ಜಾತಿಗಣತಿ ಹೆಸರಲ್ಲಿ ಸಿಎಂರಿಂದ ಕುತಂತ್ರ : ಬಿ.ವೈ.ವಿಜಯೇಂದ್ರ

KannadaprabhaNewsNetwork |  
Published : May 02, 2025, 12:12 AM ISTUpdated : May 02, 2025, 10:28 AM IST
BY Vijayendra

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾತಿಗಣತಿ ಹೆಸರಲ್ಲಿ ಜಾತಿ ವಿಷಬೀಜ ಬಿತ್ತುವ ಕುತಂತ್ರ ಮಾಡುತ್ತಿದ್ದಾರೆ  ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

 ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾತಿಗಣತಿ ಹೆಸರಲ್ಲಿ ಜಾತಿ ವಿಷಬೀಜ ಬಿತ್ತುವ ಕುತಂತ್ರ ಮಾಡುತ್ತಿದ್ದಾರೆ. ಆದರೆ, ಕೇಂದ್ರ ಸರ್ಕಾರವೇ ಇದೀಗ ಜಾತಿಗಣತಿ ನಿರ್ಧಾರ ಕೈಗೊಂಡಿದ್ದರಿಂದ ಇವೆಲ್ಲಕ್ಕೂ ಇತಿಶ್ರೀ ಬೀಳಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಗುರುವಾರ ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜನಗಣತಿ ಜತೆಗೆ ಜಾತಿ ಜನಗಣತಿ ಕೈಗೊಳ್ಳುವ ತೀರ್ಮಾನ ಕೈಗೊಂಡಿರುವುದು ಸ್ವಾಗತಾರ್ಹ. ಭಾರತದಲ್ಲಿ 1931ರ ನಂತರ ಜಾತಿ ಜನಗಣತಿ ಆಗಿರಲಿಲ್ಲ. ಈ ದೇಶದ ಪ್ರತಿಯೊಬ್ಬ ಪ್ರಜೆಗೂ ನ್ಯಾಯ ಸಿಗಬೇಕು ಮತ್ತು ಎಲ್ಲ ಸಮುದಾಯಗಳಿಗೂ ಸವಲತ್ತು ಸಿಗಬೇಕೆಂಬುದೇ ಮೋದಿ ಆಶಯ ಎಂದು ಹೇಳಿದರು.

ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಜಾತಿ- ಜಾತಿಗಳ ನಡುವೆ ವಿಷಬೀಜ ಬಿತ್ತುವ ಮೂಲಕ ಸಮಾಜ ಒಡೆಯುವ ಕೆಲಸ ಮಾಡುತ್ತಿದೆ. ಕೇಂದ್ರದ ಈ ನಿರ್ಧಾರ ಕಾಂಗ್ರೆಸ್‌ಗೆ ಅಚ್ಚರಿಯಾಗಿದೆ. ಸ್ವಾತಂತ್ರ್ಯಾ ನಂತರ ಆಡಳಿತ ನಡೆಸಿದ್ದ ಕಾಂಗ್ರೆಸ್ ಜಾತಿ ಜನಗಣತಿ ಕಾರ್ಯ ಕೈಗೊಂಡಿರಲಿಲ್ಲ. ರಾಜ್ಯ ಸರ್ಕಾರಕ್ಕೆ ಜಾತಿ ಜನಗಣತಿ ಮಾಡುವ ಅವಕಾಶ ಇಲ್ಲ. ಕೇಂದ್ರ ಸರ್ಕಾರಕ್ಕೆ ಮಾತ್ರ ಈ ಅಧಿಕಾರ ಇದೆ. ಇದೆಲ್ಲ ಗೊತ್ತಿದ್ದರೂ ಜಾತಿ ವಿಷಬೀಜ ಬಿತ್ತುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡಿದೆ ಎಂದು ವಿಜಯೇಂದ್ರ ಟೀಕಿಸಿದರು.

ರಾಜ್ಯದಲ್ಲಿ ಜಾತಿ ಜನಗಣತಿ ಮಾಡಿ 10 ವರ್ಷ ಕಳೆದಿದ್ದು, ಅವಧಿ ಮೀರಿದೆ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ವೀರಪ್ಪ ಮೊಯ್ಲಿ ಹೇಳಿದ್ದರು. ಸರ್ಕಾರದ ಬಳಿ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಕಾಂತರಾಜು ನೀಡಿದ್ದ ವರದಿಯೇ ಇಲ್ಲ. ವರದಿ ಇಲ್ಲದಿದ್ದರೂ ಸಮಾಜಗಳ ನಡುವೆ ಗೊಂದಲ ಸೃಷ್ಟಿಸಲು ಹಾಗೂ ಕಂದಕ ಸೃಷ್ಟಿ ಕೆಲಸವನ್ನು ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಮಾಡುತ್ತಿತ್ತು ಎಂದು ಹರಿಹಾಯ್ದರು.

ಎಲ್ಲ ಹಿಂದುಳಿದ ಸಮುದಾಯಗಳಿಗೂ ನ್ಯಾಯ ಕೊಡಬೇಕು. ಆ ದೃಷ್ಟಿಕೋನದಿಂದಲೇ ಪ್ರಧಾನಿಯವರು ನಿರ್ಧಾರ ಮಾಡಿದ್ದಾರೆ. ಅದನ್ನು ಸಿದ್ದರಾಮಯ್ಯರಿಂದ ಕಲಿಯುವ ಅವಶ್ಯಕತೆ ಇಲ್ಲ ಎಂದು ಕಿಡಿಕಾರಿದರು.

PREV

Recommended Stories

ಮದ್ದೂರು ಗಣೇಶ ಗಲಾಟೆಗೆ ಪೂರ್ಣ ಮುಸ್ಲಿಮರೇ ಕಾರಣ: ಸಚಿವ ಚಲುವ
ಬುರುಡೆ ಕೇಸ್‌ : ಸಾಕ್ಷಿದಾರರ ಬಂಧನ..? ಮಟ್ಟಣ್ಣವರ್‌, ಜಯಂತ್‌, ಅಭಿಷೇಕ್, ಮನಾಫಾ ವಿಠಲಗೆ ಗ್ರಿಲ್