ಮಹಾಮಾರಿ ಡೆಂಘೀ ನಿಯಂತ್ರಣಕ್ಕೆ ಸ್ವಚ್ಛತೆಯೇ ಮದ್ದು

KannadaprabhaNewsNetwork | Published : Jul 10, 2024 12:33 AM

ಸಾರಾಂಶ

ಸರ್ಕಾರಿ ಮತ್ತು ಖಾಸಗಿ ಪ್ರದೇಶಗಳಲ್ಲಿ ನೀರು ನಿಂತಿರುವ ಕಡೆಗಳಲ್ಲಿ ಸೊಳ್ಳೆ ನಿಯಂತ್ರಣ ದ್ರಾವಣ ಸಿಂಪರಣೆ ಮಾಡಬೇಕೆಂದು ಸೂಚನೆ

ಲಕ್ಷ್ಮೇಶ್ವರ: ಡೆಂಘೀ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಡೆಂಘೀ ನಿಯಂತ್ರಣದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿ ಎಂದು ಗದಗ ಜಿಪಂ ಯೋಜನಾ ನಿರ್ದೇಶಕರು ಮತ್ತು ತಾಪಂ ಆಡಳಿತಾಧಿಕಾರಿ ಎಂ.ವಿ. ಚಳಗೇರಿ ನಿರ್ದೇಶನ ನೀಡಿದರು.

ಲಕ್ಷ್ಮೇಶ್ವರ ತಾಪಂ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡ ಮಾಸಿಕ ಪ್ರಗತಿ ಪರಿಶೀಲನಾ ಸಭೆ ಹಾಗೂ ಡೆಂಘೀ ನಿಯಂತ್ರಣ ಕುರಿತಂತೆ ಕರೆಯಲಾಗಿದ್ದ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ಉದ್ದೇಶಿಸಿ ಮಾತನಾಡಿದರು.ಡೆಂಘೀ ಮಹಾಮಾರಿ ತುಂಬಿ ತುಳುಕುತ್ತಿದ್ದು, ಸೋಂಕು ನಿವಾರಣೆಗಾಗಿ ತಾಲೂಕಾಡಳಿತ ಮತ್ತು ತಾಪಂ, ಆರೋಗ್ಯ ಇಲಾಖೆ ಸಮರೋಪಾದಿಯಲ್ಲಿ ಕಾರ್ಯ ನಿರ್ವಹಿಸಬೇಕು. ಲಕ್ಷ್ಮೇಶ್ವರ ಪಟ್ಟಣ ಹಾಗೂ ಗ್ರಾಪಂ ವ್ಯಾಪ್ತಿಯ ಪ್ರತಿ ಮನೆ ಬಾಗಿಲಿಗೆ ತೆರಳಿ ಸಮೀಕ್ಷೆ ಕೈಗೊಳ್ಳಬೇಕು. ನೀರು ಅಲ್ಲಲ್ಲಿ ಸಂಗ್ರಹಗೊಳ್ಳದಂತೆ ಜಾಗೃತಿ ಮೂಡಿಸಬೇಕು. ಎಲ್ಲಿಯಾದರೂ ಮನೆಗಳಲ್ಲಿ ನೀರು ಸಂಗ್ರಹಗೊಂಡಿರುವುದು ಗಮನಕ್ಕೆ ಬಂದರೆ ತಕ್ಷಣ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸಲಹೆ ನೀಡಿದರು. ಗ್ರಾಮೀಣ ಭಾಗಗಳಲ್ಲಿ ಸ್ವಚ್ಛತೆ ಕಾಪಾಡುವಂತೆ ಎಚ್ಚರಿಕೆ ನೀಡಬೇಕು. ಸರ್ಕಾರಿ ಮತ್ತು ಖಾಸಗಿ ಪ್ರದೇಶಗಳಲ್ಲಿ ನೀರು ನಿಂತಿರುವ ಕಡೆಗಳಲ್ಲಿ ಸೊಳ್ಳೆ ನಿಯಂತ್ರಣ ದ್ರಾವಣ ಸಿಂಪರಣೆ ಮಾಡಬೇಕೆಂದು ಸೂಚನೆ ನೀಡಿದರು.

ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಬಿ.ಎಸ್. ಹಿರೇಮಠ ಮಾತನಾಡಿ, ಡೆಂಘೀ ಜ್ವರ ಸೊಳ್ಳಿಯಿಂದ ಹರಡುವ ವೈರಸ್‌ ಆಗಿದ್ದು, ಇದೊಂದು ಸಾಂಕ್ರಾಮಿಕ ರೋಗವಾಗಿದ್ದು, ಇದು ಸೋಂಕಿತ ಈಡೀಸ್‌ ಜಾತಿಯ ಸೊಳ್ಳೆಯ ಕಡಿತದಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಈ ಸೊಳ್ಳೆಗಳು ಸಾಮಾನ್ಯವಾಗಿ ಸ್ವಚ್ಛ ನಿಂತ ನೀರಿನಲ್ಲಿ ಹಾಗೂ ನೀರು ಶೇಖರಣೆ ಸಲಕರಣೆಗಳಲ್ಲಿ ಮೊಟ್ಟೆ ಇಟ್ಟು ಸಂತನಾಭಿವೃದ್ಧಿ ಮಾಡುತ್ತವೆ. ಈ ಸೊಳ್ಳೆಯ ಬಹುತೇಕ ಹಗಲು ಹೊತ್ತಿನಲ್ಲಿ ಕಚ್ಚುತ್ತವೆ. ಹಾಗಾಗಿ ಡೆಂಘೀ ಜ್ವರ ಹತೋಟಿ ಪ್ರತಿಯೊಬ್ಬರ ಕೈಯಲ್ಲಿದೆ. ಪ್ರತಿಯೊಬ್ಬರು ತಮ್ಮ ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿಟ್ಟುಕೊಳ್ಳಬೇಕು. ಈ ನಿಟ್ಟಿ ಅಗತ್ಯ ಜಾಗೃತಿ ಕಾರ್ಯಕ್ರಮಗಳನ್ನು ಆರೋಗ್ಯ ಇಲಾಖೆಯಿಂದ ಹಮ್ಮಿಕೊಂಡು ಡೆಂಘೀ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.

ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಪ್ರಕಾಶ ಕರ್ಜಗಿ ಮಾತನಾಡಿ, ಒಂದು ಸೋಂಕಿತ ಸೊಳ್ಳೆಯು ಮನುಷ್ಯನನ್ನು ಕಚ್ಚಿದ ೮ ರಿಂದ ೧೪ ದಿನಗಳ ನಂತರ ಡೆಂಘೀ ಜ್ವರದ ಲಕ್ಷಣಗಳು ಕಂಡು ಬರುತ್ತವೆ. ತೀವ್ರ ಜ್ವರ, ವಿಪರೀತ ತಲೆನೋವು, ಕಣ್ಣುಗಳ ಹಿಂಭಾಗದಲ್ಲಿ ನೋವು, ಚರ್ಮದ ಮೇಲೆ ಗುಳ್ಳೆಗಳು, ಮಾಂಸ ಖಂಡಗಳಲ್ಲಿ ನೋವು ಕಾಣಿಸಿಕೊಳ್ಳುವುದು, ತೀವ್ರ ಸ್ಥಿತಿಯಲ್ಲಿ ಬಾಯಿ, ಮೂಗು ಮತ್ತು ಒಸಡುಗಳಿಂದ ರಕ್ತಸ್ರಾವ ಕಾಣಿಸಿಕೊಳ್ಳುತ್ತದೆ. ಡೆಂಘೀ ಜ್ವರಕ್ಕೆ ಯಾವುದೇ ನಿರ್ದಿಷ್ಟ ಚಿಕಿತ್ಸೆ ಅಥವಾ ಲಸಿಕೆಯಾಗಲಿ ಇಲ್ಲ. ಈ ರೋಗದ ಲಕ್ಷಣಗಳಿಗನುಸಾರವಾಗಿ ವೈದ್ಯರಿಂದ ಸೂಕ್ತ ಚಿಕಿತ್ಸೆ ಪಡೆಯಬಹುದು. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದೆ ಎಂದರು.

ಇಲಾಖಾವಾರು ಮಾಸಿಕ ಪ್ರಗತಿ ಪರಿಶೀಲನೆ ಮಾಡಲಾಯಿತು. ತಾಪಂ ವಾರ್ಷಿಕ ಲೆಕ್ಕಪತ್ರ ಮಂಡಿಸಿ ಅನುಮೋದನೆ ಪಡೆಯಲಾಯಿತು. ಲಿಂಕ್ ಡಾಕ್ಯುಮೆಂಟ್‌ಗೆ ಅನುಮೋದನೆ, ಅನಿರ್ಭಂದಿತ ಅನುದಾನ ಕ್ರಿಯಾ ಯೋಜನೆಗೆ ಅನುಮೋದನೆ ಪಡೆಯಲಾಯಿತು.

ಈ ವೇಳೆ ತಾಪಂ ಇಓ ಕೃಷ್ಣಪ್ಪ ಧರ್ಮರ ಅಧ್ಯಕ್ಷತೆ ವಹಿಸಿದ್ದರು. ವಿವಿಧ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳು, ತಾಪಂ ಸಿಬ್ಬಂದಿ ಬಿ.ಬಿ.ತಳವಾರ, ಮಾರುತಿ ಕೊಡ್ಲಿ, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು, ಮಹಿಳಾ ಸ್ವಸಹಾಯ ಸಂಘದ ಸದಸ್ಯೆಯರು ಇತರರು ಇದ್ದರು.

Share this article