ಕನ್ನಡಪ್ರಭ ವಾರ್ತೆ ಹಾಸನ
ಮಹಾತ್ಮ ಗಾಂಧೀಜಿಯವರ ಜನ್ಮದಿನದ ಅಂಗವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಂಗ, ವಕೀಲರ ಸಂಘ, ನಗರಸಭೆ ಇವರ ಸಂಯುಕ್ತಾಶ್ರಯದಲ್ಲಿ "ಸ್ವಚ್ಛತೆಯೇ ಸಂಸ್ಕಾರ ಮತ್ತು ಸ್ವಚ್ಚತೆಯೇ ಸ್ವಭಾವ " ಎಂಬ ಘೋಷ ವಾಕ್ಯದಡಿಯಲ್ಲಿ ಸ್ವಚ್ಛತೆಯೇ ಸೇವೆ ೨೦೨೪ರ ಅಂಗವಾಗಿ ಜನಾಂದೋಲನ ಕಾರ್ಯಕ್ರಮಗಳನ್ನು ಕರ್ನಾಟಕ ಉಚ್ಛ ನ್ಯಾಯಾಲಯದ ನಿರ್ದೇಶನದನ್ವಯ ವಿವಿಧ ಸ್ಥಳಗಳಲ್ಲಿ ಹಮ್ಮಿಕೊಳ್ಳಲಾಗಿದ್ದು, ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಹಮ್ಮಿಕೊಂಡು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಉಷಾರಾಣಿ ನೇತೃತ್ವದಲ್ಲಿ ಸ್ವಚ್ಛತೆಯನ್ನು ಮಾಡಲಾಯಿತು. ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಉಷಾರಾಣಿರವರು ಮಾತನಾಡಿ, ನಮ್ಮ ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಸಂಸ್ಕಾರವನ್ನು ಸ್ವಭಾವವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಇದರಿಂದ ಪ್ರತಿಯೊಬ್ಬ ಭಾರತೀಯರು ಮೂಲಭೂತ ಕರ್ತವ್ಯಗಳನ್ನೂ ಪಾಲನೆ ಮಾಡಿದಂತಾಗುತ್ತದೆ. ಸ್ವಚ್ಛತೆಯ ಬಗ್ಗೆ ಪ್ರತಿಯೊಬ್ಬರಲ್ಲೂ ಅರಿವು ಮೂಡಿಸುವುದು ಅಗತ್ಯವಾಗಿದೆ ಎಂದರು.ಜಿಲ್ಲಾ ನ್ಯಾಯಾಧೀಶರಾದ ಎಚ್.ಆರ್. ರವಿಕುಮಾರ್ ಮಾತನಾಡಿ, ಪ್ಲಾಸ್ಟಿಕ್ ಬಳಕೆಯನ್ನು ನಿಲ್ಲಿಸುವ ಮೂಲಕ ಪರಿಸರಕ್ಕೆ ನಾವು ದೊಡ್ಡ ಕೊಡುಗೆಯನ್ನು ನೀಡಬಹುದಾಗಿದೆ. ಪ್ಲಾಸ್ಟಿಕ್ ಪರಿಸರಕ್ಕೆ ಮಾರಕವಾಗಿದೆ ಆದರೆ, ನಾವು ಪ್ಲಾಸ್ಟಿಕ್ ಉಪಯೋಗಿಸುವ ಮೂಲಕ ಪರಿಸರವನ್ನು ಹಾಳು ಮಾಡುತ್ತಿದ್ದೇವೆ ಇದನ್ನು ನಿಯಂತ್ರಿಸುವುದೇ ಇದಕ್ಕೆ ಪರಿಹಾರವಾಗಿದೆ ಎಂದು ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜಿ.ಕೆ. ದಾಕ್ಷಾಯಿಣಿ ಮಾತನಾಡಿ, ಕಾನೂನು ಸೇವೆಗಳ ಪ್ರಾಧಿಕಾರವು ಸ್ವಚ್ಛತೆಯ ಬಗ್ಗೆ ಕಾಳಜಿಯಿಟ್ಟು ವಿವಿಧ ಸ್ಥಳಗಳಲ್ಲಿ ವಿವಿಧ ಸಂಸ್ಥೆ ಮತ್ತು ಇಲಾಖೆಗಳ ಮೂಲಕ ಸ್ವಚ್ಛತಾ ಕಾರ್ಯಕ್ರಮವನ್ನು ಜಿಲ್ಲಾದ್ಯಂತ ನಡೆಸಲಾಗಿದೆ. ನಾಗರಿಕರು ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಮಹಾತ್ಮ ಗಾಂಧಿಯವರ ಜನ್ಮದಿನವನ್ನು ಸ್ಮರಣೀಯವಾಗಿಸಬೇಕು ಎಂದು ತಿಳಿಸಿದರು.ವಕೀಲರ ಸಂಘದ ಅಧ್ಯಕ್ಷರಾದ ಡಿ.ಟಿ. ಪ್ರಸನ್ನರವರು ಮಾತನಾಡಿ, ವಕೀಲರೆಲ್ಲರೂ ತಿಂಗಳಲ್ಲಿ ಒಮ್ಮೆ ಶ್ರಮದಾನದ ಮೂಲಕ ನ್ಯಾಯಾಲಯದ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಲು ತೀರ್ಮಾನಿಸಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ನಗರಸಭೆಯ ಮಾಜಿ ಅಧ್ಯಕ್ಷರಾದ ಮೋಹನ್, ನಗರಸಭೆ ಸದಸ್ಯರು ಮತ್ತು ವಕೀಲರಾದ ಕ್ರಾಂತಿ ಸಿ. ಪ್ರಸಾದ್ ತ್ಯಾಗಿ, ನಗರಸಭೆ ಆರೋಗ್ಯ ನಿರೀಕ್ಷಕರಾದ ಪ್ರಸಾದ್, ವಕೀಲರ ಸಂಘದ ಉಪಾಧ್ಯಕ್ಷರಾದ ಎಚ್.ಎನ್. ಯೋಗೀಶ್, ಖಜಾಂಚಿ ಪ್ರತಾಪ್, ಹಸಿರು ಭೂಮಿ ಪ್ರತಿಷ್ಠಾನದ ಕಾರ್ಯದರ್ಶಿ ಎಮ್.ಬಿ. ಗಿರಿಜಾಂಬಿಕ ಹಾಗೂ ಎಲ್ಲಾ ನ್ಯಾಯಾಧೀಶರು, ಸಿಬ್ಬಂದಿ, ವಕೀಲರು, ನಗರಸಭೆ ಪೌರಕಾರ್ಮಿಕರು ಭಾಗವಹಿಸಿದ್ದರು.