
ಕನ್ನಡಪ್ರಭ ವಾರ್ತೆ ವಿಜಯಪುರ
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ವಿವಿಧ ಇಲಾಖೆಯ ಸಚಿವರು ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮುಖ್ಯಮಂತ್ರಿ ಅವರು ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಸಂಬಧಪಟ್ಟ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯ ನಿರ್ವಸಬೇಕು, ಕಾರ್ಯಕ್ರಮಗಳನ್ನು ಕೈಗೊಂಡಿರುವ ಕುರಿತು ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದ ಸಚಿವರು, ಕಾರ್ಯಕ್ರಮದಲ್ಲಿ ಯಾವುದೇ ರೀತಿಯ ಲೋಪವಾಗದಂತೆ ಮುಂಜಾಗ್ರತೆ ವಹಿಸಬೇಕೆಂದರು.
ಜ.9ರಂದು ಮುಖ್ಯಮಂತ್ರಿಗಳು ಆಗಮಿಸಿ, ಸೈಕ್ಲಿಂಗ್ ವೆಲೋಡ್ರೋಮ್ ಉದ್ಘಾಟನೆ, ಕಿತ್ತೂರು ರಾಣಿ ಚೆನ್ನಮ್ಮ ಪ್ರತಿಮೆ ಅನಾವರಣ ಹಾಗೂ ಕೇಂದ್ರ ಬಸ್ ನಿಲ್ದಾಣಕ್ಕೆ ನಾಮಕರಣ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲಾ ಪ್ರಜಾಸೌಧ ನಿರ್ಮಾಣಕ್ಕೆ ಚಾಲನೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದರು.ಜಿಲ್ಲಾಧಿಕಾರಿ ಡಾ.ಆನಂದ.ಕೆ ಮಾತನಾಡಿ, ಈಗಾಗಲೇ ಶಿಷ್ಟಾಚಾರದಂತೆ ಆಮಂತ್ರಣ ಪತ್ರಿಕೆ ಮುದ್ರಣ ಹಾಗೂ ಸಕಾಲದಲ್ಲಿ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ವೇದಿಕೆ, ಶಾಮಿಯಾನ, ಆಸನ ವ್ಯವಸ್ಥೆ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಜನಪ್ರತಿನಿಧಿಗಳು ಭಾಗವಹಿಸುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ವತಿಯಿಂದ ಮುಂಜಾಗ್ರತಾ ಕ್ರಮವಾಗಿ ವೈದ್ಯರನ್ನು ಹಾಗೂ ಸಿಬ್ಬಂದಿ ಇರುವಂತೆ, ಅಗ್ನಿಶಾಮಕ ವಾಹನ ಸೇರಿದಂತೆ ಸಂಬಂಧಿಸಿದ ವ್ಯವಸ್ಥೆ ಮಾಡಲಾಗುತ್ತಿದೆ. ಅಧಿಕಾರಿಗಳು ತಮಗೆ ವಹಿಸಿದ ಯಾವುದೇ ಜವಾಬ್ದಾರಿಯನ್ನು ಲೋಪವಾಗದಂತೆ ಅತ್ಯಂತ ಅಚ್ಚುಕಟ್ಟಾಗಿ ನಿರ್ವಹಿಸುವಂತೆ ವಿವಿಧ ಇಲಾಖೆಯ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಹಾಗೂ ಶಂಕುಸ್ಥಾಪನಾ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಹಾಗೂ ಕಾರ್ಯಕ್ರಮಕ್ಕೆ ಸೂಕ್ತ ಬಂದೊಬಸ್ತ್ ವ್ಯವಸ್ಥೆ ಕಲ್ಪಿಸಲು ಸೂಕ್ತ ಕ್ರಮವಹಿಸಿದೆ ಎಂದು ತಿಳಿಸಿದರು.
ಪ್ರವಾಸೋದ್ಯಮ ಇಲಾಖೆ ವತಿಯಂದಿ ಪ್ರಸಕ್ತ ವರ್ಷದ ವಿಜಯಪುರ ಜಿಲ್ಲೆಯ ಐತಿಹಾಸಿಕ ಹೊಂದಿರುವ ಛಾಯಾಚಿತ್ರದ (ಕ್ಯಾಲೆಂಡರ್) ದಿನದರ್ಶಿಕೆಯನ್ನು ಬಿಡುಗಡೆಗೊಳಿಸಲಾಯಿತು.ಸಭೆಯಲ್ಲಿ ಶಾಸಕ ಸಿ.ಎಸ್.ನಾಡಗೌಡ, ಶಾಸಕರಾದ ವಿಠ್ಠಲ ಕಟಕಧೋಂಡ, ಅಶೋಕ ಮನಗೂಳಿ, ಜಿಪಂ ಸಿಇಒ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಲಕ್ಷ್ಮಣ ನಿಂಬರಗಿ, ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ, ಜಿಪಂ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ, ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ, ಕುಲಸಚಿವ ಶಂಕರಗೌಡ ಸೋಮನಾಳ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಸಂಪತ್ ಗುಣಾರಿ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ, ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ವಸಿಂ ಬಾಬಾ ಮುದ್ದೇಬಿಹಾಳ, ಸಮಾಜ ಕಲ್ಯಾಣ ಉಪ ನಿರ್ದೇಶಕ ಮಹೇಶ ಪೋತದಾರ, ಪ್ರವಾಸೋಧ್ಯಮ ಇಲಾಖೆ ಉಪ ನಿರ್ದೇಶಕ ಅರವಿಂದ ಹೂಗಾರ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರಾಜಶೇಖರ ಧೈವಾಡಿ, ಸಚಿವರ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ.ಮಹಾಂತೇಶ ಬಿರಾದಾರ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಕಿತ್ತೂರಾಣಿ ಚನ್ನಮ್ಮ ಸಮಿತಿ ಸದಸ್ಯರು, ಸಮಾಜದ ಮುಖಂಡರು ಇದ್ದರು.