ಕಾರ್ಕಳ: ರಾಜ್ಯದಲ್ಲಿ ಆನೆ, ಹುಲಿ ಹಾಗೂ ಚಿರತೆಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇದೇ ಕಾರಣಕ್ಕೆ ಜನ ವಸತಿ ಪ್ರದೇಶಗಳಿಗೆ ಪ್ರಾಣಿಗಳು ಪ್ರವೇಶ ಮಾಡುತ್ತಿವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಚಿಕ್ಕಮಗಳೂರಿನಲ್ಲಿ ಹೆಚ್ಚುತ್ತಿರುವ ಆನೆ ದಾಳಿ ಪ್ರಕರಣಗಳನ್ನು ಉಲ್ಲೇಖಿಸಿ ಮಾತನಾಡಿದ ಅವರು ರಾಜ್ಯದಲ್ಲಿ ಮಾನವ-ವನ್ಯಜೀವಿ ಸಂಘರ್ಷ ಹೆಚ್ಚುತ್ತಿದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರವಾಗಿ ಕಾಡಿನ ಅಂಚಿನಲ್ಲಿ ದೊಡ್ಡ ಪ್ರಮಾಣದಲ್ಲಿ ಬ್ಯಾರಿಕೇಡ್ ಅಳವಡಿಸುವ ಯೋಜನೆಯನ್ನು ಜಾರಿಗೆ ತರಲಾಗುವುದು ಎಂದು ತಿಳಿಸಿದರು. ಈ ಸಮಸ್ಯೆಗೆ ಬ್ಯಾರಿಕೇಡ್ ನಿರ್ಮಾಣವೇ ಪ್ರಮುಖ ಪರಿಹಾರವಾಗಿದ್ದು, ಜೊತೆಗೆ ವಿಶೇಷ ಟಾಸ್ಕ್ ಫೋರ್ಸ್ ರಚಿಸಲಾಗುವುದು ಎಂದು ಘೋಷಿಸಿದರು.
ಅಜೀಮ್ ಪ್ರೇಮ್ ಜಿ ವಿಶ್ವವಿದ್ಯಾಲಯದಲ್ಲಿ ಎಬಿವಿಪಿ ಕಾರ್ಯಕರ್ತರಿಂದ ನಡೆದ ದಾಳಿ ಪ್ರಕರಣದ ಕುರಿತು ಮಾತನಾಡಿದ ಸಿಎಂ, ಯಾರೂ ಕಾನೂನನ್ನು ಕೈಗೆ ತೆಗೆದುಕೊಳ್ಳಲು ಅವಕಾಶ ನೀಡುವುದಿಲ್ಲ. ಎಬಿವಿಪಿ ಅಥವಾ ಬೇರೆ ಯಾವುದೇ ಸಂಘಟನೆಗಳಾದರೂ ಕಾನೂನು ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು. ವಿನಾಕಾರಣ ಗಲಾಟೆ ಸೃಷ್ಟಿಸುವವರನ್ನು ಸಹಿಸಲಾಗುವುದಿಲ್ಲ ಎಂದರು.
ಗ್ಯಾರಂಟಿ ಇದ್ದೇ ಇರುತ್ತದೆ.ಗ್ಯಾರಂಟಿ ಯೋಜನೆಗಳು ಸರ್ಕಾರಕ್ಕೆ ಭಾರವಾಗಿವೆ ಎಂಬ ಡಿಕೆಶಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ವರ್ಷಕ್ಕೆ ಸುಮಾರು 52 ಸಾವಿರ ಕೋಟಿ ರು. ಗೂ ಹೆಚ್ಚು ಹಣ ಬೇಕಾಗುತ್ತದೆ. ಅದನ್ನು ಭಾರವೆಂದು ಹೇಳಿರಬಹುದು. ಆದರೆ ಸರ್ಕಾರ ಅಭಿವೃದ್ಧಿ ಹಾಗೂ ಗ್ಯಾರಂಟಿ ಯೋಜನೆ ಎರಡನ್ನೂ ಸಮಾನವಾಗಿ ಮುಂದುವರಿಸುತ್ತಿದೆ ಎಂದು ಸ್ಪಷ್ಟಪಡಿಸಿದರು.
ಮೊದಲ ಬಾರಿಯ ಶಾಸಕರಿಗೆ ಮಂತ್ರಿಗಿರಿ ಇಲ್ಲ: ಪ್ರಥಮ ಬಾರಿ ಶಾಸಕರಾದವರು ಮಂತ್ರಿಯಾಗಬೇಕು ಎಂದು ಬೇಡಿಕೆ ಇಟ್ಟಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಆಸೆ ವ್ಯಕ್ತಪಡಿಸುವುದು ತಪ್ಪಲ್ಲ. ಆದರೆ ಮೊದಲ ಬಾರಿ ಶಾಸಕರಿಗೆ ಮಂತ್ರಿ ಸ್ಥಾನ ನೀಡಬಾರದು ಎಂಬ ನಿರ್ಣಯ ಕೈಗೊಂಡಿದ್ದೇವೆ ಎಂದು ಹೇಳಿದರು. ಹೈಕಮಾಂಡ್ ಸೂಚನೆಗಳನ್ನು ಪಾಲಿಸಲಾಗುವುದು ಎಂದು ತಿಳಿಸಿದರು. ಅದೇ ರೀತಿ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿ ಕೊರತೆ ಇಲ್ಲ ಎಂದು ಸಿಎಂ ಸ್ಪಷ್ಟಪಡಿಸಿದರು. ಆಸ್ಪತ್ರೆಗಳಲ್ಲಿ ಯಾವುದೇ ಸಮಸ್ಯೆ ಇಲ್ಲ.