17 ರಂದು ಬಾಗಲಕೋಟೆಗೆ ಸಿಎಂ ಸಿದ್ದರಾಮಯ್ಯ

KannadaprabhaNewsNetwork | Published : Nov 13, 2024 12:47 AM

ಸಾರಾಂಶ

ಜಿಲ್ಲೆಯಲ್ಲಿ ನ.17 ರಂದು ಜರುಗಲಿರುವ ರಾಜ್ಯಮಟ್ಟದ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದ ಉದ್ಘಾಟನೆಗಾಗಿ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಆಗಮಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಹೇಳಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಜಿಲ್ಲೆಯಲ್ಲಿ ನ.17 ರಂದು ಜರುಗಲಿರುವ ರಾಜ್ಯಮಟ್ಟದ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದ ಉದ್ಘಾಟನೆಗಾಗಿ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಆಗಮಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಹೇಳಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಮಂಗಳವಾರ ಜರುಗಿದ ಸಹಕಾರ ಸಪ್ತಾಯ ದಿನಾಚರಣೆ ಕಾರ್ಯಕ್ರಮದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿಗಳು ಹಾಗೂ ಸಹಕಾರ ಸಚಿವರು, ರಾಜ್ಯದ ಗಣ್ಯ ವ್ಯಕ್ತಿಗಳು, ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತರು, ರಾಜ್ಯದ ಹಿರಿಯ ಸಹಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜನೆ ಮಾಡಿ ಯಶಸ್ವಿಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.ಕಾರ್ಯಕ್ರಮವನ್ನು ಹುಬ್ಬಳ್ಳಿ ಬೈಪಾಸ್ ರಸ್ತೆ, ಜಿಲ್ಲಾ ಪಶು ಆಸ್ಪತ್ರೆಯ ಎದುರಿಗೆ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು, ಗ್ಯಾರಂಟಿ ಯೋಜನೆಯ ಫಲಾನುಭವಿಗಳು, ವಿವಿಧ ಸಹಕಾರ ಸಂಘಗಳ ಸಹಕಾರಿಗಳು ಆಗಮಿಸಲಿದ್ದಾರೆ. ಎಲ್ಲರಿಗೂ ಆಸನಗಳ ವ್ಯವಸ್ಥೆ ಮಾಡಲು ತಿಳಿಸಿದರು. ಕಾರ್ಯಕ್ರಮಕ್ಕೆ ಸಮಾಜ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ವಸತಿ ನಿಲಯಗಳ ಕಾಲೇಜು ವಿದ್ಯಾರ್ಥಿಗಳನ್ನು ಕರೆತರುವ ಕೆಲಸವಾಗಬೇಕು ಎಂದರು.ವೇದಿಕೆ ಪಕ್ಕದಲ್ಲಿ 5 ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದ ಹಾಗೂ ವಿವಿಧ ಇಲಾಖೆ ಸೇರಿದಂತೆ 15ಕ್ಕೂ ಹೆಚ್ಚು ವಸ್ತುಪ್ರದರ್ಶನ ಮಳಿಗೆ ಹಾಕುವ ವ್ಯವಸ್ಥೆ ಮಾಡಬೇಕು. ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ತಮ್ಮ ತಮ್ಮ ಇಲಾಖೆಗೆ ಸಂಬಂಧಿಸಿದ ಪ್ರಗತಿಯ ಮಾಹಿತಿಯ ವರದಿ ತಮ್ಮ ಬಳಿ ಇರಬೇಕು. ವೇದಿಕೆ ನಿರ್ಮಾಣದ ಕಾರ್ಯವನ್ನು ಸಹಕಾರ ಇಲಾಖೆ ಹಾಗೂ ಬಾಗಲಕೋಟೆ ಜಿಲ್ಲಾ ಸಹಕಾರಿ ಬ್ಯಾಂಕ್‌ ಜವಾಬ್ದಾರಿಯಾಗಿದ್ದು, ಅಚ್ಚುಕಟ್ಟಾಗಿ ವೇದಿಕೆ ನಿರ್ಮಿಸಲು ತಿಳಿಸಿದರು. ಸಹಕಾರ ಇಲಾಖೆಯ ಉಪನಿಬಂಧಕ ದಾನಯ್ಯ ಹಿರೇಮಠ ಅವರು ಕಾರ್ಯಕ್ರಮದ ರೂಪುರೇಷೆಗಳ ಮಾಹಿತಿಯನ್ನು ಸಭೆಗೆ ತಿಳಿಸಿದರು. ಸಭೆಯಲ್ಲಿ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ, ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ, ಉಪವಿಭಾಗಾಧಿಕಾರಿ ಸಂತೋಷ ಜಗಲಾಸರ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು, ತಹಸೀಲ್ದಾರರು ಉಪಸ್ಥಿತರಿದ್ದರು.

Share this article