ಭಾಲ್ಕಿ ಮಠದಲ್ಲಿ ಮಾ.2ರಂದು 6ನೇ ತರಗತಿ ಪ್ರವೇಶ ಪರೀಕ್ಷೆ

KannadaprabhaNewsNetwork |  
Published : Feb 28, 2024, 02:34 AM IST
ಚಿತ್ರ 26ಬಿಡಿಆರ್58 | Kannada Prabha

ಸಾರಾಂಶ

ಕನ್ನಡ ಮಾಧ್ಯಮ ಶಿಕ್ಷಣಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ 2024-25ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ 6ನೇ ತರಗತಿ ಪ್ರತಿಭಾವಂತ 30 ಮಕ್ಕಳಿಗೆ ಉಚಿತ ಶಿಕ್ಷಣ, ವಸತಿ, ಊಟ, ತರಬೇತಿ ನೀಡಲು ತೀರ್ಮಾನ ಕೈಗೊಳ್ಳಲಾಗಿದೆ

ಭಾಲ್ಕಿ: ಕನ್ನಡ ಮಾಧ್ಯಮ ಶಿಕ್ಷಣಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ 2024-25ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ 6ನೇ ತರಗತಿ ಪ್ರತಿಭಾವಂತ 30 ಮಕ್ಕಳಿಗೆ ಉಚಿತ ಶಿಕ್ಷಣ, ವಸತಿ, ಊಟ, ತರಬೇತಿ ನೀಡಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್‌ನ ಅಧ್ಯಕ್ಷ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ತಿಳಿಸಿದರು.

ಪಟ್ಟಣದ ಹಿರೇಮಠ ಸಂಸ್ಥಾನದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹಿರೇಮಠ ಸಂಸ್ಥಾನ ವಿದ್ಯಾಪೀಠ ಆರಂಭಗೊಂಡು 30 ವರ್ಷ ಯಶಸ್ವಿಯಾಗಿ ಪೂರ್ಣಗೊಂಡಿವೆ. ಈ ಹಿನ್ನೆಲೆಯಲ್ಲಿ 6ನೇ ತರಗತಿಯಿಂದ 10ನೇ ತರಗತಿವರೆಗೆ 30 ಮಕ್ಕಳಿಗೆ ಉಚಿತ ಶಿಕ್ಷಣ ನೀಡಲು ಯೋಜನೆ ರೂಪಿಸಲಾಗಿದೆ.

ಮಾ.2ರಂದು ಚನ್ನಬಸವೇಶ್ವರ ಗುರುಕುಲದಲ್ಲಿ ಪ್ರವೇಶ ಪರೀಕ್ಷೆ ಏರ್ಪಡಿಸಲಾಗಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಪ್ರವೇಶ ಪರೀಕ್ಷೆ ಬರೆಯಲು ಅವಕಾಶ ಇರುತ್ತದೆ.

ಈಗಾಗಲೇ 1500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರವೇಶ ಪರೀಕ್ಷೆಗೆ ಆನ್‌ಲೈನ್ ನೋಂದಣಿ ಮಾಡಿಸಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬಹುದಾಗಿದೆ. ಅದರಲ್ಲಿ ಅತಿಹೆಚ್ಚು ಅಂಕ ಪಡೆಯುವ ಪ್ರತಿಭಾವಂತ 30 ವಿದ್ಯಾರ್ಥಿಗಳಿಗೆ ಮುಂದಿನ 5 ವರ್ಷ ಉಚಿತ ಶಿಕ್ಷಣ ಸೇರಿ ಎಲ್ಲ ಸೌಲಭ್ಯ ಕಲ್ಪಿಸಲಾಗುವುದು ಎಂದರು.

ಕನ್ನಡ ನೆಲ, ಭಾಷೆ ರಕ್ಷಣೆಗಾಗಿ ಮಠ ಹಿಂದಿನಿಂದಲೂ ಹೋರಾಟ ಮಾಡಿಕೊಂಡು ಬಂದಿದೆ. ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಸಂಸ್ಥೆ ತೆರೆದು ಕನ್ನಡ ಭಾಷೆ ಶಿಕ್ಷಣಕ್ಕೆ ಒತ್ತು ನೀಡಲಾಗುತ್ತಿದೆ.

ಆದರೆ ಇತ್ತೀಚಿನ ದಿನಗಳಲ್ಲಿ ಆಂಗ್ಲ ಭಾಷೆ ಕಲಿತರೆ ಮಾತ್ರ ಭವಿಷ್ಯ ಎನ್ನುವ ಮಾತು ಕೇಳಿ ಬರುತ್ತಿವೆ. ನಮ್ಮ ಸಂಸ್ಥೆಯಲ್ಲಿ ಇದುವರೆಗೂ ಕನ್ನಡ ಮಾಧ್ಯಮದಲ್ಲಿ ಕಲಿತ ವಿದ್ಯಾರ್ಥಿಗಳಿಗೆ ಮೆಡಿಕಲ್, ಇಂಜಿನಿಯರಿಂಗ್, ಎನ್‌ಡಿಎ, ಐಐಟಿ, ಐಆರ್‌ಎಸ್ ಸೇರಿ ವಿವಿಧ ಕೋರ್ಸ್‌ಗಳಿಗೆ ಆಯ್ಕೆಯಾಗಿ ಭವಿಷ್ಯ ರೂಪಿಸಿಕೊಂಡಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪ್ರವೇಶ ಪರೀಕ್ಷೆ ಬರೆದು ಉಚಿತ ಶಿಕ್ಷಣ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕೆಂದರು.

ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಮಾತನಾಡಿ, ಗ್ರಾಮೀಣ ಭಾಗದಲ್ಲಿ ಡಾ.ಬಸವಲಿಂಗ ಪಟ್ಟದ್ದೇವರು ಸ್ಥಾಪಿಸಿದ ಶಿಕ್ಷಣ ಸಂಸ್ಥೆಯಲ್ಲಿ ಸೇವಾ ಮನೋಭಾವದಿಂದ ಶಿಕ್ಷಣ ನೀಡಲಾಗುತ್ತಿದೆ. ಹಿಂದಿನಿಂದಲೂ ಬಡ ಮತ್ತು ಪ್ರತಿಭಾವಂತ ಮಕ್ಕಳಿಗೆ ಉಚಿತ ಶಿಕ್ಷಣ, ನೆರವು ನೀಡಲಾಗುತ್ತಿದೆ. ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡುವ ಮಕ್ಕಳಿಗೂ ಉಚಿತ ಶಿಕ್ಷಣ ನೀಡಲಾಗುತ್ತಿದ್ದು, 6ನೇ ತರಗತಿ ಪ್ರವೇಶ ಬಯಸುವ ಮಕ್ಕಳು ಸದುಪಯೋಗ ಪಡೆದು ಕೊಳ್ಳಬೇಕು ಎಂದರು.

ಸುದ್ದಿಗೋಷ್ಠಿಯಲ್ಲಿ ಮಹಾಲಿಂಗ ಸ್ವಾಮೀ, ಆಡಳಿತಾಧಿಕಾರಿ ಮೋಹನ ರೆಡ್ಡಿ, ಪ್ರಾಚಾರ್ಯ ಬಸವರಾಜ ಮೊಳಕೀರೆ, ಲಕ್ಷ್ಮಣ ಮೇತ್ರೆ, ಬಸವರಾಜ ಪ್ರಭಾ ಇದ್ದರು.

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ