ಕನ್ನಡಪ್ರಭ ವಾರ್ತೆ ಕುಶಾಲನಗರ
ಕುಶಾಲನಗರ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯ ಬಳಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಕಾವೇರಿ ಮಹಾ ಆರತಿ ಬಳಗದ ಆಶ್ರಯದಲ್ಲಿ, ಕುಶಾಲನಗರ ಪುರಸಭೆ, ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯ ಟ್ರಸ್ಟ್, ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದೊಂದಿಗೆ ಕಾವೇರಿ ಆರತಿ ಕ್ಷೇತ್ರದಲ್ಲಿ ನಡೆದ ಸರಳ ಕಾರ್ಯಕ್ರಮವನ್ನು ಕುಶಾಲನಗರ ಪುರಸಭೆ ಅಧ್ಯಕ್ಷೆ ಜಯಲಕ್ಷ್ಮಿ ಚಂದ್ರು ಅವರು ಉದ್ಘಾಟಿಸಿ ಶುಭ ಕೋರಿದರು.
9ನೇ ವರ್ಷದ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮಕ್ಕೆ ಕುಶಾಲನಗರ ಡಿ ವೈ ಎಸ್ ಪಿ. ಆರ್ ವಿ ಗಂಗಾಧರಪ್ಪ ಅವರು ಚಾಲನೆ ನೀಡಿದರು.ಈ ಸಂದರ್ಭ ಮಾತನಾಡಿದ ಗಂಗಾಧರಪ್ಪ ಅವರು ಸ್ವಚ್ಛತೆ ಪ್ರತಿಯೊಬ್ಬರ ಮನಸ್ಸು ಹಾಗೂ ಮನೆಮನೆಗಳಿಂದ ಆರಂಭವಾಗಬೇಕು. ಪ್ರತಿಯೊಬ್ಬರಿಗೂ ಸ್ವಚ್ಛತೆಯ ಅರಿವು ಇರಬೇಕು. ಆ ಮೂಲಕ ಸ್ವಚ್ಛ ಸಮಾಜ ನಿರ್ಮಾಣ ಸಾಧ್ಯ ಎಂದು ಹೇಳಿದರು.
ಜನ ಜಾನುವಾರುಗಳ ಜೀವ ಸೆಲೆಯಾಗಿರುವ ಕಾವೇರಿ ನದಿ ಸಂರಕ್ಷಣೆ ಬಗ್ಗೆ ಕಾಳಜಿ ಹೊಂದಬೇಕು ಎಂದು ಅವರು ಹೇಳಿದರು.
ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಡಗು ಜಿಲ್ಲಾ ನಿರ್ದೇಶಕರಾದ ಲೀಲಾವತಿ ಅವರು ಮಾತನಾಡಿ ಡಾ ಡಿ ವೀರೇಂದ್ರ ಹೆಗ್ಗಡೆ ಮತ್ತು ಹೇಮಾವತಿ ಹೆಗ್ಗಡೆ ಅವರ ಮಾರ್ಗದರ್ಶನದೊಂದಿಗೆ ಕಳೆದ ಒಂಬತ್ತು ವರ್ಷಗಳಿಂದ ರಾಜ್ಯದಾದ್ಯಂತ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ ನಡೆಯುತ್ತಿದೆ. ಪ್ರತೀ ಗ್ರಾಮಗಳಲ್ಲಿ ಸಂಸ್ಥೆಯ ಕಾರ್ಯಕರ್ತರು ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಒಂದು ವಾರಗಳ ಕಾಲ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ ಹಾಗೂ ನದಿ ಪರಿಸರಗಳ ಸ್ವಚ್ಛತೆ ಕಾರ್ಯ ನಡೆಸುತ್ತಿದ್ದಾರೆ ಎಂದು ಮಾಹಿತಿ ನೀಡಿದರು.
ಈ ಸಂದರ್ಭ ಕಾವೇರಿ ಮಹಾ ಆರತಿ ಬಳಗದ ಸಂಚಾಲಕಿ ವನಿತಾ ಚಂದ್ರಮೋಹನ್ ಮತ್ತಿತರರು ಮಾತನಾಡಿದರು.