‘ಸಿಎಂ ಕುರ್ಚಿ’ ಪರಿಹರಿಸಿಕೊಂಡೇಅಧಿವೇಶನಕ್ಕೆ ಬನ್ನಿ: ವಿಜಯೇಂದ್ರ

KannadaprabhaNewsNetwork |  
Published : Nov 26, 2025, 02:00 AM IST
(ಸಾಂದರ್ಭಿಕ ಚಿತ್ರ) | Kannada Prabha

ಸಾರಾಂಶ

ಬೆಳಗಾವಿಯ ಸುವರ್ಣಸೌಧದಲ್ಲಿ ಡಿ.8ರಿಂದ ನಡೆಯುವ ಅಧಿವೇಶನಕ್ಕೆ ಮುನ್ನ ಮುಖ್ಯಮಂತ್ರಿ ಕುರ್ಚಿಗೆ ಪರಿಹಾರ ಕಂಡುಕೊಂಡು ಬನ್ನಿ. ಸಿಎಂ ಕುರ್ಚಿ ಪೈಪೋಟಿ ಇತ್ಯರ್ಥ ಆಗಿಲ್ಲವೆಂದರೆ ಅಧಿವೇಶನವನ್ನೇ ಮುಂದೂಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ಕನ್ನಡಪ್ರಭ ವಾರ್ತೆ ದಾವಣಗೆರೆ

ಬೆಳಗಾವಿಯ ಸುವರ್ಣಸೌಧದಲ್ಲಿ ಡಿ.8ರಿಂದ ನಡೆಯುವ ಅಧಿವೇಶನಕ್ಕೆ ಮುನ್ನ ಮುಖ್ಯಮಂತ್ರಿ ಕುರ್ಚಿಗೆ ಪರಿಹಾರ ಕಂಡುಕೊಂಡು ಬನ್ನಿ. ಸಿಎಂ ಕುರ್ಚಿ ಪೈಪೋಟಿ ಇತ್ಯರ್ಥ ಆಗಿಲ್ಲವೆಂದರೆ ಅಧಿವೇಶನವನ್ನೇ ಮುಂದೂಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ತಾಲೂಕಿನ ಶಿರಮನಗೊಂಡಹಳ್ಳಿ ಗ್ರಾಮದಲ್ಲಿ ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ಎಸ್.ಎ.ರವೀಂದ್ರನಾಥ ನಿವಾಸದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಸಿದ್ದರಾಮಯ್ಯ ಅವರು ಔಟ್‌ ಗೋಯಿಂಗ್‌ ಮುಖ್ಯಮಂತ್ರಿಯೆಂದು ಸ್ವತಃ ಆಡಳಿತ ಪಕ್ಷದವರೇ ಹೇಳುತ್ತಿದ್ದಾರೆ. ಕುರ್ಚಿ ಕಿತ್ತಾಟಕ್ಕೆ ಪರಿಹಾರ ಕಂಡುಕೊಳ್ಳದೆ, ಬೆಳಗಾವಿ ಅಧಿವೇಶನಕ್ಕೆ ಬಂದರೆ ರೈತರು, ಜನರ ಸಮಸ್ಯೆಗಳಿಗೆ ಪರಿಹಾರವಂತೂ ಸಿಗುವುದಿಲ್ಲ. ಹೀಗಿರುವಾಗ ಯಾವ ಪುರುಷಾರ್ಥಕ್ಕೆ ಅಧಿವೇಶನ ನಡೆಸುತ್ತೀರಿ?. ರೈತರ ಸಮಸ್ಯೆಗೆ ಪರಿಹಾರ ನೀಡುವುದಿದ್ದರೆ ಅಧಿವೇಶನ ನಡೆಸಬೇಕು ಎಂದು ಸಲಹೆ ನೀಡಿದರು.

ರಾಜ್ಯದ ಹಲವಾರು ಜ್ವಲಂತ ಸಮಸ್ಯೆಗಳು, ಉತ್ತರ ಕರ್ನಾಟಕದ ಸಮಸ್ಯೆಗಳು, ರೈತರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಬಗ್ಗೆ ಗಮನ ಕೊಡಿ. ರೈತರ ಸಮಸ್ಯೆಗಳಿಗೆ ಪರಿಹಾರ ಘೋಷಣೆ ಮಾಡಿಯೇ ನೀವು ಬೆಳಗಾವಿ ಅಧಿವೇಶನ ನಡೆಸಬೇಕಾಗುತ್ತದೆ. ನಿಮ್ಮ ಕುರ್ಚಿ ಕಾಳಗದ ಮಧ್ಯೆ ತರಾತುರಿಯಲ್ಲಿ ಅಧಿವೇಶನ ನಡೆಸುವುದು ಬೇಡ. ಅಧಿವೇಶನದ ವೇಳೆ ಕುರ್ಚಿಗಾಗಿ ಪೈಪೋಟಿ ಮುಂದುವರಿಸಿದರೆ ರೈತರ ಹಿತಕಾಯಲು ಸಾಧ್ಯವಿಲ್ಲ ಎಂದು ವಿಜಯೇಂದ್ರ ಅಭಿಪ್ರಾಯಪಟ್ಟರು.

ಮೆಕ್ಕೆಜೋಳ ಖರೀದಿ ಕೇಂದ್ರಕ್ಕೆ ಬಿಜೆಪಿ ಧರಣಿ:ಉತ್ತರ ಕರ್ನಾಟಕದಲ್ಲಿ ಕಬ್ಬು ಬೆಳೆಗಾರರ ಪರ ಹೋರಾಟ ನಡೆಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಈಗ ಮಧ್ಯ ಕರ್ನಾಟಕದ ದಾವಣಗೆರೆಯಿಂದ ಮೆಕ್ಕೆಜೋಳ ಖರೀದಿ ಕೇಂದ್ರ ಸ್ಥಾಪಿಸುವಂತೆ ಒತ್ತಾಯಿಸಿ ರಾಜ್ಯವ್ಯಾಪಿ ಬಿಜೆಪಿ ಹೋರಾಟಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಿದ್ದಾರೆ. ಖರೀದಿ ಕೇಂದ್ರ ಆರಂಭಿಸಿ ಬೆಂಬಲ ಬೆಲೆಯಡಿ ಮೆಕ್ಕೆಜೋಳ ಖರೀದಿಸುವಂತೆ ಆಗ್ರಹಿಸಿ ದಾವಣಗೆರೆಯಲ್ಲಿ ಮಂಗಳವಾರ ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಬೃಹತ್‌ ಪ್ರತಿಭಟನೆ ನಡೆಸಿತು.ಮಂಗಳವಾರ ಬೆಳಗ್ಗೆ ದಾವಣಗೆರೆಗೆ ಆಗಮಿಸಿದ ವಿಜಯೇಂದ್ರ, ನಗರದ ಡಾ। ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಅಂಬೇಡ್ಕರ್‌ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ನಂತರ, ಅಂಬೇಡ್ಕರ್‌ ವೃತ್ತದಿಂದ ಉಪ ವಿಭಾಗಾಧಿಕಾರಿ ಕಚೇರಿವರೆಗೆ ಬೃಹತ್‌ ಪ್ರತಿಭಟನಾ ಮೆರವಣಿಗೆ ನಡೆಯಿತು. ಎತ್ತಿನ ಬಂಡಿಯನ್ನೇರಿದ ವಿಜಯೇಂದ್ರ, ಬಾರುಕೋಲನ್ನು ಬೀಸುತ್ತಾ ಮೆರವಣಿಗೆಯಲ್ಲಿ ಸಾಗಿದರು. ಪರಿಷತ್‌ ಸದಸ್ಯ ಸಿ.ಟಿ.ರವಿ, ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಮತ್ತಿತರ ನಾಯಕರು ವಿಜಯೇಂದ್ರಗೆ ಸಾಥ್‌ ನೀಡಿದರು. ಬಳಿಕ, ಉಪ ವಿಭಾಗಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಬಿಜೆಪಿ ನಾಯಕರು, ಖರೀದಿ ಕೇಂದ್ರ ಆರಂಭಿಸಿ, ಬೆಂಬಲ ಬೆಲೆಯಡಿ ಮೆಕ್ಕೆಜೋಳ ಮತ್ತು ಭತ್ತವನ್ನು ಖರೀದಿಸುವಂತೆ ಉಪ ವಿಭಾಗಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.

ಈ ವೇಳೆ ಮಾತನಾಡಿದ ವಿಜಯೇಂದ್ರ, ಕಬ್ಬು, ಭತ್ತ, ಮೆಕ್ಕೆಜೋಳ ಬೆಳೆದ ರೈತರ ಸಮಸ್ಯೆಗಳ ಪರಿಹಾರಕ್ಕೆ ರಾಜ್ಯ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸುತ್ತಿಲ್ಲ. ದಾವಣಗೆರೆ, ಹಾವೇರಿ, ಚಿತ್ರದುರ್ಗ, ಬಳ್ಳಾರಿ, ಶಿವಮೊಗ್ಗ, ತುಮಕೂರಿನಲ್ಲಿ ಅತಿ ಹೆಚ್ಚು ಮೆಕ್ಕೆಜೋಳ ಬೆಳೆಯುತ್ತಿದ್ದರೂ ಮೆಕ್ಕೆಜೋಳ ಬೆಳೆಗಾರರ ಹಿತಕಾಯುವ ಕೆಲಸವನ್ನು ಸರ್ಕಾರ ಮಾಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.ರಾಜ್ಯಾದ್ಯಂತ ಮೆಕ್ಕೆಜೋಳ ಬೆಳೆದ ರೈತರು ಹೋರಾಟಕ್ಕೆ ಇಳಿದಿದ್ದಾರೆ. ರೈತರ ಬೇಡಿಕೆಗೆ ಸರ್ಕಾರ ಸ್ಪಂದಿಸದೆ ಅನ್ಯಾಯ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ರೈತರ ಪರ ಹೋರಾಟಕ್ಕೆ ಬಿಜೆಪಿ ತೀರ್ಮಾನ ಕೈಗೊಂಡಿದೆ. ರಾಜ್ಯಾದ್ಯಂತ ಎಲ್ಲ ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನೆಗೆ ನಿರ್ಧರಿಸಲಾಗಿದೆ. ನ.27 ಮತ್ತು 28ರಂದು ವಿಧಾನಸಭಾ ಕ್ಷೇತ್ರಗಳಲ್ಲಿ ಹಾಗೂ ಡಿ.1 ಮತ್ತು 2ರಂದು ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ ತೀವ್ರ ಸ್ವರೂಪದ ಹೋರಾಟ ನಡೆಸಲಿದೆ. ಮಂಗಳವಾರ ಮಧ್ಯ ಕರ್ನಾಟಕದ ದಾವಣಗೆರೆಯಿಂದ ರೈತಪರ ಹೋರಾಟಕ್ಕೆ ಚಾಲನೆ ನೀಡುತ್ತಿದ್ದೇವೆ ಎಂದರು.

ಕೇಂದ್ರ ಸರ್ಕಾರ ಬೆಂಬಲ ಬೆಲೆ ಘೋಷಿಸಿದ್ದರೂ ರಾಜ್ಯ ಸರ್ಕಾರ ಖರೀದಿ ಕೇಂದ್ರ ತೆರೆದಿಲ್ಲ. ರೈತರ ಜ್ವಲಂತ ಸಮಸ್ಯೆಗೆ ಸ್ಪಂದಿಸದೆ, ಇಡೀ ಸಚಿವ ಸಂಪುಟ ದೆಹಲಿಯಲ್ಲಿ ಕುಳಿತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಕ್ಕೆಜೋಳ ಖರೀದಿ ಕೇಂದ್ರ ಸ್ಥಾಪನೆ ಕುರಿತಂತೆ ಚರ್ಚಿಸಲು ಸಭೆ ಕರೆದರೆ, ಕೃಷಿ ಸಚಿವರು ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ ಎಂದು ಆರೋಪಿಸಿದರು. ಕೂಡಲೇ ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸುವಂತೆ ಸರ್ಕಾರವನ್ನು ಆಗ್ರಹಿಸಿದರು.

PREV

Recommended Stories

ವಾಟರ್‌ ಬಾಟಲ್‌ ತಯಾರಿಸಲು ಬೆಂಗಳೂರು ಜಲಮಂಡಳಿ ಸಿದ್ಧತೆ: ಶೀಘ್ರ ಮಾರುಕಟ್ಟೆಗೆ ಲಭ್ಯ
ತಾಯಿಯಿಂದಲೇ 3 ದಿನದ ಶಿಶು ಉಸಿರುಗಟ್ಟಿಸಿ ಕೊಲೆ