ಕೊಪ್ಪಳ:
ಜಿಲ್ಲೆಯ ವಿವಿಧ ಅಭಿವೃದ್ಧಿ ಕಾರ್ಯ ಮತ್ತು ಕಾಮಗಾರಿಗಳ ಉದ್ಘಾಟನೆಗೆ ಅ. 6ರಂದು ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದು ಅಧಿಕಾರಿಗಳು ಕಾರ್ಯಕ್ರಮ ಅಚ್ಚುಕಟ್ಟಾಗಿ ಆಯೋಜಿಸಲು ಸಿದ್ಧತೆ ಮಾಡಿಕೊಳ್ಳುವಂತೆ ಸಚಿವ ಶಿವರಾಜ ತಂಗಡಗಿ ಹೇಳಿದರು.ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಕರೆದ ಅಧಿಕಾರಿಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಎಲ್ಲ ವಿಧಾನಸಭಾ ಕ್ಷೇತ್ರದಲ್ಲಿ ಆಗಿರುವ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಮಾಹಿತಿ ನೀಡಬೇಕು. ಜತೆಗೆ ಗ್ಯಾರಂಟಿ ಯೋಜನೆ ಫಲಾನುಭವಿಗಳನ್ನು ಕಾರ್ಯಕ್ರಮಕ್ಕೆ ಕರೆದುಕೊಂಡು ಬರಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಮಾತನಾಡಿ, ಇದು ಮುಖ್ಯಮಂತ್ರಿ ರಾಜಕೀಯ ಕಾರ್ಯಕ್ರಮವಲ್ಲ. ಸರ್ಕಾರಿ ಕಾರ್ಯಕ್ರಮ ಆಗಿದ್ದು ಅಚ್ಚುಕಟ್ಟಾಗಿ ಆಯೋಜಿಸಬೇಕೆಂದರು.ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ ಮಾತನಾಡಿ, ವಿವಿಧ ಸಮಿತಿ ರಚಿಸಿ ಅಧಿಕಾರಿಗಳಿಗೆ ಜವಾಬ್ದಾರಿ ನೀಡಲಾಗುವುದು. ಈ ಕುರಿತು ವಿಧಾನಸಭೆವಾರು ಸಭೆ ಕರೆದು ಸೂಚಿಸಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಶಾಸಕ ರಾಘವೇಂದ್ರ ಹಿಟ್ನಾಳ, ಸಂಸದ ರಾಜಶೇಖರ ಹಿಟ್ನಾಳ, ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ. ಶ್ರೀನಿವಾಸ ಗುಪ್ತಾ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರೆಡ್ಡಿ ಶ್ರೀನಿವಾಸ, ಜಿಪಂ ಸಿಇಒ ವರ್ಣಿತ್ ನೇಗಿ, ಎಸ್ಪಿ ಡಾ. ರಾಮ್ ಎಲ್. ಅರಸಿದ್ದಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.ಐತಿಹಾಸಿಕ, ಪ್ರವಾಸಿ ತಾಣಗಳ ಅಭಿವೃದ್ಧಿಗೆ ಒತ್ತು ನೀಡಿಜಿಲ್ಲೆಯು ಐತಿಹಾಸಿಕ ಪ್ರವಾಸಿ ತಾಣ ಹೊಂದಿದ್ದು, ಅವುಗಳ ಅಭಿವೃದ್ಧಿಗೆ ಆಯಾ ಇಲಾಖೆ ಅಧಿಕಾರಿಗಳು ಒತ್ತು ನೀಡಬೇಕೆಂದು ಸಚಿವ ಶಿವರಾಜ ತಂಗಡಗಿ ಹೇಳಿದರು.
ಆಂಜನಾದ್ರಿ ಬೆಟ್ಟದ ಆಂಜನೇಯ ಸ್ವಾಮಿ, ಹುಲಿಗೆಮ್ಮ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಾಗೂ ಜಿಲ್ಲೆಯ ಇತರೆ ಐತಿಹಾಸಿಕ ಪ್ರವಾಸಿ ತಾಣಗಳ ಅಭಿವೃದ್ಧಿ ಕಾಮಗಾರಿಗಳ ಕುರಿತು ಬಗ್ಗೆ ಚರ್ಚಿಸಲು ಕರೆದಿದ್ದ ಸಭೆಯಲ್ಲಿ ಸೂಚಿಸಿದರು.ಅಂಜನಾದ್ರಿ ಬೆಟ್ಟ ಆಂಜನೇಯನ ಜನ್ಮಸ್ಥಳವಾಗಿದ್ದು ಧಾರ್ಮಿಕ ಕ್ಷೇತ್ರವಾಗಿ ಹೆಸರು ಗಳಿಸಿದೆ. ಇಲ್ಲಿಗೆ ಬರುವ ಪ್ರವಾಸಿಗರಿಗೆ ಮೂಲಸೌಕರ್ಯ ಒಳಗೊಂಡಂತೆ ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿ ಯೋಜನೆಗೆ ಸರ್ಕಾರ ಅನುದಾನ ಒದಗಿಸಿದ್ದು ತ್ವರಿತಗತಿಯಲ್ಲಿ ಕಾಮಗಾರಿ ಮುಗಿಸಬೇಕು. ತಿರುಪತಿ ಮಾದರಿ ಅಂಜನಾದ್ರಿ ಬೆಟ್ಟ ಅಭಿವೃದ್ಧಿಪಡಿಸಲು ಅಧಿಕಾರಿಗಳು ಕ್ರಮಕೈಗೊಳ್ಳಬೇಕು. ಲಭ್ಯವಿರುವ ಭೂಮಿಯಲ್ಲಿ ಟ್ರಿ ಪಾರ್ಕ್, ಶೌಚಗೃಹ, ವಾಹನಗಳಿಗೆ ಪಾರ್ಕಿಂಗ್ ಹಾಗೂ ಪ್ರದಕ್ಷಣಾ ಪಥ ಮಾಡಬೇಕು. ಬೆಟ್ಟಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಗಳ ಅಭಿವೃದ್ಧಿ ಮತ್ತು ರಸ್ತೆಯುದ್ಧಕ್ಕೂ ವಿದ್ಯುತ್ ದೀಪ ಅಳವಡಿಸಬೇಕು ಎಂದರು.
ಪ್ರತಿ ವರ್ಷ ನಡೆಯುವ ಹನುಮಮಾಲಾ ಕಾರ್ಯಕ್ರಮದ ವೇಳೆ ಮಾಲಾಧಾರಿಗಳಿಗೆ ಪ್ರಸಾದಕ್ಕಾಗಿ ತಾತ್ಕಾಲಿಕ ವ್ಯವಸ್ಥೆ ಮಾಡಲಾಗುತ್ತಿದೆ. ಹಾಗಾಗಿ ಅಂಜನಾದ್ರಿಯಲ್ಲಿ ಭೋಜನಾಲಯ ನಿರ್ಮಿಸುವುದು ಅತ್ಯವಶ್ಯಕವಾಗಿದೆ. ಭೋಜನಾಲಯ ನಿರ್ಮಾಣದ ಕುರಿತು ಪ್ರಸ್ತಾವನೆ ಸಲ್ಲಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.ಶಾಸಕ ಜಿ. ಜನಾರ್ದನ ರೆಡ್ಡಿ ಮಾತನಾಡಿ, ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ ಅಗತ್ಯವಿರುವ ಭೂಮಿಗಾಗಿ ಪ್ರಸ್ತಾವನೆ ಸಿದ್ಧಪಡಿಸಿ ಕೇಂದ್ರ ಅರಣ್ಯ ಇಲಾಖೆಗೆ ಸಲ್ಲಿಸಬೇಕು. ಈ ಬಗ್ಗೆ ಸಂಸದರೊಂದಿಗೆ ಸೇರಿ ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿ, ಜಮೀನು ಒದಗಿಸಲು ಕ್ರಮಕೈಗೊಳ್ಳಲಾಗುವುದು. ಹನುಮಮಾಲ ಪಾದಯಾತ್ರಿಗಳಿಗೆ ಅನುಕೂಲವಾಗುವಂತೆ ಸಂಗಾಪುರದಿಂದ ರಾಂಪುರದ ವರೆಗೆ ಇರುವ 12 ಕಿ.ಮೀ ರಸ್ತೆಯನ್ನು ಐದು ಮೀಟರ್ ಅಗಲೀಕರಣ ಮಾಡಬೇಕು. ರಾಂಪುರದಿಂದ ಲಕ್ಷ್ಮೀಪುರ ವರೆಗಿನ 1.5 ಕಿ.ಮೀ ರಸ್ತೆಯನ್ನು ಶಾಸಕರ ಅನುದಾನದಲ್ಲಿ ಮಾಡುತ್ತೇನೆ. ಕೆಕೆಆರ್‌ಡಿಬಿ ಅನುದಾನವನ್ನು ರಸ್ತೆಗಳ ಅಭಿವೃದ್ಧಿಗಾಗಿ ನೀಡಬೇಕು ಎಂದರು.