ಸ್ವಚ್ಛತಾ ಕಾರ್ಯ ಸ್ಥಗಿತ; ಧರಣಿ ಕುಳಿತ ಪೌರಸೇವಾ ನೌಕರರು

KannadaprabhaNewsNetwork |  
Published : May 28, 2025, 12:37 AM IST
೨೭ಕೆಎಂಎನ್‌ಡಿ-೫ಪೌರಸೇವಾ ನೌಕರರನ್ನು ಸರ್ಕಾರಿ ನೌಕರರೆಂದು ಗುರುತಿಸುವಂತೆ ಒತ್ತಾಯಿಸಿ ಪೌರಸೇವಾ ನೌಕರರು ನಗರಸಭೆ ಎದುರು ಅನಿರ್ದಿಷ್ಟಾವಧಿ ಧರಣಿ ನಡೆಸಿದರು. | Kannada Prabha

ಸಾರಾಂಶ

ಪೌರ ನೌಕರರ ಸಂಘದ ಕಾರ್ಯಕಾರಣಿ ಸಭೆಯಲ್ಲಿ ಹಲವು ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ನಿರ್ಣಯಗಳನ್ನು ಕೈಗೊಂಡು ಸರ್ಕಾರಕ್ಕೆ ಸಲ್ಲಿಸಲಾಗಿತ್ತು. ಮನವಿ ಸಲ್ಲಿಸಿ ೪೫ ದಿನಗಳಾದರೂ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದ ಕಾರಣ ಪ್ರತಿಭಟನೆ ಅನಿವಾರ್ಯವಾಗಿದೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಪೌರ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪೌರ ನೌಕರರು ನಗರದಲ್ಲಿ ಮಂಗಳವಾರದಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದರು.

ನಗರಸಭೆ ಮುಂಭಾಗ ಸೇರಿದ ನೌಕರರು, ಸರ್ಕಾರ, ಸಚಿವರು, ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು. ರಾಜ್ಯದ ಸ್ಥಳೀಯ ಸಂಸ್ಥೆಗಳಾದ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯ್ತಿಗಳ ಪೌರ ನೌಕರರನ್ನು ರಾಜ್ಯ ಸರ್ಕಾರಿ ನೌಕರರೆಂದು ಪರಿಗಣಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದರು.

ಪೌರ ನೌಕರರ ಸಂಘದ ಕಾರ್ಯಕಾರಣಿ ಸಭೆಯಲ್ಲಿ ಹಲವು ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ನಿರ್ಣಯಗಳನ್ನು ಕೈಗೊಂಡು ಸರ್ಕಾರಕ್ಕೆ ಸಲ್ಲಿಸಲಾಗಿತ್ತು. ಮನವಿ ಸಲ್ಲಿಸಿ ೪೫ ದಿನಗಳಾದರೂ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದ ಕಾರಣ ಪ್ರತಿಭಟನೆ ಅನಿವಾರ್ಯವಾಗಿದೆ ಎಂದು ನೌಕರರು ತಿಳಿಸಿದರು.

ರಾಜ್ಯದ ಎಲ್ಲಾ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುವ ಪೌರ ನೌಕರರು ಕಸ ಸಂಗ್ರಹ, ವಿಲೇವಾರಿ, ಸ್ವಚ್ಛತೆ, ನೀರು ಪೂರೈಕೆ, ಒಳಚರಂಡಿ ನಿರ್ವಹಣೆ ಕೆಲಸಗಳನ್ನು ಸ್ಥಗಿತಗೊಳಿಸಲಿದ್ದಾರೆ. ಬೇಡಿಕೆಗಳ ಈಡೇರುವರೆವಿಗೂ ಧರಣಿ ಕೈಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಬೇಡಿಕೆಗಳು:

ಪೌರ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕು. ನಗದು ರಹಿತ ಆರೋಗ್ಯಚಿಕಿತ್ಸಾ ಸೌಲಭ್ಯ ಯೋಜನೆಯಾದ ಜ್ಯೋತಿ ಸಂಜೀವಿನಿಯನ್ನು ಪೌರ ನೌಕರರಿಗೂ ವಿಸ್ತರಿಸಬೇಕು. ಸರ್ಕಾರಿ ನೌಕರಿಗೆ ಸಿಗುವ ಎಲ್ಲ ಸೌಲಭ್ಯ ನೀಡಬೇಕು.

ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೊರಗುತ್ತಿಗೆಯಡಿ ಕೆಲಸ ನಿರ್ವಹಿಸುತ್ತಿರುವ ನೀರು ಸರಬರಾಜುದಾರರ, ವಾಹನ ಚಾಲಕರು, ಲೋಡರ್‌ಗಳು, ಕ್ಲೀನರ್‌ಗಳು, ಸ್ವಚ್ಛತಾ ಮೇಲ್ವಿಚಾರಕರು, ಉದ್ಯಾನ ನಿರ್ವಹಣೆಗಾರರು ಸೇರಿದಂತೆ ವಿವಿಧ ವೃಂದದ ಹೊರಗುತ್ತಿಗೆ ನೌಕರರನ್ನು ನೇರ ಪಾವತಿಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.

ದಿನಗೂಲಿ ಕ್ಷೇಮಾಭಿವೃದ್ಧಿ ಸಮಾನ ಕೆಲಸಕ್ಕೆ ಸಮಾನ ವೇತನ, ಟೈಮ್ ಸ್ಕೆಲ್ ನೌಕರರ ಖಾಲಿ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡಬೇಕು.

ವಾಹನ ಚಾಲಕರು, ನೀರು ಪೂರೈಕೆ ನೌಕರರು ನೇರ ಪಾವತಿ ಪೌರ ಕಾರ್ಮಿಕರನ್ನು ಕಾಯಂಗೊಳಿಸಬೇಕು. ನೌಕರರಿಗೆ ಎಸ್‌ಎಫ್‌ಸಿ ಮುಕ್ತ ನಿಧಿಯಿಂದ ವೇತನ ನೀಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಂಘದ ರಾಜ್ಯಾಧ್ಯಕ್ಷ ಎಂ.ಬಿ.ನಾಗಣ್ಣಗೌಡ, ಜಿಲ್ಲಾಧ್ಯಕ್ಷ ನಾಗರಾಜು, ಮುತ್ತಾಲಯ್ಯ, ಮಹದೇವ, ಬನ್ನಯ್ಯ, ಅಮ್ಮಯ್ಯಮ್ಮ, ಶಿವ, ರಾಜೇಶ್, ಮಂಜುನಾಥ್, ಕಂದಾಯಾಧಿಕಾರಿ ರಾಜಶೇಖರ್, ಎಂಜಿನಿಯರ್ ರಾಜೇಗೌಡ, ಕಲ್ಪ ಇತರರಿದ್ದರು.

ಪುರಸಭೆ ನೌಕರರ ಪ್ರತಿಭಟನೆಗೆ ಅಧಿಕಾರಿಗಳು, ಸಿಬ್ಬಂದಿ ಬೆಂಬಲ

ಮಳವಳ್ಳಿ: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಪುರಸಭೆ ಕಚೇರಿ ಎದುರು ನೌಕರರು ನಡೆಸುತ್ತಿರುವ ಪ್ರತಿಭಟನೆಗೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಕೆಲಕಾಲ ಕೆಲಸಗಳನ್ನು ಸ್ಥಗಿತಗೊಳಿಸಿ ಬೆಂಬಲ ನೀಡಿದರು.

ಕೆಲಕಾಲ ತಮ್ಮ ಕೆಲಸಗಳನ್ನು ಸ್ಥಗಿತಗೊಳಿಸಿ ಧರಣಿ ನಡೆಸಿ ಸರ್ಕಾರ ಕೂಡಲೇ ನೌಕರರ ಬೇಡಿಕೆ ಈಡೇರಿಸಬೇಕೆಂದು ಒತ್ತಾಯಿಸಿದರು.

ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾರನ್ನು ಸರ್ಕಾರಿ ನೌಕರರು ಎಂದು ಪರಿಗಣಿಸಬೇಕು, ಸಂಜೀವಿನಿ, ಕೆಜಿಐಡಿ ಸೇರಿದಂತೆ ಸರ್ಕಾರಿ ನೌಕರರು ಪಡೆಯುವ ಎಲ್ಲ ಸೌಲಭ್ಯಗಳನ್ನು ನೀಡಬೇಕು ಎಂದು ಆಗ್ರಹಿಸಿದರು.

ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿರುವ ನೀರು ಸರಬರಾಜು, ಚಾಲಕರು, ಲೋಡರ್ಸ್ ಕ್ಲೀನರ್ಸ್, ಗಾರ್ಡನರ್, ಸ್ಯಾನಿಟರಿ ಸೂಪರ್ ವೈಸರ್, ಯುಜಿಡಿ ಸಹಾಯಕರು ಸೇರಿದಂತೆ ವಿವಿಧ ವೃಂದದ ಹೊರಗುತ್ತಿಗೆ ನೌಕರರನ್ನು ನೇರ ಪಾವತಿಗೆ ಒಳಪಡಿಸಬೇಕು ಎಂದು ಒತ್ತಾಯಿಸಿದರು.

ದಿನಗೂಲಿ, ಕ್ಷೇಮಾಭಿವೃದ್ಧಿ ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವುದರ ಜೊತೆಗೆ ನೌಕರರನ್ನು ಕಾಯಂ ಗೊಳಿಸಬೇಕು ಹಾಗೂ ಎಲ್ಲ ನೌಕರರಿಗೂ ಎಸ್‌ಎಫ್‌ಸಿ ಮುಕ್ತ ನಿಧಿಯಿಂದ ವೇತನ ನೀಡುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿದರು.

PREV

Recommended Stories

ನವೆಂಬರ್‌-ಡಿಸೆಂಬರ್‌ನಲ್ಲಿ 5 ಪಾಲಿಕೆ ಚುನಾವಣೆ: ಡಿಸಿಎಂ
ಹಿಪ್ಪರಗಿ ಜಲಾಶಯಕ್ಕೆ ೧,೧೯,೨೦೦ ಕ್ಯುಸೆಕ್‌ ಒಳಹರಿವು