ಕನ್ನಡಪ್ರಭ ವಾರ್ತೆ ಬೆಂಗಳೂರು:
ಹಾಸನ ಜಿಲ್ಲೆಯ ಬೇಲೂರಿನಲ್ಲಿ ಸೃಷ್ಟಿಯಾಗಿರುವ ಮಾನವ-ಆನೆ ಸಂಘರ್ಷಕ್ಕೆ ಪರಿಹಾರ ಎನ್ನುವಂತೆ 10 ಕಾಡಾನೆಗಳನ್ನು ಸೆರೆ ಹಿಡಿದು ಬೇರೆಡೆಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳುವುದು ಹಾಗೂ ಹಾಸನ ಜಿಲ್ಲೆಯ ಕಾಡಾನೆಗಳನ್ನು ಚಿಕ್ಕಮಗಳೂರಿನ ಮೂಡಿಗೆರೆ ಸೇರಿ ಇನ್ನಿತರ ಕಡೆಗೆ ಓಡಿಸಲಾಗಿದೆ. ಇದರಿಂದಾಗಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಆತಂಕ ಸೃಷ್ಟಿಯಾಗಿದೆ ಹಾಗೂ ಇದರಿಂದ ಚಿಕ್ಕಮಗಳೂರು ಜಿಲ್ಲೆ ವ್ಯಾಪ್ತಿಯ ಶಾಸಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅದರಲ್ಲೂ ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ, ಚಿಕ್ಕಮಗಳೂರು ಶಾಸಕ ಎಚ್.ಡಿ. ತಮ್ಮಯ್ಯ ಸೇರಿದಂತೆ ಇತರರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರಕ್ಕೂ ಬಂದಿದ್ದರು.
ಈ ವಿಚಾರದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಧ್ಯಪ್ರವೇಶಿಸಿದ್ದು ಜಪಾನ್ ಪ್ರವಾಸ ನಡುವೆಯೇ ರಾಜೀನಾಮೆ ನಿರ್ಧಾರ ಮಾಡಿದ್ದ ಶಾಸಕರಿಗೆ ದೂರವಾಣಿ ಕರೆ ಮಾಡಿ ಸಮಾಧಾನಪಡಿಸುವ ಕೆಲಸ ಮಾಡಿದ್ದಾರೆ. ಚಿಕ್ಕಮಗಳೂರು ಭಾಗದ ಶಾಸಕರೊಂದಿಗೆ ಮಾತನಾಡಿ, ಆನೆಗಳ ಸ್ಥಳಾಂತರ ಪ್ರಕ್ರಿಯೆ ನಿಲ್ಲಿಸುವಂತೆ ಸೂಚನೆ ನೀಡಿದ್ದೇನೆ. ನಾನು ಜಪಾನ್‌ನಿಂದ ವಾಪಾಸು ಬರುವವರೆಗೂ ತಾಳ್ಮೆಯಿಂದ ಇರಿ. ಈ ಸಮಸ್ಯೆ ಬಗೆಹರಿಸುತ್ತೇನೆ ಎಂದು ಸೂಚನೆ ನೀಡಿದ್ದಾರೆ.ರಾಜೀನಾಮೆ ನಿರ್ಧಾರದಿಂದ
ಖುದ್ದು ಮುಖ್ಯಮಂತ್ರಿ ಅವರೇ ದೂರವಾಣಿ ಕರೆ ಮಾಡಿ ಮಾತನಾಡಿರುವುದರಿಂದಾಗಿ ಚಿಕ್ಕಮಗಳೂರು ಭಾಗದ ಶಾಸಕರು ರಾಜೀನಾಮೆಯಿಂದ ಹಿಂದೆ ಸರಿದಿದ್ದಾರೆ. ಆದರೂ, ಮಾಧ್ಯಮಗಳೆದುರು ತಮ್ಮ ಆಕ್ರೋಶವನ್ನು ಶಾಸಕರು ಹೊರ ಹಾಕಿದ್ದಾರೆ.
ಮುಖ್ಯಮಂತ್ರಿಗಳು ತಾಳ್ಮೆಯಿಂದಿರುವಂತೆ ಹೇಳಿದ್ದಾರೆ. ಹೀಗಾಗಿ ಸುಮ್ಮನಿರುತ್ತೇವೆ. ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಮುಂದಿನ ಹೋರಾಟದ ಬಗ್ಗೆ ನಿರ್ಧರಿಸುತ್ತೇವೆ. ಶಾಸಕಿ ನಯನಾ ಮೋಟಮ್ಮ ಈಗಾಗಲೇ ರಾಜೀನಾಮೆ ಸಲ್ಲಿಸಿದ್ದಾರೆ, ಉಳಿದ ಶಾಸಕರು ಚರ್ಚಿಸಿ ನಿರ್ಧರಿಸುತ್ತೇವೆ. 136 ಶಾಸಕರ ಬೆಂಬಲದಿಂದ ಸರ್ಕಾರ ಅಸ್ತಿತ್ವದಲ್ಲಿದೆ, ಒಬ್ಬ ಸಚಿವರಿಂದ ಸರ್ಕಾರ ನಡೆಯುತ್ತಿಲ್ಲ. ಆನೆ ಸ್ಥಳಾಂತರ ವಿಚಾರದಲ್ಲಿ ಯಾವುದೇ ಕಾರಣಕ್ಕೂ ನಮ್ಮ ಸಹಮತವಿಲ್ಲ ಎಂದು ಸ್ಪಷ್ಟಪಡಿಸಿದರು.
ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ತರೀಕೆರೆ ಶಾಸಕ ಶ್ರೀನಿವಾಸ್, ಮುಖ್ಯಮಂತ್ರಿಗಳು ನಮ್ಮೊಂದಿಗೆ ಮಾತನಾಡಿ ಸುಮ್ಮನಿರುವಂತೆ ಹೇಳಿದ್ದಾರೆ. ರಾಜೀನಾಮೆ ನೀಡಬೇಕು ಎಂದು ಸ್ಪೀಕರ್ ಅವರ ಸಮಯ ಕೇಳಿದ್ದೆವು. ಆದರೆ, ಮುಖ್ಯಮಂತ್ರಿ ಅವರು ಸಮಸ್ಯೆ ಬಗೆಹರಿಸುತ್ತೇನೆ ಎಂದಿದ್ದಾರೆ. ಅವರ ಮಾತಿಗೆ ಗೌರವ ನೀಡುತ್ತೇವೆ. ಕೆಪಿಸಿಸಿ ಅಧ್ಯಕ್ಷರೊಂದಿಗೂ ಮಾತನಾಡಿದ್ದೇವೆ ಎಂದು ತಿಳಿಸಿದರು.