ಇಂದಿನಿಂದ ರಾಜ್ಯಾದ್ಯಂತ 16,797 ಶ್ರದ್ಧಾಕೇಂದ್ರಗಳ ಸ್ವಚ್ಛತಾ ಸಪ್ತಾಹ

KannadaprabhaNewsNetwork |  
Published : Aug 08, 2024, 01:38 AM IST
ಸ್ವಚ್ಛತೆ | Kannada Prabha

ಸಾರಾಂಶ

ಜನರ ಸಹಭಾಗಿತ್ವದಲ್ಲಿ ಶ್ರದ್ಧಾಕೇಂದ್ರಗಳ ಬೃಹತ್ ಸ್ವಚ್ಛತಾ ಅಭಿಯಾನವನ್ನು ರಾಜ್ಯಾದ್ಯಂತ ಕೈಗೊಳ್ಳಲಾಗುತ್ತಿದೆ.

ಕನ್ನಡಪ್ರಭ ವಾರ್ತೆ ಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹಭಾಗಿತ್ವದಲ್ಲಿ ಕಳೆದ 8 ವರ್ಷಗಳಿಂದ ನಿರಂತರವಾಗಿ ಸ್ವ-ಸಹಾಯ ಸಂಘಗಳ ಸದಸ್ಯರು ಶ್ರದ್ಧಾಕೇಂದ್ರದ ಸ್ವಚ್ಛತೆ ಕೈಗೊಳ್ಳುತ್ತಿದ್ದಾರೆ. ಈ ಬಾರಿ ಆ.8ರಿಂದ 14ರ ವರೆಗೆ ರಾಜ್ಯಾದ್ಯಂತ 16,797 ಶ್ರದ್ಧಾಕೇಂದ್ರಗಳ ಸ್ವಚ್ಛತಾ ಸಪ್ತಾಹ ನಡೆಸಲಾಗುವುದು ಎಂದು ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್ ಎಸ್.ಎಸ್. ತಿಳಿಸಿದ್ದಾರೆ.

ಧಾರ್ಮಿಕ ಶ್ರದ್ಧಾಕೇಂದ್ರಗಳು ಒಂದು ಗ್ರಾಮದ ಅತೀ ಮುಖ್ಯ ಭಾಗವಾಗಿದ್ದು, ಅವುಗಳು ಸ್ವಚ್ಛವಾಗಿರುವುದು ಅಗತ್ಯವಾಗಿದೆ. ಈ ಕುರಿತಂತೆ ಅರಿವು ಹಾಗೂ ಜಾಗೃತಿ ಮೂಡಿಸುವ ಸಲುವಾಗಿ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಹಾಗೂ ಹೇಮಾವತಿ ವೀ. ಹೆಗ್ಗಡೆಯವರ ಗ್ರಾಮಾಭಿವೃದ್ಧಿ ಚಿಂತನೆಯಂತೆ ಯೋಜನೆಯ ಮೂಲಕ ಜನರ ಸಹಭಾಗಿತ್ವದಲ್ಲಿ ಶ್ರದ್ಧಾಕೇಂದ್ರಗಳ ಬೃಹತ್ ಸ್ವಚ್ಛತಾ ಅಭಿಯಾನವನ್ನು ರಾಜ್ಯಾದ್ಯಂತ ಕೈಗೊಳ್ಳಲಾಗುತ್ತಿದೆ.

ಈ ವರ್ಷ ರಾಜ್ಯಾದ್ಯಂತ 16,797 ಶ್ರದ್ಧಾಕೇಂದ್ರಗಳನ್ನು ಗುರುತಿಸಲಾಗಿದ್ದು, ಸುಮಾರು 3,95,724 ದೇವಾಲಯದ ಆಡಳಿತ ಮಂಡಳಿ, ಒಕ್ಕೂಟದ ಪದಾಧಿಕಾರಿಗಳು, ಜನಜಾಗೃತಿ ಸದಸ್ಯರು, ನವಜೀವನ ಸಮಿತಿಯ ಸದಸ್ಯರು, ಶೌರ್ಯ ವಿಪತ್ತು ನಿರ್ವಹಣೆಯ ಸದಸ್ಯರು, ಸ್ವಚ್ಛತಾ ಸೇನಾನಿಗಳು, ಊರಿನ ಗಣ್ಯರು, ಗ್ರಾಮ ಪಂಚಾಯಿತಿಯ ಸದಸ್ಯರು, ವಿವಿಧ ಸಂಘ ಸಂಸ್ಥೆಯ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಸ್ವಚ್ಛತಾ ಕಾರ್ಯಕ್ರಮಗಳ ವಿವರ: ದೇವಸ್ಥಾನದ ಸುತ್ತಮುತ್ತಲಿನ ಗಿಡ ಗಂಟಿ ತೆರವು, ಮಂದಿರ, ಮಸೀದಿ, ಚರ್ಚ್‌ಗಳ ಆವರಣ ಸ್ವಚ್ಛತೆ, ಒಳಾಂಗಣ ಸ್ವಚ್ಛತೆಗೆ ಆದ್ಯತೆ, ದೇವಸ್ಥಾನದ ಕಲ್ಯಾಣಿ, ಸಭಾಭವನ, ಅಶ್ವತ್ಥ ಕಟ್ಟೆ/ಅರಳಿಕಟ್ಟೆ ಸ್ವಚ್ಛತೆ, ಶ್ರದ್ಧಾ ಕೇಂದ್ರದ ಪರಿಕರಗಳನ್ನು ಸ್ವಚ್ಛಗೊಳಿಸುವುದು, ಸಾರ್ವಜನಿಕ ಶೌಚಾಲಯ, ನಗರ ಸ್ವಚ್ಛತೆ, ಬೀದಿ ಸ್ವಚ್ಛತೆಗೆ ಒತ್ತು, ಶ್ರದ್ಧಾ ಕೇಂದ್ರಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಲ್ಲಿಸಿ, ಬಟ್ಟೆ ಚೀಲ ಬಳಕೆ ಮಾಡುವುದು. ಜಾತ್ರೆ, ವಿಶೇಷ ಕಾಯಕ್ರಮದ ದಿನ ಸ್ವಚ್ಛತೆಗೆ ತಂಡ ರಚಿಸಿ ಜಾಗೃತಿ ಮೂಡಿಸುವುದು. ಸ್ವಚ್ಛತೆಯ ಬಗ್ಗೆ ನಿಗಾ ವಹಿಸುವ ಆಸಕ್ತ ಸ್ವಯಂಸೇವಕರ ಕಾವಲು ಸಮಿತಿ ರಚನೆ. ತ್ಯಾಜ್ಯಗಳನ್ನು ಬಿಸಾಡಲು ಕಸದ ಬುಟ್ಟಿ ಇಟ್ಟು ಸೂಚನ ಫಲಕ ಅಳವಡಿಕೆ.

ಧಾರ್ಮಿಕ ಕೇಂದ್ರಗಳ ಪಾವಿತ್ರ್ಯತೆ ಕಾಪಾಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ. ಈ ನಿಟ್ಟಿನಲ್ಲಿ ರಾಜ್ಯಾ ದ್ಯಂತ ಶ್ರದ್ಧಾಕೇಂದ್ರಗಳ ಶುಚಿತ್ವ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲಾಗುವುದು ಎಂದು

- ಅನಿಲ್ ಕುಮಾರ್ ಎಸ್.ಎಸ್. ಕಾರ್ಯನಿರ್ವಾಹಕ ನಿರ್ದೇಶಕ, ಗ್ರಾಮಾಭಿವೃದ್ಧಿ ಯೋಜನೆ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

5 ಪಾಲಿಕೆಗಳಲ್ಲಿ ಜಯಭೇರಿ ಬಾರಿಸಲು ಬಿಜೆಪಿಗೆ ಒಳ್ಳೆ ಅವಕಾಶ
ಸಿಎಂ ಗಾದಿ ಸಂಚಲನ : ನಾನು ಸಿಎಂ ಆಗಲಿ ಎಂಬುದು ಜನರ ಬಯಕೆ ಎಂದರು ಡಿಕೆಶಿ