ ಹೋಳ್ಕರ್, ಸಂಜೀವಕುಮಾರ ಮೇತ್ರಿ, ಸುರೇಶ್ ಕೊರವಿ, ಡಾ.ಮೆರಾಜ ಪಾಶಾ, ಗಣಪತಿ ಜಾಧವ್, ಗೋಪಾಲರಾವ್ ಕಟ್ಟಿಮನಿ, ಅಮರ್ ಲೊಡನೋರ ಹಾಗೂ ಶಾಮರಾವ ಮೋಘಾ ಸೇರಿದಂತೆ ಹಲವರು ಭಾಗವಹಿಸಿದ್ದರು. ಕಾರ್ಯಕ್ರಮದ ಅಂಗವಾಗಿ ಮಕ್ಕಳಿಂದ ನಡೆದ ಅಣಕು ಸಂಸತ್ ಕಾರ್ಯಕಲಾಪದಲ್ಲಿ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷದ ಸದಸ್ಯರ ನಡುವಿನ ಪ್ರಶ್ನೋತ್ತರಗಳು ನೆರೆದಿದ್ದ ಎಲ್ಲರ ಗಮನ ಸೆಳೆಯಿತು.
ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯ ಪ್ರಾಚಾರ್ಯ ಡಾ.ಮಲ್ಲಿಕಾರ್ಜುನ ಪಾಲಾಮೂರ ಸ್ವಾಗತಿಸಿದರು. ಅಶೋಕ್ ಹೂವಿನಬಾವಿ ಕಾರ್ಯಕ್ರಮ ನಿರೂಪಿಸಿದರು ಹಾಗೂ ಗಜಾನನ ಪಾತ್ರೆ ವಂದಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.