ಸಿಎಂ ಡಿಕೆಶಿ ಜನಪರ ಆಡಳಿತದಿಂದ ವಿಶ್ವಾಸ ಗಳಿಸುತ್ತಿದ್ದಾರೆ

KannadaprabhaNewsNetwork |  
Published : Jul 14, 2026, 01:45 AM IST
ತಾಲೂಕಿನ ಮೆದಿಕೆರೆ ಗ್ರಾಮದಲ್ಲಿ ತಾಲೂಕು ಆಡಳಿತದ ವತಿಯಿಂದ ಹಮ್ಮಿಕೊಂಡಿದ್ದ ಜನ ಸ್ಫಂಧನ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದ ಶಾಸಕ ಬಸವರಾಜು ವಿ.ಶಿವಗಂಗಾ | Kannada Prabha

ಸಾರಾಂಶ

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು 3 ವರ್ಷ ಕಳೆದಿದ್ದು, ನಮ್ಮ ನಾಯಕರಾದ ಡಿ.ಕೆ.ಶಿವಕುಮಾರ್ ಮುಖ್ಯ ಮಂತ್ರಿಗಳಾಗಿ ಒಂದು ತಿಂಗಳು ಕಳೆದಿದೆ. ಮುಖ್ಯಮಂತ್ರಿಗಳಾಗಿ ಅಧಿಕಾರ ಸ್ವೀಕರಿಸಿ ಮೊದಲ ಸಚಿವ ಸಂಪುಟ ಸಭೆಯಲ್ಲಿಯೇ ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡು ರಾಜ್ಯದ ಜನತೆಯ ವಿಶ್ವಾಸವನ್ನು ಗಳಿಸಿದ್ದಾರೆ ಎಂದು ಶಾಸಕ ಬಸವರಾಜು ವಿ. ಶಿವಗಂಗಾ ಹೇಳಿದ್ದಾರೆ.

- ಚನ್ನಗಿರಿ ಶಾಸಕ ಬಸವರಾಜ ಶಿವಗಂಗಾ ಹೇಳಿಕೆ । ಮೆದಿಕೆರೆಯಲ್ಲಿ ಜನಸ್ಪಂದನ ಕಾರ್ಯಕ್ರಮ

- - -

ಕನ್ನಡಪ್ರಭ ವಾರ್ತೆ ಚನ್ನಗಿರಿ

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು 3 ವರ್ಷ ಕಳೆದಿದ್ದು, ನಮ್ಮ ನಾಯಕರಾದ ಡಿ.ಕೆ.ಶಿವಕುಮಾರ್ ಮುಖ್ಯ ಮಂತ್ರಿಗಳಾಗಿ ಒಂದು ತಿಂಗಳು ಕಳೆದಿದೆ. ಮುಖ್ಯಮಂತ್ರಿಗಳಾಗಿ ಅಧಿಕಾರ ಸ್ವೀಕರಿಸಿ ಮೊದಲ ಸಚಿವ ಸಂಪುಟ ಸಭೆಯಲ್ಲಿಯೇ ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡು ರಾಜ್ಯದ ಜನತೆಯ ವಿಶ್ವಾಸವನ್ನು ಗಳಿಸಿದ್ದಾರೆ ಎಂದು ಶಾಸಕ ಬಸವರಾಜು ವಿ. ಶಿವಗಂಗಾ ಹೇಳಿದರು.

ಸೋಮವಾರ ತಾಲೂಕಿನ ಮೆದಿಕೆರೆ ಗ್ರಾಮದಲ್ಲಿ ತಾಲೂಕು ಆಡಳಿತ ವತಿಯಿಂದ ಹಮ್ಮಿಕೊಂಡಿದ್ದ ಜನಸ್ಪಂದನ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, ನಿರುದ್ಯೋಗ ನಿರ್ಮೂಲನೆಗೆ ಉದ್ಯೋಗ ವಿನಿಮಯ ಕೇಂದ್ರಗಳ ಸ್ಥಾಪನೆ, ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ಭಾರತ್ ಜೋಡೋ ಯುವಕ ಸಂಘಗಳಿಗೆ ಪ್ರತಿ ವರ್ಷ ₹10 ಲಕ್ಷ ಅನುದಾನ, ರಾಜ್ಯದಲ್ಲಿರುವ ಎಲ್ಲಾ ಬಿ ಖಾತೆಯ ಆಸ್ತಿಗಳಿಗೆ ಎ ಖಾತೆಯನ್ನು ನೀಡುವ ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿರುವುದು ಮುಖ್ಯಮಂತ್ರಿಗಳ ಜನಪರ ಕಾಳಜಿ ತೋರುತ್ತಿದೆ ಎಂದರು.

ಗ್ಯಾರಂಟಿಗಳ ಜೊತೆಗೆ ರಾಜ್ಯದ ಅಭಿವೃದ್ಧಿ ಮಾಡುತ್ತಿರುವುದು ಕಾಂಗ್ರೆಸ್ ಸರ್ಕಾರವಾಗಿದೆ. ಈ ಮೆದಿಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 294 ಜನರು ಸರ್ಕಾರಿ ಜಾಗಗಳಲ್ಲಿ ಮನೆಗಳನ್ನು ನಿರ್ಮಿಸಿಕೊಂಡಿದ್ದಾರೆ. ಅವರೆಲ್ಲರಿಗೂ ಆ ಜಾಗದ ಮಾಲೀಕತ್ವವನ್ನು ನೀಡಲು ಈ ದಿನ ಹಕ್ಕುಪತ್ರಗಳನ್ನು ವಿತರಣೆ ಮಾಡಲಾಗುತ್ತಿದೆ. ಸಾಸಿವೆಹಳ್ಳಿ ಏತನೀರಾವರಿ ಯೋಜನೆಯು ನಮ್ಮ ಸರ್ಕಾರದ ಮಹತ್ವದ ಯೋಜನೆಯಾಗಿದೆ. ಈ ಯೋಜನೆಗೆ ಒಳಪಡುವ ಎಲ್ಲ ಕೆರೆಗಳಿಗೆ ಈಗಾಗಲೇ ನೀರು ಹರಿದುಬರುತ್ತಿದೆ ಎಂದು ಹೇಳಿದರು.

ಮತ್ತೊಂದು ₹365 ಕೋಟಿ ವೆಚ್ಚದ ನೂತನ ಏತ ನೀರಾವರಿ ಯೋಜನೆಯ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಮುಗಿದಿದೆ. ಮುಂದಿನ ಕೆಲವೇ ತಿಂಗಳುಗಳಲ್ಲಿ ಈ ಯೋಜನೆಗೆ ಗುದ್ದಲಿ ಪೂಜೆ ನೆರವೇರಿಸಿ ಈ ಅವಧಿಯಲ್ಲಿಯೇ ಕಾಮಗಾರಿ ಪೂರ್ಣಗೊಳಿಸಿ ಉದ್ಘಾಟಿಸಲಾಗುವುದು. ಮೆದಿಕೆರೆ ಗ್ರಾಮದ ಮತದಾರರು ಚುನಾವಣೆ ಸಂದರ್ಭ ನನಗೆ ಹೆಚ್ಚು ಮತಗಳನ್ನು ನೀಡಿದ್ದಾರೆ. ಶಾಸಕನಾದ ಮೇಲೆ ಈ ಗ್ರಾಪಂ ವ್ಯಾಪ್ತಿಯ ಸಮಗ್ರ ಅಭಿವೃದ್ಧಿಗೆ ₹4.6 ಕೋಟಿ ಅನುದಾನ ನೀಡಿದ್ದೇನೆ ಎಂದರು.

ಇದೇ ಸಂದರ್ಭದಲ್ಲಿ ಸಾರಿಗೆ ಸಂಸ್ಥೆಯ ಚನ್ನಗಿರಿಯಿಂದ ರಾಯಚೂರಿಗೆ ಸಂಪರ್ಕ ಕಲ್ಫಿಸುವ ನೂತನ ಬಸ್ ಮಾರ್ಗವನ್ನು ಶಾಸಕರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಎನ್.ಜೆ. ನಾಗರಾಜ್, ತಾಪಂ ಕಾರ್ಯನಿರ್ವಾಹಕಾಧಿಕಾರಿ ಪ್ರಕಾಶ್, ಕೆ.ಎಸ್.ಆರ್.ಟಿ.ಸಿ.ಯ ವ್ಯವಸ್ಥಾಪಕ ಸಿದ್ದೇಶ್, ತೋಟಗಾರಿಕಾ ಇಲಾಖೆ ಸಹಾಯಕ ನಿರ್ದೇಶಕ ಶ್ರೀಕಾಂತ್, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಅರುಣ್, ಸಮಾಜ ಕಲ್ಯಾಣ ಅಧಿಕಾರಿ ಮಲ್ಲಿಕಾರ್ಜುನ್, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಶಾಂತಕುಮಾರ್, ಪಿಎಸ್‌ಐ ಜಗದೀಶ್ ಸೇರಿದಂತೆ ತಾಲೂಕುಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

- - -

(ಕೋಟ್‌) ಕಾಂಗ್ರೆಸ್ ಪಕ್ಷ ರಾಜ್ಯದ ಜನತೆಗೆ ನೀಡಿದ್ದ 5 ಗ್ಯಾರಂಟಿ ಯೋಜನೆಗಳನ್ನು ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಅನುಷ್ಠಾನಕ್ಕೆ ತಂದಿದೆ. ಬಿಜೆಪಿಯವರು ಇತರೆ ರಾಜ್ಯಗಳಲ್ಲಿ ನಮ್ಮ ಗ್ಯಾರಂಟಿ ಯೋಜನೆಗಳ ನಕಲು ಮಾಡಿ ಅಧಿಕಾರಕ್ಕೆ ಬಂದು, ಇದುವರೆಗೂ ಅವರು ಕೊಟ್ಟ ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿಲ್ಲ.

- ಬಸವರಾಜ ವಿ. ಶಿವಗಂಗಾ, ಶಾಸಕ, ಚನ್ನಗಿರಿ ಕ್ಷೇತ್ರ.

- - -

-13ಕೆಸಿಎನ್ಜಿ2:

ಚನ್ನಗಿರಿ ತಾಲೂಕಿನ ಮೆದಿಕೆರೆಯಲ್ಲಿ ತಾಲೂಕು ಆಡಳಿತ ಹಮ್ಮಿಕೊಂಡಿದ್ದ ಜನಸ್ಪಂದನ ಕಾರ್ಯಕ್ರಮದಲ್ಲಿ ಶಾಸಕ ಬಸವರಾಜು ವಿ. ಶಿವಗಂಗಾ ಫಲಾನುಭವಿಗಳಿಗೆ ಹಕ್ಕುಪತ್ರಗಳನ್ನು ವಿತರಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶೀಘ್ರದಲ್ಲೇ ‌ಹಲವು ಅಭಿವೃದ್ಧಿ ಕಾಮಗಾರಿಗಳು ಪೂರ್ಣ: ಕೆ.ಎಂ.ಉದಯ್
ಕಾವೇರಿ ನದಿಯಲ್ಲಿ ಗಾಯಕಿ ಎಸ್.ಜಾನಕಿ ಅಸ್ಥಿ ವಿಸರ್ಜನೆ