- ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್‌ಗಳ ನೇಮಕಾತಿ । ನಿಷೇಧ ಮತ್ತು ಅವರ ಪುನರ್ವಸತಿ ಅಧಿನಿಯಮ ಜಿಲ್ಲಾ ಮಟ್ಟದ ಜಾಗೃತಿ ಸಮಿತಿ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಪೌರ ಕಾರ್ಮಿಕರು ಸ್ವಚ್ಛತೆ ಸಂದರ್ಭದಲ್ಲಿ ತಮಗೆ ನೀಡಲಾಗಿರುವ ಶೂ, ಕೈಗವಸುಗಳನ್ನು ಕಡ್ಡಾಯವಾಗಿ ಧರಿಸಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದ್ದಾರೆ.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್‌ಗಳ ನೇಮಕಾತಿ, ನಿಷೇಧ ಮತ್ತು ಅವರ ಪುನರ್ವಸತಿ ಅಧಿನಿಯಮ 2013 ರನ್ವಯ ಜಿಲ್ಲಾ ಮಟ್ಟದ ಜಾಗೃತಿ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಪೌರ ಕಾರ್ಮಿಕರ ಆರೋಗ್ಯ ದೃಷ್ಟಿಯಿಂದ ಸರ್ಕಾರ ಕೈಗವಸು, ಶೂಗಳನ್ನು ನೀಡಿದ್ದು, ಸ್ಥಳೀಯ ಸಂಸ್ಥೆ ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುವ ಪೌರಕಾರ್ಮಿಕರು ತಪ್ಪದೆ ಶೂ, ಕೈಗವಸುಗಳನ್ನು ಧರಿಸಬೇಕು ಎಂದ ಅವರು, ಪ್ರತಿ 3 ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ಮಾಡಿಸುವಂತೆ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಸೂಚಿಸಿದರು.
ಎಲ್ಲಾ ಸಫಾಯಿ ಕರ್ಮಚಾರಿಗಳು ಹಾಗೂ ಪೌರ ಕಾರ್ಮಿಕರಿಗೆ ಆಯುಷ್ಮಾನ್ ಕಾರ್ಡ್, ಪ್ರಧಾನಮಂತ್ರಿ ಸುರಕ್ಷಾ ಭೀಮ್ ಯೋಜನೆ ಹಾಗೂ ಜೀವನ್ ಜ್ಯೋತಿ ಯೋಜನೆಯಲ್ಲಿ ಎಲ್ಲರನ್ನೂ ನೋಂದಾಯಿಸಲು ಕ್ರಮ ಕೈಗೊಳ್ಳಬೇಕು. ಪೌರ ಕಾರ್ಮಿಕರಿಗೆ ಅರಿವು ಮೂಡಿಸುವ ಕಾರ್ಯಗಾರವನ್ನು ಜಿಲ್ಲೆ ಹಾಗೂ ತಾಲೂಕು ಕೇಂದ್ರಗಳಲ್ಲಿ ಹಮ್ಮಿಕೊಂಡು ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಪೌರಕಾರ್ಮಿಕರಿಗೆ ವಿಶ್ರಾಂತಿ ಗೃಹ ನಿರ್ಮಿಸಲು ಕ್ರಮ ವಹಿಸುವಂತೆ ಈಗಾಗಲೇ ನಿರ್ದೇಶನ ನೀಡಲಾಗಿದೆ. ವಿಶ್ರಾಂತಿ ಗೃಹ ನಿರ್ಮಿಸದೆ ಇರುವ ಕಡೆ ಜಾಗ ಗುರುತಿಸಿ ವಿಶ್ರಾಂತಿ ಗೃಹಗಳ ನಿರ್ಮಾಣಕ್ಕೆ ಕ್ರಮವಹಿಸಬೇಕು. ಶಾಲೆ, ವಿದ್ಯಾರ್ಥಿ ನಿಲಯಗಳಲ್ಲಿ ಶೌಚಾಲಯಗಳನ್ನು ಸ್ವಚ್ಛಗೊಳಿಸಲು ವಿದ್ಯಾರ್ಥಿಗಳನ್ನು ಬಳಸು ವಂತಿಲ್ಲ. ಅಲ್ಲದೆ ಗ್ರಾಮೀಣ ಪ್ರದೇಶಗಳಲ್ಲಿ ಕೂಡ ಇಂತಹ ಪ್ರಕರಣಗಳು ಕಂಡು ಬಂದರೆ ಸಂಬಂಧಿಸಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು. ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಲ್ಲಿರುವ ಸಕ್ಕಿಂಗ್ ಯಂತ್ರಗಳಿಂದ ಸರದಿ ಅನುಸಾರ ಶೌಚಾಲಯಗಳ ಸ್ವಚ್ಛಗೊಳಿಸಲು ಬಳಸುವಂತೆ ಹೇಳಿದರು.ಚಿಕ್ಕಮಗಳೂರು ನಗರಸಭೆಯಿಂದ ಉನ್ನತ ವ್ಯಾಸಂಗ ಮಾಡುತ್ತಿರುವ ಪೌರ ಕಾರ್ಮಿಕರ 6 ಮಕ್ಕಳಿಗೆ ಪ್ರೋತ್ಸಾಹಧನ ನೀಡಲಾಗಿದೆ. ಶೃಂಗೇರಿ ಪಟ್ಟಣ ಪಂಚಾಯಿತಿಯಲ್ಲಿ 2023- 24 ನೇ ಸಾಲಿನಲ್ಲಿ ಎಸ್‌ಎಫ್‌ಸಿ ಯೋಜನೆಯಡಿ 7 ಜನರಿಗೆ ಸಹಾಯಧನ ವಿತರಿಸಲಾಗಿದೆ. ತರೀಕೆರೆ ಪುರಸಭೆಯಲ್ಲಿ ವಿವಿಧ ಹಂತಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 3.42 ಲಕ್ಷ ಲ್ಯಾಪ್‌ಟಾಪ್ ವಿತರಣೆ ಮಾಡಲಾಗಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.ಸಭೆಯಲ್ಲಿ ಜಿಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಎಚ್.ಎಸ್. ಕೀರ್ತನಾ, ಉಪ ವಿಭಾಗಾಧಿಕಾರಿಗಳಾದ ದಲ್ಜಿತ್ ಕುಮಾರ್, ಕಾಂತರಾಜು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅಶ್ವಥ್ ಬಾಬು, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಯೋಗೀಶ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ನಾಗರತ್ನ, ನಗರಸಭೆ ಪೌರಾಯುಕ್ತ ಬಸವರಾಜು, ಸದಸ್ಯರಾದ ರಾಧಾಕೃಷ್ಣ, ವೆಂಕಟೇಶ್, ಭವಾನಿ, ಶೀಲಾ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.3 ಕೆಸಿಕೆಎಂ 4ಚಿಕ್ಕಮಗಳೂರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅಧ್ಯಕ್ಷತೆಯಲ್ಲಿ ಶನಿವಾರ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್‌ಗಳ ನೇಮಕಾತಿ, ನಿಷೇಧ ಮತ್ತು ಅವರ ಪುನರ್ವಸತಿ ಅಧಿನಿಯಮ ಜಿಲ್ಲಾ ಮಟ್ಟದ ಜಾಗೃತಿ ಸಮಿತಿ ಸಭೆ ನಡೆಯಿತು. ಜಿಪಂ ಸಿಇಒ ಕೀರ್ತನಾ, ಎಸಿ ದಲ್ಜಿತ್‌ಕುಮಾರ್, ಯೋಗೀಶ್ ಇದ್ದರು.