ದೊಡ್ಡಬಳ್ಳಾಪುರ: ತಾಲೂಕು ಹಾಗೂ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಅಕ್ರಮ, ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪಿಸಿ, ಆಡಳಿತ ವೈಫಲ್ಯ ಸರಿಪಡಿಸುವಂತೆ ಒತ್ತಾಯಿಸಿ ನಗರದ ಉಪವಿಭಾಗಾಧಿಕಾರಿ ಕಚೇರಿ ಮುಂದೆ ಸಿಪಿಐ(ಎಂ), ವಿವಿಧ ದಲಿತ ಸಂಘಟನೆಗಳು ಪ್ರಾರಂಭಿಸಿದ್ದ ಜಿಲ್ಲಾ ಮಟ್ಟದ ಅನಿರ್ದಿಷ್ಟಾವಧಿ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವ ನಿರ್ಧಾರವನ್ನು ಗುರುವಾರ ಪ್ರಕಟಿಸಲಾಗಿದೆ.
ಜಿಲ್ಲೆಯ ನಾಲ್ಕೂ ತಾಲೂಕುಗಳ ಪರಿಸ್ಥಿತಿ ಇದೇ ಆಗಿದೆ. ದೊಡ್ಡಬಳ್ಳಾಪುರ ತಾಲೂಕಿನ ಗಡಿ ಭಾಗದ ಸಾಸಲು, ತೂಬಗೆರೆ ಹೋಬಳಿಯಲ್ಲಿ ಬಗರ್ ಹುಕುಂ ಯೋಜನೆಯಡಿ ಅರ್ಜಿ ಸಲ್ಲಿಸಿರುವ ಬಡ ರೈತರಿಗೆ ದಶಕಗಳು ಕಳೆದರೂ ಸಹ ಸಾಗುವಳಿ ಚೀಟಿ ಮಂಜೂರಾಗಿಲ್ಲ. ಆದರೆ ತಾಲೂಕು ಕಚೇರಿ, ನಗರಸಭೆಗೆ ಕೂಗಳತೆ ದೂರದಲ್ಲಿ ಭೂಮಿ ಹೊಂದಿರುವ ಶ್ರೀಮಂತರಿಗೆ ಕೋಟ್ಯಂತರ ರು.ಬೆಲೆ ಬಾಳುವ ಭೂಮಿ ಮಂಜೂರಾಗಿದೆ ಎಂದು ಆರೋಪಿಸಿದರು.
ಇದು ಇಲ್ಲಿನ ಆಡಳಿತ ವ್ಯವಸ್ಥೆಗೆ ಹಿಡಿದ ಕೈಗನ್ನಡಿಯಾಗಿದೆ. ಇಂತಹ ಹತ್ತಾರು ಸಮಸ್ಯೆಗಳ ಕುರಿತು ಹಲವಾರು ಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ಸಹ ಆಡಳಿತ ಯಂತ್ರ ಸುಧಾರಣೆಯಾಗಿಲ್ಲ ಎಂದು ಅಸಮಾಧಾನ ಹೊರಹಾಕಿದರು.ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ಎನ್. ಶಿವಶಂಕರ್, ಡಿ.11 ರಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಂಘಟನೆಗಳ ಮುಖಂಡರು ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಸಭೆ ನಡೆಸಿ, ಅಹವಾಲು ಆಲಿಸಿ ಸಮಸ್ಯೆ ಪರಿಹರಿಸಲಾಗುವುದು. ಬಡವರು, ರೈತರ ಪರವಾದ ಆಡಳಿತ ನೀಡುವ ಕುರಿತಂತೆ ನಿರ್ಧಾರ ಕೈಗೊಳ್ಳುವ ಭರವಸೆ ನೀಡಿದರು.
ಫೋಟೋ-
5ಕೆಡಿಬಿಪಿ3- ದೊಡ್ಡಬಳ್ಳಾಪುರದಲ್ಲಿ ಉಪವಿಭಾಗಾಧಿಕಾರಿ ಕಚೇರಿ, ತಾಲೂಕು ಕಚೇರಿಯಲ್ಲಿ ಭ್ರಷ್ಟಾಚಾರ ನಿಗ್ರಹಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಸಮಸ್ಯೆ ಆಲಿಸಿದರು.