ಪೌರಕಾರ್ಮಿಕರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಆಯೋಗ ಬದ್ಧ:ಪಿ.ರಘು

KannadaprabhaNewsNetwork |  
Published : Nov 03, 2026, 02:00 AM IST
29ಕೆಎಂಎನ್ ಡಿ24 | Kannada Prabha

ಸಾರಾಂಶ

ಪೌರಕಾರ್ಮಿಕರು ಹಗಲು-ರಾತ್ರಿ ಎನ್ನದೆ ಜಿಲ್ಲೆಯನ್ನು ಸ್ವಚ್ಛವಾಗಿಡುವಲ್ಲಿ ಶ್ರಮಿಸುವ ಮೂಲಕ ಸಾರ್ವಜನಿಕ ಆರೋಗ್ಯ ಮತ್ತು ಸ್ವಚ್ಛತೆಯನ್ನು ಕಾಪಾಡುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದ್ದಾರೆ. ಕರ್ತವ್ಯ ನಿರ್ವಹಿಸುವಾಗ ಎದುರಾಗುವ ಸಮಸ್ಯೆಗಳು, ಸೌಲಭ್ಯಗಳ ಕೊರತೆ ಹಾಗೂ ಇತರ ತೊಂದರೆಗಳನ್ನು ನೇರವಾಗಿ ಆಲಿಸಿ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿದೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಪೌರಕಾರ್ಮಿಕರು ಕರ್ತವ್ಯ ನಿರ್ವಹಣೆ ವೇಳೆ ಎದುರಿಸುತ್ತಿರುವ ಸಮಸ್ಯೆಗಳನ್ನು ಆಲಿಸಿ ಸಾಧ್ಯವಾದಷ್ಟು ಸ್ಥಳದಲ್ಲಿಯೇ ಪರಿಹಾರ ಕಲ್ಪಿಸುವ ಜೊತೆಗೆ ಇತರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದು ಸೂಕ್ತ ಕ್ರಮ ಕೈಗೊಳ್ಳಲು ರಾಜ್ಯ ಸಫಾಯಿ ಕರ್ಮಚಾರಿ ಆಯೋಗ ಬದ್ಧವಾಗಿದೆ ಎಂದು ಆಯೋಗದ ಅಧ್ಯಕ್ಷ ಪಿ.ರಘು ತಿಳಿಸಿದರು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರಸಭೆ ವತಿಯಿಂದ ಜಿಲ್ಲೆಯ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರು ಹಾಗೂ ವಿವಿಧ ಸಂಸ್ಥೆಗಳ ಸ್ವಚ್ಛತಾ ಕಾರ್ಮಿಕರಿಗಾಗಿ ಆಯೋಜಿಸಿದ್ದ ನೇರ ಸಂವಾದವನ್ನು ಉದ್ಘಾಟಿಸಿ ಮಾತನಾಡಿದರು.

ಪೌರಕಾರ್ಮಿಕರು ಹಗಲು-ರಾತ್ರಿ ಎನ್ನದೆ ಜಿಲ್ಲೆಯನ್ನು ಸ್ವಚ್ಛವಾಗಿಡುವಲ್ಲಿ ಶ್ರಮಿಸುವ ಮೂಲಕ ಸಾರ್ವಜನಿಕ ಆರೋಗ್ಯ ಮತ್ತು ಸ್ವಚ್ಛತೆಯನ್ನು ಕಾಪಾಡುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದ್ದಾರೆ. ಕರ್ತವ್ಯ ನಿರ್ವಹಿಸುವಾಗ ಎದುರಾಗುವ ಸಮಸ್ಯೆಗಳು, ಸೌಲಭ್ಯಗಳ ಕೊರತೆ ಹಾಗೂ ಇತರ ತೊಂದರೆಗಳನ್ನು ನೇರವಾಗಿ ಆಲಿಸಿ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ಕಾರ್ಮಿಕರು ಯಾವುದೇ ಹಿಂಜರಿಕೆಯಿಲ್ಲದೆ ತಮ್ಮ ಸಮಸ್ಯೆಗಳನ್ನು ಧೈರ್ಯವಾಗಿ ಹಂಚಿಕೊಳ್ಳಬೇಕು. ಕಾರ್ಮಿಕರು ಸಲ್ಲಿಸುವ ಪ್ರತಿಯೊಂದು ಅಹವಾಲನ್ನೂ ದಾಖಲಿಸಿಕೊಂಡು ಜಿಲ್ಲಾಧಿಕಾರಿಗಳು, ಜಿಪಂ ಸಿಇಒ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಲಾಗುವುದು ಎಂದು ತಿಳಿಸಿದರು.

ಸ್ಥಳದಲ್ಲಿಯೇ ಪರಿಹರಿಸಲು ಸಾಧ್ಯವಿರುವ ಸಮಸ್ಯೆಗಳಿಗೆ ತಕ್ಷಣ ಕ್ರಮ ಕೈಗೊಳ್ಳಲಾಗುವುದು. ಇತರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದು ಪರಿಹಾರ ಕಲ್ಪಿಸಲು ಅಗತ್ಯ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು.

ಪೌರಕಾರ್ಮಿಕರು ತಮ್ಮ ಹಕ್ಕುಗಳು ಹಾಗೂ ಸರ್ಕಾರದಿಂದ ದೊರೆಯುವ ಸೌಲಭ್ಯಗಳ ಕುರಿತು ಅರಿವು ಹೊಂದಿರಬೇಕು. ಕೆಲಸದ ಸ್ಥಳಗಳಲ್ಲಿ ಯಾರಾದರೂ ತೊಂದರೆ ನೀಡಿದರೆ ಧೈರ್ಯವಾಗಿ ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಕಾರ್ಮಿಕರು ಪರಸ್ಪರ ಒಗ್ಗಟ್ಟಿನಿಂದ ಕಾರ್ಯ ನಿರ್ವಹಿಸಿದಾಗ ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸಲು ಸಾಧ್ಯವಾಗುತ್ತದೆ. ಯಾವುದೇ ಕಾರ್ಮಿಕರಿಗೆ ತೊಂದರೆಯಾದಾಗ ಇತರರು ಒಗ್ಗಟ್ಟಿನಿಂದ ಬೆಂಬಲವಾಗಿ ನಿಲ್ಲಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯ ಶಂಕರ ಅಂಕನಶೆಟ್ಟಿಪುರ, ಆಯೋಗದ ಕಾರ್ಯದರ್ಶಿ ಸುಮಯ ಮಯಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಕೆ. ಶ್ರೀನಿವಾಸ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭುಗಿಲೆದ್ದ ಸರ್ಕಾರ ವರ್ಸಸ್‌ ಕುಮಾರಸ್ವಾಮಿ ಸ್ಟಿಂಗ್‌ ಫೈಟ್‌ - ಈಗ ಎಚ್‌ಡಿಕೆ ಚಾರ್ಜ್‌ಶೀಟ್‌
ಅರಬ್ಬಿ ಸಮುದ್ರದಲ್ಲಿ ಚಂಡಮಾರುತ - ಇನ್ನೂ 3 ದಿನ ರಾಜ್ಯದೆಲ್ಲೆಡೆ ಮಳೆ