ಜನೌಷಧಿ ಕೇಂದ್ರಗಳ ತೆರವು ಕೀಳು ರಾಜಕಾರಣ: ಕಿಶೋರ್‌ ಕುಮಾರ್‌

KannadaprabhaNewsNetwork |  
Published : May 28, 2025, 12:20 AM IST
27ಕಿಶೋರ್‌ | Kannada Prabha

ಸಾರಾಂಶ

‘ಪ್ರಧಾನಮಂತ್ರಿ ಜನೌಷಧಿ ಕೇಂದ್ರ’ಗಳನ್ನು ರಾಜ್ಯದ ಜಿಲ್ಲಾಸ್ಪತ್ರೆಗಳ ಆವರಣದಿಂದ ತೆರವುಗೊಳಿಸಿರುವುದು ಕಾಂಗ್ರೆಸ್ ಸರ್ಕಾರದ ಕೀಳು ರಾಜಕಾರಣಕ್ಕೆ ಹಿಡಿದ ಕೈಗನ್ನಡಿ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಉಡುಪಿ

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಜನಪರ ಯೋಜನೆ ‘ಪ್ರಧಾನಮಂತ್ರಿ ಜನೌಷಧಿ ಕೇಂದ್ರ’ಗಳನ್ನು ರಾಜ್ಯದ ಜಿಲ್ಲಾಸ್ಪತ್ರೆಗಳ ಆವರಣದಿಂದ ತೆರವುಗೊಳಿಸಿರುವುದು ಕಾಂಗ್ರೆಸ್ ಸರ್ಕಾರದ ಕೀಳು ರಾಜಕಾರಣಕ್ಕೆ ಹಿಡಿದ ಕೈಗನ್ನಡಿ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಡವರಿಗೆ ಕೈಗೆಟಕುವ ದರದಲ್ಲಿ ಔಷಧಿಗಳು ದೊರಕಬೇಕು, ಔಷಧಿಗಳ ಕೊರತೆಯಿಂದ ಬಡವರು ಪ್ರಾಣ ಕಳೆದುಕೊಳ್ಳುವಂತಾಗಬಾರದು ಎಂಬ ಸದುದ್ದೇಶದಿಂದ ಕೇಂದ್ರ ಸರಕಾರ ಜನೌಷಧಿ ಕೇಂದ್ರಗಳನ್ನು ದೇಶಾದ್ಯಂತ ತೆರೆದಿದೆ. ಆದರೆ ಈ ಜನೌಷಧಿ ಕೇಂದ್ರದ ನಾಮಫಲಕದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಫೋಟೋ ಇರುವುದನ್ನು ಸಹಿಸದೆ, ಜಿಲ್ಲಾಸ್ಪತ್ರೆಗಳಲ್ಲಿ ಉಚಿತ ಔಷಧಿಗಳ ಸಮರ್ಪಕ ವ್ಯವಸ್ಥೆಯನ್ನೂ ಮಾಡದೆ, ಕೇವಲ ದ್ವೇಷ ರಾಜಕಾರಣಕ್ಕಾಗಿ ರಾಜ್ಯ ಸರ್ಕಾರ ಜನೌಷಧಿ ಕೇಂದ್ರಗಳನ್ನು ತೆರವುಗೊಳಿಸಿ ಬಡವರ ಜೀವನದಲ್ಲಿ ಚೆಲ್ಲಾಟವಾಡುತ್ತಿದೆ ಎಂದವರು ಆರೋಪಿಸಿದ್ದಾರೆ. ಜಿಲ್ಲಾಸ್ಪತ್ರೆಗಳಲ್ಲಿ ಎಲ್ಲಾ ಔಷಧಿಗಳು ಉಚಿತವಾಗಿ ದೊರೆಯುತ್ತದೆ ಎಂಬ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರೇ ಹೇಳಿದ್ದಾರೆ, ಆದರೆ ರಿಯಾಲಿಟಿ ಚೆಕ್ ನಡೆಸಿದಾಗ ಯಾವುದೇ ಅಗತ್ಯ ಔಷಧಿಗಳು, ಮಾತ್ರೆಗಳು ಜಿಲ್ಲಾಸ್ಪತ್ರೆಗಳಲ್ಲಿ ಲಭ್ಯವಿಲ್ಲ ಎಂಬ ಆಘಾತಕಾರಿ ಅಂಶ ಬಯಲಾಗಿದೆ. ಬಡವರು ಜಿಲ್ಲಾಸ್ಪತ್ರೆಗಳಲ್ಲಿ ಔಷಧಿಗಾಗಿ ಪರದಾಟ ನಡೆಸುವ ದಯನೀಯ ಸ್ಥಿತಿ ರಾಜ್ಯ ಸರ್ಕಾರದ ಬೇಜವಾಬ್ದಾರಿತನ ಜಗಜ್ಜಾಹೀರುಗೊಳಿಸಿದೆ ಎಂದವರು ಹೇಳಿದ್ದಾರೆ. ಜಿಲ್ಲಾಸ್ಪತ್ರೆಗಳಲ್ಲಿ ಜನೌಷಧಿ ಕೇಂದ್ರಗಳನ್ನು ತೆರವುಗೊಳಿಸಿ ಬಡವರ ಪಾಲಿಗೆ ಮರಣ ಶಾಸನ ಬರೆದಿರುವ ಜೊತೆಗೆ ವಿಪರೀತ ಬೆಲೆ ಏರಿಕೆ, ಹಾಲು ಉತ್ಪಾದಕರ ಸಬ್ಸಿಡಿ ಕಡಿತ ಸಹಿತ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್, ರೈತ ವಿದ್ಯಾನಿಧಿ, ಭಾಗ್ಯಲಕ್ಷ್ಮಿ, ಉಚಿತ ಬೈಸಿಕಲ್ ವಿತರಣೆ ಮುಂತಾದ ಬಿಜೆಪಿ ಆಡಳಿತಾವಧಿಯ ಜನಪರ ಯೋಜನೆಗಳಿಗೆ ರಾಜ್ಯದ ಪಾಲಿನ ಅನುದಾನವನ್ನು ನೀಡದೆ ಎಳ್ಳು ನೀರು ಬಿಟ್ಟಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದ ರಾಜ್ಯದ ಜನತೆ ರೋಸಿಹೋಗಿದ್ದು ರಾಜ್ಯ ಸರಕಾರದ ಜನವಿರೋಧಿ ನೀತಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕಿಶೋರ್ ಕುಮಾರ್ ಕುಂದಾಪುರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೋಗಿಲು ನಿರಾಶ್ರಿತರಿಗೆ 5ರ ನಂತರ ವಸತಿ ಭಾಗ್ಯ
ಹೊಸ ವರ್ಷಕ್ಕೆ ಶೇ.40 ಮದ್ಯ ಮಾರಾಟ ಹೆಚ್ಚಳ!