;Resize=(412,232))
ಬೆಂಗಳೂರು : ರಾಜ್ಯದಲ್ಲಿ ಚಳಿ ತೀವ್ರಗೊಳ್ಳುತ್ತಿದ್ದು ಮುಂದಿನ ಎರಡು ದಿನಗಳ ಕಾಲ ಚಳಿ ಅನುಭವ ಹೆಚ್ಚಾಗಲಿದ್ದು, ವಿಶೇಷವಾಗಿ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ‘ಶೀತ ಗಾಳಿ’ಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಈಗಾಗಲೇ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ತಾಪಮಾನ ಇಳಿಕೆಯಾಗಿ ಚಳಿ ಹೆಚ್ಚಾಗಿದೆ. ಭಾನುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಬೀದರ್‌ನಲ್ಲಿ ಕನಿಷ್ಠ ತಾಪಮಾನ 10 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ವಿಜಯಪುರ 11.6, ಧಾರವಾಡ 11.8, ಬೆಳಗಾವಿ 13.8, ಗದಗ 14.4 ಹಾಗೂ ಗಂಗಾವತಿಯಲ್ಲಿ 15 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.
ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕಿದ ವಾತಾವರಣವಿದ್ದು, ತಾಪಮಾನ ಸಾಮಾನ್ಯಕ್ಕಿಂತ ಕಡಿಮೆ ದಾಖಲಾಗಿದೆ. ಇದೇ ವಾತಾವರಣ ಮುಂದಿನ ಒಂದು ವಾರ ಕಾಲ ಮುಂದುವರೆಯಲಿದೆ. ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ತಾಪಮಾನ ಎಂದಿನಂತೆ ಇರಲಿದ್ದು, ಗಣನೀಯ ಬದಲಾವಣೆ ಇರುವುದಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮುಂದಿನ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ಬೆಳಗಿನ ಜಾವ ಮಂಜು ಮುಸುಕಿದ ವಾತಾವರಣ ಇರಲಿದ್ದು, ದಿನವಿಡೀ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಗರಿಷ್ಠ ತಾಪಮಾನ 28 ಮತ್ತು ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.