ಚಿತ್ರದುರ್ಗ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ದಿನಾಂಕ ನಿಗದಿ

KannadaprabhaNewsNetwork | Published : Aug 10, 2024 1:35 AM

ಸಾರಾಂಶ

Chitradurga Municipal Council President, Vice President election date fixed

- ಹೈಕೋರ್ಟ್‌ಗೆ ರಾಜ್ಯ ಸರ್ಕಾರದಿಂದ ಮಾಹಿತಿ ಕನ್ನಡಪ್ರಭ ವಾರ್ತೆ ಬೆಂಗಳೂರು

ಚಿತ್ರದುರ್ಗ ನಗರಸಭೆ, ಕುಶಾಲನಗರ ಪಟ್ಟಣ ಪಂಚಾಯಿತಿ ಮತ್ತು ಬನ್ನೂರು ಪುರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಗೆ ದಿನಾಂಕ ನಿಗದಿಪಡಿಸಿ ಅಧಿಸೂಚನೆ ಹೊರಡಿಸಲಾಗಿದೆ ಎಂದು ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಶುಕ್ರವಾರ ಮಾಹಿತಿ ನೀಡಿದೆ.

ಚಿತ್ರದುರ್ಗ, ಬನ್ನೂರು ಮತ್ತು ಕುಶಾಲನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲು ನಿಗದಿಪಡಿಸಿ ಚುನಾವಣೆ ನಡೆಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಸಯ್ಯದ್‌ ನಸ್ರುಲ್ಲಾ ಸೇರಿದಂತೆ ಇತರ ಚುನಾಯಿತ ಪ್ರತಿನಿಧಿಗಳು ಸಲ್ಲಿಸಿದ್ದ ತಕರಾರು ಅರ್ಜಿ ನ್ಯಾಯಮೂರ್ತಿ ಅಶೋಕ್‌ ಎಸ್‌. ಕಿಣಗಿ ಅವರ ಮುಂದೆ ವಿಚಾರಣೆಗೆ ಬಂದಿತ್ತು.

ಸರ್ಕಾರದ ಪರ ವಕೀಲರು ಹಾಜರಾಗಿ, ಚಿತ್ರದುರ್ಗ ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಆ.26ರಂದು ಚುನಾವಣೆ ನಡೆಸಲಾಗುತ್ತದೆ. ಹಾಗೆಯೇ, ಕೊಡಗು ಜಿಲ್ಲೆಯ ಕುಶಾಲನಗರ ಪಟ್ಟಣ ಪಂಚಾಯಿತಿ ಮತ್ತು ಮೈಸೂರು ಜಿಲ್ಲೆಯ ಬನ್ನೂರು ಪುರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಆಯ್ಕೆಗೆ ಕ್ರಮವಾಗಿ ಆ.19 ಮತ್ತು ಸೆ.6ರಂದು ಚುನಾವಣೆ ನಡೆಸಲಾಗುತ್ತದೆ ಎಂದು ಮಾಹಿತಿ ನೀಡಿ ಪ್ರಮಾಣ ಪತ್ರ ಸಲ್ಲಿಸಿದರು.

ಅದನ್ನು ದಾಖಲಿಸಿಕೊಂಡ ನ್ಯಾಯಪೀಠ, ಅರ್ಜಿದಾರರ ಮನವಿ ಈಡೇರಿರುವುದರಿಂದ ಹೆಚ್ಚಿನ ವಿಚಾರಣೆಗೆ ಅಗತ್ಯ ಇಲ್ಲ ಎಂದು ಅಭಿಪ್ರಾಯಪಟ್ಟು ಅರ್ಜಿ ಇತ್ಯರ್ಥಪಡಿಸಿತು.

2024ರ ಆ.7ರಂದು ಅರ್ಜಿ ವಿಚಾರಣೆಗೆ ಬಂದಿದ್ದಾಗ ಸರ್ಕಾರದ ಪರ ಎಎಜಿ ಪ್ರತಿಮಾ ಹೊನ್ನಾಪುರ ಹಾಜರಾಗಿ, ಚಿತ್ರದುರ್ಗ, ಕುಶಾಲನಗರ ಮತ್ತು ಬನ್ನೂರು ಸೇರಿದಂತೆ ರಾಜ್ಯದ 117 ಪಟ್ಟಣ ಪಂಚಾಯಿತಿ, 123 ಪುರಸಭೆ ಮತ್ತು 61 ನಗರಸಭೆಗಳ ಎರಡನೇ ಅವಧಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲು ನಿಗದಿಪಡಿಸಿ ಸರ್ಕಾರ ಹೊರಡಿಸಿದ್ದ ಗೆಜೆಟ್‌ ಅಧಿಸೂಚನೆಯನ್ನು ನ್ಯಾಯಪೀಠಕ್ಕೆ ಸಲ್ಲಿಸಿದ್ದರು.

ಅರ್ಜಿದಾರರ ಪರ ಹಾಜರಿದ್ದ ವಕೀಲ ಎ.ಮೊಹಮ್ಮದ್‌ ತಾಹೀರ್‌, ಸರ್ಕಾರ ಮೀಸಲು ನಿಗದಿಪಡಿಸಿದೆಯಾದರೂ ಯಾವಾಗ ಚುನಾವಣೆ ನಡೆಸಲಾಗುತ್ತದೆ ಎಂಬ ಬಗ್ಗೆ ಮಾಹಿತಿ ನೀಡಿಲ್ಲ ಎಂದು ಆಕ್ಷೇಪಿಸಿದ್ದರು. ಅದನ್ನು ಪರಿಗಣಿಸಿದ್ದ ನ್ಯಾಯಪೀಠ, ಯಾವಾಗ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆಸಲಾಗುತ್ತದೆ ಎಂಬ ಬಗ್ಗೆ ಆ.9ರಂದು (ಶುಕ್ರವಾರ) ಮಾಹಿತಿ ನೀಡಬೇಕು ಎಂದು ಸರ್ಕಾರಕ್ಕೆ ಸೂಚಿಸಿತ್ತು.

Share this article