ಪೌರ ಕಾರ್ಮಿಕರು ಸ್ವಚ್ಛ ನಗರದ ರೂವಾರಿಗಳು: ಶಾಸಕ ತಮ್ಮಯ್ಯ

KannadaprabhaNewsNetwork |  
Published : Sep 29, 2026, 01:15 AM IST
 | Kannada Prabha

ಸಾರಾಂಶ

ಚಿಕ್ಕಮಗಳೂರು ನಗರಗಳ ಸ್ವಚ್ಛತೆ ಹಾಗೂ ನೈರ್ಮಲ್ಯ ಕಾಪಾಡುವಲ್ಲಿ ಪೌರ ಕಾರ್ಮಿಕರ ಶ್ರಮ ಅತ್ಯಂತ ಮಹತ್ವದ್ದಾಗಿದೆ. ಸ್ವಚ್ಛತಾ ಕಾರ್ಯದಲ್ಲಿ ನಿರಂತರವಾಗಿ ತೊಡಗಿಸಿಕೊಂಡಿರುವ ಪೌರ ಕಾರ್ಮಿಕರನ್ನು ಪ್ರತಿಯೊಬ್ಬರೂ ಗೌರವದಿಂದ ಕಾಣಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.

ಪೌರ ಕಾರ್ಮಿಕರ ದಿನಾಚರಣೆಯ ಅಧ್ಯಕ್ಷತೆ

ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು

ನಗರಗಳ ಸ್ವಚ್ಛತೆ ಹಾಗೂ ನೈರ್ಮಲ್ಯ ಕಾಪಾಡುವಲ್ಲಿ ಪೌರ ಕಾರ್ಮಿಕರ ಶ್ರಮ ಅತ್ಯಂತ ಮಹತ್ವದ್ದಾಗಿದೆ. ಸ್ವಚ್ಛತಾ ಕಾರ್ಯದಲ್ಲಿ ನಿರಂತರವಾಗಿ ತೊಡಗಿಸಿಕೊಂಡಿರುವ ಪೌರ ಕಾರ್ಮಿಕರನ್ನು ಪ್ರತಿಯೊಬ್ಬರೂ ಗೌರವದಿಂದ ಕಾಣಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.ನಗರಸಭೆ ಆವರಣದಲ್ಲಿ ಸೋಮವಾರ ನಡೆದ ಪೌರ ಕಾರ್ಮಿಕರ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಮನೆ ಮನೆಗಳಿಂದ ಕಸ ಸಂಗ್ರಹಿಸಿ ವಿಂಗಡಿಸುವುದು, ಸೂಕ್ತ ಸ್ಥಳಕ್ಕೆ ಸಾಗಿಸುವುದು, ರಸ್ತೆ ಹಾಗೂ ಸಾರ್ವಜನಿಕ ಸ್ಥಳ ಗಳನ್ನು ಸ್ವಚ್ಛವಾಗಿಡುವುದು ಸೇರಿದಂತೆ ಹಲವು ಜವಾಬ್ದಾರಿಗಳನ್ನು ಪೌರ ಕಾರ್ಮಿಕರು ನಿರ್ವಹಿಸುತ್ತಿದ್ದಾರೆ. ಕರ್ತವ್ಯದ ಸಂದರ್ಭದಲ್ಲಿ ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದರು.ಪೌರ ಕಾರ್ಮಿಕರ ಬೆಳಗಿನ ಉಪಾಹಾರದ ದರವನ್ನು ₹35ರಿಂದ ₹70ಕ್ಕೆ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಘೋಷಿಸಿದ್ದಾರೆ. ಅಲ್ಲದೆ, ಪ್ರತಿ ತಿಂಗಳು ₹2,000 ಸಂಕಷ್ಟ ಭತ್ಯೆ ನೀಡಲಾಗುತ್ತಿದ್ದು, ಸರ್ಕಾರದ ಸೌಲಭ್ಯ ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಮಾತನಾಡಿ, ಪೌರ ಕಾರ್ಮಿಕರು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಯಾವುದೇ ವ್ಯಸನಗಳಿಗೆ ದಾಸರಾಗದೆ ಆರ್ಥಿಕವಾಗಿ ಸದೃಢರಾಗಬೇಕು ಎಂದು ಸಲಹೆ ನೀಡಿದರು.ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಮಾತನಾಡಿ ಕಾಯಕವೇ ಕೈಲಾಸ. ಪ್ರತಿಯೊಂದು ವೃತ್ತಿಯೂ ಗೌರವ ಯುತವಾದುದು. ನಗರ ಹಾಗೂ ಗ್ರಾಮೀಣ ಪ್ರದೇಶಗಳ ಸ್ವಚ್ಛತೆ ಮತ್ತು ನೈರ್ಮಲ್ಯ ಕಾಪಾಡುವಲ್ಲಿ ಪೌರ ಕಾರ್ಮಿಕರ ಪಾತ್ರ ಮಹತ್ವದ್ದಾಗಿದ್ದು, ಅವರ ಸೇವೆಯನ್ನು ಪ್ರತಿಯೊಬ್ಬರೂ ಗೌರವಿಸಬೇಕು ಎಂದರು.ವಿಧಾನ ಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ ಮಾತನಾಡಿ ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿಟ್ಟುಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯ. ಪೌರ ಕಾರ್ಮಿಕರು ಉಚಿತ ಆರೋಗ್ಯ ತಪಾಸಣೆಯಲ್ಲಿ ಭಾಗವಹಿಸಿ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದರು.ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಮಾತನಾಡಿ, ನೇರ ಪಾವತಿಯಿಂದ ನೇರ ನೇಮಕಾತಿ ಪೌರ ಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿ ಸ್ವೀಕರಿಸಲಾಗಿದೆ. ಶೀಘ್ರದಲ್ಲೇ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಿ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.ಕಾರ್ಯಕ್ರಮದ ಅಂಗವಾಗಿ ನಗರಸಭೆಯಿಂದ ಪೌರ ಕಾರ್ಮಿಕರು ಹಾಗೂ ನೌಕರರಿಗೆ ಆಯೋಜಿಸಿದ್ದ ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ನಿವೃತ್ತ ಪೌರ ಕಾರ್ಮಿಕರನ್ನು ಸನ್ಮಾನಿಸಲಾಯಿತು.ನಗರಸಭೆ ಪೌರಾಯುಕ್ತ ಬಿ.ಸಿ.ಬಸವರಾಜ್ ಸ್ವಾಗತಿಸಿದರು. ನಗರಸಭೆ ಅಧ್ಯಕ್ಷೆ ಭವ್ಯ ಮಂಜುನಾಥ್, ಉಪಾಧ್ಯಕ್ಷೆ ಲಲಿತ ರವಿನಾಯ್ಕ್, ಡಿಯುಡಿಸಿ ಯೋಜನಾ ನಿರ್ದೇಶಕ ಗೋಪಾಲ್ ಜಾದವ್, ನಗರಸಭೆ ಸದಸ್ಯರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಡಾ. ಶ್ರೀಪರ್ಣಾ ಸಾಹಾಗೆ ಡಾ. ಅಪ್ಪಾಜಿ ನಾವೀನ್ಯತಾ ಪ್ರಶಸ್ತಿ
ಜ್ಞಾನೇಶ ಕುಮಾರ್ ರಾಜಿನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ಪ್ರತಿಭಟನೆ