ಯಾಸೀರಖಾನ್‌ ಪಠಾಣ್‌ರನ್ನು ಗೆಲ್ಲಿಸಲು ಸಿಎಂ ಸಿದ್ದು ಕರೆ

KannadaprabhaNewsNetwork | Published : Nov 5, 2024 12:51 AM

ಸಾರಾಂಶ

ಸಂಡೂರು, ಶಿಗ್ಗಾಂವಿ, ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದರೆ ನನಗೆ ಇನ್ನಷ್ಟು ಶಕ್ತಿ ಬರುತ್ತದೆ. ಸಂಡೂರು, ಚನ್ನಪಟ್ಟಣದಲ್ಲೂ ನಾವು ಗೆಲ್ತೀವಿ. ಆದ್ದರಿಂದ ಇಲ್ಲಿ ಪಠಾಣ್ ಅವರನ್ನು ಗೆಲ್ಲಿಸಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.

ಶಿಗ್ಗಾಂವಿ: ಸಂಡೂರು, ಶಿಗ್ಗಾಂವಿ, ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದರೆ ನನಗೆ ಇನ್ನಷ್ಟು ಶಕ್ತಿ ಬರುತ್ತದೆ. ಸಂಡೂರು, ಚನ್ನಪಟ್ಟಣದಲ್ಲೂ ನಾವು ಗೆಲ್ತೀವಿ. ಆದ್ದರಿಂದ ಇಲ್ಲಿ ಪಠಾಣ್ ಅವರನ್ನು ಗೆಲ್ಲಿಸಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.

ಶಿಗ್ಗಾಂವಿ ಕ್ಷೇತ್ರದ ಹುಲಗೂರು, ಹುರಳಿಕುಪ್ಪಿ, ಬಂಕಾಪುರದಲ್ಲಿ ಸೋಮವಾರ ಪಕ್ಷದ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ ಪರ ಪ್ರಚಾರ ನಡೆಸಿ ಅವರು ಮಾತನಾಡಿದರು.ಅಜ್ಜನೂ ಮುಖ್ಯಮಂತ್ರಿಯಾಗಿ, ಅಪ್ಪನೂ ಮುಖ್ಯಮಂತ್ರಿ ಆಗಿದ್ದವರ ಮಗನ ವಿರುದ್ಧ ಸಾಮಾನ್ಯ ಕುಟುಂಬದ ಪೈಲ್ವಾನ್ ಪಠಾಣ್ ಕಣದಲ್ಲಿದ್ದಾರೆ. ನಾನು ಅಧಿಕಾರದಲ್ಲಿ ಮುಂದುವರಿಯಬೇಕಾದರೆ ಪಠಾಣ ಗೆಲ್ಲಬೇಕು. ಸಿದ್ದರಾಮಯ್ಯ ಸರ್ಕಾರದಿಂದ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲು ಸಾಧ್ಯವೇ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಇಡೀ ದೇಶಕ್ಕೆ ಸುಳ್ಳುಗಳ ಮೇಲೆ ಸುಳ್ಳುಗಳನ್ನು ಹೇಳಿದ್ದರು. ಆದರೆ ನಮ್ಮ ಸರ್ಕಾರ ಜಾರಿಗೆ ಬಂದ ಎಂಟೇ ತಿಂಗಳಲ್ಲಿ ಐದಕ್ಕೆ ಐದೂ ಗ್ಯಾರಂಟಿಗಳನ್ನೂ ಜಾರಿ ಮಾಡಿದ್ದೇವೆ. ರಾಜ್ಯದ ಲಕ್ಷಾಂತರ ತಾಯಂದಿರು ಗ್ಯಾರಂಟಿಗಳ ಅನುಕೂಲಗಳನ್ನು ಪ್ರತಿ ದಿನ ಪಡೆಯುತ್ತಿದ್ದಾರೆ. ದೇಶದ ಆರ್ಥಿಕತೆ ಹದಗೆಟ್ಟಿದೆ. ನಿರುದ್ಯೋಗ ಸಮಸ್ಯೆ ವಿಪರೀತವಾಗಿದೆ. ದೇಶದಲ್ಲಿ ಎಲ್ಲ ವಸ್ತುಗಳ ಬೆಲೆ ಏರಿಕೆಯಾಗಿದೆ. ಮೋದಿ ಅವಧಿಯಲ್ಲಿ ದೇಶ ದಿವಾಳಿಯಾಗಿದೆ. ದೇಶ ಹಾಳು ಮಾಡಿ ನಮಗೆ ಪಾಠ ಮಾಡಲು ಬರುತ್ತಾರೆ. ಸಿದ್ದರಾಮಯ್ಯ ಬಡವರ ಪರ ಕೆಲಸ ಮಾಡುತ್ತಿರುವುದಕ್ಕೆ ಅವರಿಗೆ ಹೊಟ್ಟೆಯುರಿ. ನನ್ನ ಜೀವನ ತೆರೆದ ಪುಸ್ತಕ ಇದ್ದಂತೆ. ನನ್ನ ಮೇಲೆ ಕಳಂಕ ತರುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಹೇಳಿದರು.

ಖಾದ್ರಿಗೆ ಉತ್ತಮ ಸ್ಥಾನ: ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ನನಗೆ ತುಂಬಾ ಬೇಕಾದವರು. ೧೯೯೯ರಲ್ಲಿ ನನಗಾಗಿ ಖಾದ್ರಿ ಶಾಸಕ ಸ್ಥಾನ ತ್ಯಜಿಸಲು ಸಿದ್ದರಾಗಿದ್ದರು. ನಾನು ಸೋತು, ಖಾದ್ರಿ ಗೆದ್ದಿದ್ದಾಗ ಸ್ವತಃ ಖಾದ್ರಿಯವರೇ ಬಂದು ಅವರು ಶಾಸಕ ಸ್ಥಾನವನ್ನು ನನಗಾಗಿ ಬಿಟ್ಟು ಕೊಡಲು ಸಿದ್ಧರಾಗಿದ್ದರು. ನಮ್ಮಿಬ್ಬರ ನಡುವೆ ಅಷ್ಟು ಆತ್ಮೀಯತೆ. ಹೀಗಾಗಿ ನಮ್ಮ ಮಾತಿಗೆ ಬೆಲೆ ನೀಡಿ ನಾಮಪತ್ರ ವಾಪಸ್ ಪಡೆದು ಪಠಾಣ್ ಅವರನ್ನು ಗೆಲ್ಲಿಸಲು ಟೊಂಕ ಕಟ್ಟಿ ಕೆಲಸ ಮಾಡುತ್ತಿದ್ದಾರೆ. ಖಾದ್ರಿ ಅವರಿಗೆ ಒಳ್ಳೆಯ ಸ್ಥಾನ ಕೊಡುತ್ತೇವೆ ಎಂದು ಭರವಸೆ ನೀಡಿದರು.ಕಾಂಗ್ರೆಸ್ ಅಭ್ಯರ್ಥಿ ಯಾಸೀರಖಾನ್ ಪಠಾಣ, ಸಭೆಯಲ್ಲಿ ಸಚಿವರಾದ ಎಚ್.ಕೆ. ಪಾಟೀಲ, ಈಶ್ವರ ಖಂಡ್ರೆ, ಸತೀಶ ಜಾರಕಿಹೊಳಿ, ಶಿವಾನಂದ ಪಾಟೀಲ, ಆರ್.ಬಿ. ತಿಮ್ಮಾಪುರ, ರಹೀಂಖಾನ್, ಎಐಸಿಸಿ ಕಾರ್ಯದರ್ಶಿ ಮಯೂರ ಜಯಕುಮಾರ, ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ನಸೀರ್ ಅಹ್ಮದ್, ಶಾಸಕರಾದ ಬಸವರಾಜ ಶಿವಣ್ಣನವರ, ಶ್ರೀನಿವಾಸ ಮಾನೆ, ಮಾಜಿ ಶಾಸಕ ಅಜ್ಜಂಫೀರ್ ಖಾದ್ರಿ, ಸೋಮಣ್ಣ ಬೇವಿನಮರದ, ಸಂಜೀವಕುಮಾರ ನೀರಲಗಿ ಇತರರು ಇದ್ದರು.

Share this article