ಕೊಪ್ಪಳ: ಜಿಲ್ಲೆಯ ರಸ್ತೆಗಳಲ್ಲಿ ನಿರ್ಮಿಸಿರುವ ಅವೈಜ್ಞಾನಿಕ ಹಂಪ್‌ಗಳಿಂದ ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗುತ್ತಿದ್ದು, ಮೊದಲು ಅವುಗಳನ್ನು ತೆರವುಗೊಳಿಸಲು ಕ್ರಮ ವಹಿಸಿ. ಆ ಮೂಲಕ ಸಾರ್ವಜನಿಕರ ಸುರಕ್ಷಿತ ಸಂಚಾರಕ್ಕೆ ಅವಕಾಶ ಕಲ್ಪಿಸಿ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಹಾಗೂ ನಗರದ ಪ್ರಮುಖ ರಸ್ತೆಗಳಲ್ಲಿ ಅವೈಜ್ಞಾನಿಕವಾಗಿ ರಸ್ತೆ ಉಬ್ಬುಗಳನ್ನು ನಿರ್ಮಿಸಲಾಗಿದೆ. ಇದರಿಂದ ಸಾರ್ವಜನಿಕರ ಸುಗಮ ಸಂಚಾರಕ್ಕೆ ತೊಂದರೆಯಾಗುವ ಜತೆಗೆ ಕೆಲವು ಕಡೆಗಳಲ್ಲಿ ಅಪಘಾತಗಳೂ ಸಂಭವಿಸುತ್ತವೆ. ಅಂತಹ ಅವೈಜ್ಞಾನಿಕ ರಸ್ತೆ ಉಬ್ಬುಗಳನ್ನು ತೆರವುಗೊಳಿಸಿ, ಅದಕ್ಕೆ ಪರ್ಯಾಯವಾಗಿ ವಾಹನಗಳ ವೇಗವನ್ನು ನಿಯಂತ್ರಿಸಲು ಹಾಗೂ ಅಪಘಾತಗಳನ್ನು ತಪ್ಪಿಸಲು ಬ್ಯಾರಿಕೇಡ್‌ಗಳನ್ನು ಅಳವಡಿಸಿ ಎಂದು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಹೆಚ್ಚಿನ ಅಪಘಾತಗಳು ಸಂಭವಿಸುವ ವಲಯಗಳನ್ನು ಗುರುತಿಸಿ, ತಪ್ಪಿಸಲು ಮುಂಜಾಗ್ರತಾ ಹಾಗೂ ಪರಿಹಾರ ಕ್ರಮಗಳನ್ನು ಕೈಗೊಳ್ಳಿ. ನಗರ ಪ್ರದೇಶದಲ್ಲಿ ಲಾರಿಗಳಂತಹ ವಾಹನ ಸಂಚಾರಕ್ಕೆ ನಿರ್ದಿಷ್ಟ ಸಮಯ ನಿಗದಿಪಡಿಸಿ. ಅನಗತ್ಯ ಸಂಚಾರ ದಟ್ಟಣೆ ತಪ್ಪಿಸಿ. ಗಂಗಾವತಿ ಮತ್ತು ಕೊಪ್ಪಳ ನಗರಸಭೆ ವ್ಯಾಪ್ತಿಯಲ್ಲಿ ಪಾರ್ಕಿಂಗ್ ವ್ಯವಸ್ಥೆ ಗಂಭೀರವಾಗಿದ್ದು, ಇದಕ್ಕಾಗಿ ಪೊಲೀಸ್ ಇಲಾಖೆಯೊಂದಿಗೆ ನಗರಸಭೆ ಆಯುಕ್ತರು ಚರ್ಚಿಸಿ ಸೂಕ್ತ ಪಾರ್ಕಿಂಗ್ ಸ್ಥಳಗಳನ್ನು ಗುರುತಿಸಿ, ಅಗತ್ಯ ವ್ಯವಸ್ಥೆಗೆ ಕ್ರಮ ಕೈಗೊಳ್ಳಬೇಕು. ಬೀದಿ ಬದಿ ವ್ಯಾಪಾರಕ್ಕಾಗಿ ನಿರ್ದಿಷ್ಟ ಸ್ಥಳ ಗುರುತಿಸಿ ಅವರನ್ನು ಸ್ಥಳಾಂತರಿಸಬೇಕು. ಈ ಬಗ್ಗೆ ಬೀದಿ ಬದಿ ವ್ಯಾಪಾರಿಗಳೊಂದಿಗೆ ಸಭೆ ನಡೆಸಿ ಸೂಕ್ತ ತಿಳಿವಳಿಕೆ ನೀಡಿ ಎಂದು ಇಲಾಖಾ ಅಧಿಕಾರಿಗಳಿಗೆ ತಿಳಿಸಿದರು.ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತಾ ನಿಯಮಗಳು, ವಾಹನ ಸಂಚಾರ ಕಾನೂನುಗಳ ಬಗ್ಗೆ ಜಾಗೃತಿ ಮೂಡಿಸಬೇಕು. ಪ್ರತಿ ಶಾಲಾ-ಕಾಲೇಜು ವಾಹನಗಳಿಗೆ ಜಿಪಿಎಸ್ ಅನ್ನು ಕಡ್ಡಾಯವಾಗಿ ಅಳವಡಿಸಬೇಕು. ಅಪ್ರಾಪ್ತ ವಯಸ್ಸಿನ ಮಕ್ಕಳು ವಾಹನ ಚಾಲನೆ ಮಾಡದಂತೆ ಪಾಲಕರು ಎಚ್ಚರಿಕೆ ವಹಿಸಬೇಕು. ಒಂದು ವೇಳೆ ಅಪ್ರಾಪ್ತರು ವಾಹನ ಚಾಲನೆ ಮಾಡುವುದು ಕಂಡುಬಂದಲ್ಲಿ ವಾಹನ ವಶಕ್ಕೆ ಪಡೆದು ಪಾಲಕರ ಚಾಲನಾ ಪರವಾನಗಿ ರದ್ದುಪಡಿಸಿ, ಸರ್ಕಾರದ ನಿಗದಿಪಡಿಸಿದ ದಂಡ ವಸೂಲಿ ಮಾಡಬೇಕು. ನಗರ ಪ್ರದೇಶದಲ್ಲಿ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಹಾಗೂ ನಾಲ್ಕು ಚಕ್ರ ವಾಹನ ಸವಾರರು ಸೀಟ್ ಬೆಲ್ಟ್ ಕಡ್ಡಾಯಗೊಳಿಸಬೇಕು. ಅತಿ ವೇಗದ, ಕರ್ಕಶ ಶಬ್ದ ಉಂಟುಮಾಡುವ ವಾಹನಗಳನ್ನು ವಶಕ್ಕೆ ಪಡೆಯಬೇಕು. ಈ ಬಗ್ಗೆ ಪೊಲೀಸ್ ಇಲಾಖೆಯೊಂದಿಗೆ ಸಾರಿಗೆ ಇಲಾಖೆಯು ಜಂಟಿಯಾಗಿ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮ್ ಅರಸಿದ್ದಿ ಮಾತನಾಡಿ, ನಗರ ಪ್ರದೇಶದಲ್ಲಿ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸುತ್ತಿದ್ದು, ಜಿಲ್ಲೆಯ ಪ್ರಮುಖ ರಸ್ತೆಗಳಲ್ಲಿ ಪಾರ್ಕಿಂಗ್ ಅವ್ಯವಸ್ಥೆ ಕುರಿತು ಕ್ರಮ ಕೈಗೊಂಡು ವ್ಯವಸ್ಥಿತ ಪಾರ್ಕಿಂಗ್‌ಗೆ ನಗರಸಭೆ ಆಯುಕ್ತರೊಂದಿಗೆ ಚರ್ಚಿಸಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಹೆಚ್ಚುವರಿ ಎಸ್‌ಪಿ ಹೇಮಂತಕುಮಾರ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ರೇಷ್ಮಾ ಹಾನಗಲ್, ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಅಭಿಯಂತರರಾದ ಹೇಮಂತರಾಜು, ಪ್ರಾದೇಶಿಕ ಸಾರಿಗೆ ಅಧಿಕಾರಿ ಎಲ್.ಬಿ. ನಾಲವಾರ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.