ಕುಷ್ಟಗಿ: ಕಲ್ಯಾಣ ಕರ್ನಾಟಕದ ಪ್ರಾದೇಶಿಕ ಅಸಮತೋಲನ ನಿವಾರಣೆ ಹಾಗೂ ಸಮಗ್ರ ಅಭಿವೃದ್ಧಿಗೆ ಒತ್ತಾಯಿಸಿ ಸೆ. 17ರಂದು ಕಲಬುರಗಿಯಲ್ಲಿ ನಡೆಯಲಿರುವ ಪ್ರಾದೇಶಿಕ ಅಸಮತೋಲನ ನಿವಾರಣಾ ಸಂಕಲ್ಪ ಸಮಾವೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಹೋರಾಟ ಸಮಿತಿಯ ಪ್ರಮುಖರಾದ ಬಸವರಾಜ ಗಾಣಿಗೇರ, ಆರ್.ಕೆ. ದೇಸಾಯಿ ಹಾಗೂ ಅಡಿವೆಪ್ಪ ನೆರೆಬೆಂಚಿ ಮನವಿ ಮಾಡಿದರು.ಪಟ್ಟಣದ ಹಳೆ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಶೇಷ ಸ್ಥಾನಮಾನ ದೊರೆತಿದ್ದರೂ ಶಿಕ್ಷಣ, ನೀರಾವರಿ, ಆರೋಗ್ಯ, ರೈಲ್ವೆ ಹಾಗೂ ಉದ್ಯೋಗ ಕ್ಷೇತ್ರಗಳಲ್ಲಿ ನಿರೀಕ್ಷಿತ ಅಭಿವೃದ್ಧಿಯಾಗಿಲ್ಲ. ಏಳು ಜಿಲ್ಲೆಗಳಿಂದ ಸುಮಾರು 5 ಸಾವಿರ ಜನರು ಸಮಾವೇಶದಲ್ಲಿ ಪಾಲ್ಗೊಂಡು ಸರ್ಕಾರದ ಮುಂದೆ ಪ್ರಮುಖ ಹಕ್ಕೊತ್ತಾಯಗಳನ್ನು ಮಂಡಿಸಲಿದ್ದಾರೆ ಎಂದರು.
ಕುಷ್ಟಗಿ ತಾಲೂಕಿನ ಹೋಬಳಿ ರಚನೆ, ಕೃಷ್ಣ ‘ಬಿ’ ಸ್ಕೀಮ್, ಕೆರೆಗಳಿಗೆ ನೀರು ತುಂಬಿಸುವುದು ಹಾಗೂ ಬರಪೀಡಿತ ಪ್ರದೇಶ ಘೋಷಣೆ ಸೇರಿದಂತೆ ಸ್ಥಳೀಯ ಸಮಸ್ಯೆಗಳನ್ನೂ ಸರ್ಕಾರದ ಗಮನಕ್ಕೆ ತರಲಾಗುವುದು. ಕೇವಲ ಮನವಿ ಸಲ್ಲಿಸದೆ, ಬೇಡಿಕೆಗಳ ಅನುಷ್ಠಾನಕ್ಕಾಗಿ ಮುಂದಿನ ದಿನಗಳಲ್ಲಿ ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಸಂಘಟಿತ ಹೋರಾಟ ರೂಪಿಸಲಾಗುವುದು ಎಂದರು.
ಸೆ. 17ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಲಿದ್ದು, ಘೋಷಣೆಗಳ ಬದಲಿಗೆ ಕಾಲಮಿತಿಯ ಕಾರ್ಯಯೋಜನೆ ರೂಪಿಸಿ ಅನುಷ್ಠಾನಗೊಳಿಸುವಂತೆ ಒತ್ತಾಯಿಸಲಾಗುವುದು ಎಂದರು.ಜೆ.ಜಿ. ಆಚಾರ್, ಕಿರಣಜ್ಯೋತಿ, ಕಾಶೀಂ ಶ್ರೀಶಾಲ, ಜಯತೀರ್ಥರಾವ್ ದೇಸಾಯಿ, ದೇವರಾಜ ಹಜಾಳದ ಸೇರಿದಂತೆ ಹಲವರು ಇದ್ದರು.