ಬಾಲ ಕಾರ್ಮಿಕ, ಬಾಲ್ಯ ವಿವಾಹ ಮುಕ್ತ ಜಿಲ್ಲೆಗೆ ಪಣ

KannadaprabhaNewsNetwork |  
Published : Jun 14, 2025, 12:51 AM IST
ವಿಜಯಪುರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ನಡೆದವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್  ಮಾತನಾಡಿದರು. | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ಬಾಲ ಕಾರ್ಮಿಕ ಪದ್ಧತಿ ಹಾಗೂ ಬಾಲ್ಯ ವಿವಾಹದಂತಹ ಸಾಮಾಜಿಕ ಅನಿಷ್ಟ ಪಿಡುಗುಗಳ ಸಂಪೂರ್ಣ ನಿರ್ಮೂಲನೆಗೆ ಸಾರ್ವಜನಿಕರು, ಪೋಷಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸಿ, ಸಮನ್ವಯತೆಯಿಂದ ಕಾರ್ಯ ನಿರ್ವಹಿಸಿ ಸೂಕ್ತ ಜನಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಬಾಲ ಕಾರ್ಮಿಕ ಪದ್ಧತಿ ಹಾಗೂ ಬಾಲ್ಯ ವಿವಾಹದಂತಹ ಸಾಮಾಜಿಕ ಅನಿಷ್ಟ ಪಿಡುಗುಗಳ ಸಂಪೂರ್ಣ ನಿರ್ಮೂಲನೆಗೆ ಸಾರ್ವಜನಿಕರು, ಪೋಷಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸಿ, ಸಮನ್ವಯತೆಯಿಂದ ಕಾರ್ಯ ನಿರ್ವಹಿಸಿ ಸೂಕ್ತ ಜನಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು.

ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆ, ಶಿಕ್ಷಣ ಇಲಾಖೆ ಮತ್ತು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಉತ್ತಮ ಗುಣಮಟ್ಟದ ಆರೋಗ್ಯ, ಶಿಕ್ಷಣ ಮಕ್ಕಳ ಮೂಲಭೂತ ಹಕ್ಕಾಗಿದ್ದು, ಇದನ್ನು ಉತ್ತಮಪಡಿಸುವುದರಿಂದ ಸುಭದ್ರ ಸಮಾಜದ ನಿರ್ಮಾಣಕ್ಕೆ ಅಡಿಪಾಯವಾಗುವುದು. ಬಾಲ ಕಾರ್ಮಿಕ ಹಾಗೂ ಬಾಲ್ಯ ವಿವಾಹ ಅನಿಷ್ಠ ಪದ್ಥತಿ ಮುಕ್ತ ಜಿಲ್ಲೆಯನ್ನಾಗಿಸಲು ಹಾಗೂ ಈ ಪಿಡಗುಗಳ ನಿರ್ಮೂಲನೆಗೆ ಕಟಿಬದ್ಧರಾಗಿ ಕಾರ್ಯನಿರ್ವಹಿಸಬೇಕು ಎಂದರು.

ಬಾಲ ಕಾರ್ಮಿಕ ಪದ್ದತಿಯ ನಿರ್ಮೂಲನೆಗೆ ಸಂಬಂಧಿಸಿದ ಎಲ್ಲಾ ಇಲಾಖೆಗಳು ಶ್ರಮಿಸುತ್ತಿವೆ. ಈ ನಿಟ್ಟಿನಲ್ಲಿ ಸಾರ್ವಜನಿಕರ ಸಹಕಾರವೂ ಅಗತ್ಯವಾಗಿದೆ. ಮಕ್ಕಳ ಸಹಾಯವಾಣಿ-೧೦೯೮ ಕರೆ ಮಾಡಿ ಮಾಹಿತಿ ನೀಡಿದಲ್ಲಿ ಮಕ್ಕಳ ರಕ್ಷಣೆಯ ಕಾರ್ಯ ಮಾಡಲಾಗುವುದು. ಈ ದಿನ ದೇಶಾದ್ಯಂತ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನವನ್ನಾಗಿ ಆಚರಿಸಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣ ಸೇರಿದಂತೆ ಮಕ್ಕಳ ರಕ್ಷಣೆಯ ಹಿತ ಕಾಯುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅನೇಕ ಯೋಜನೆಗಳನ್ನು ಜಾರಿಗೊಳಿಸಿ ಅನುಷ್ಠಾನಗೊಳಿಸಲಾಗುತ್ತಿದೆ. ಯೋಜನೆಗಳ ಸದುಪಯೋಗಪಡೆದು ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಿ ಅವರ ಭವಿಷ್ಯ ಸುಂದರಗೊಳಿಸುವ ಮಹತ್ತರ ಹೊಣೆ ಪಾಲಕರ ಮೇಲಿದೆ ಎಂಬುದನ್ನು ತಿಳಿಸಿದರು.ಹೆಚ್ಚುವರಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಪ್ರತಿಯೊಬ್ಬರಿಗೂ ಶಿಕ್ಷಣ ಅವಶ್ಯಕವಾಗಿದೆ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಬೇಕು. ಯಾವುದೇ ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳುವ ದೊಡ್ಡ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ತಿಳಿಸಿದರು.

ಜಿಲ್ಲಾ ಕಾರ್ಮಿಕ ಇಲಾಖೆ ಅಧಿಕಾರಿ ಉಮಾಶ್ರೀ ಕೋಳಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಅನೌಪಚಾರಿಕ ಶಿಕ್ಷಣ ಸಂಸ್ಥೆಯ ಫಾದರ್ ಕೆವಿನ್ ಸೆಕ್ವೆರಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕ ಕೆ.ಕೆ.ಚವ್ಹಾಣ, ಶಿಕ್ಷಣ ಇಲಾಖೆ ಉಪ ನಿರ್ದೇಶಕ ಟಿ.ಎಸ್.ಕೋಲಾರ, ಜಿಲ್ಲಾ ಶಸ್ತ್ರ ಚಿಕಿತ್ಸಕ ಶಿವಾನಂದ ಮಾಸ್ತಿಹೊಳಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ದೀಪಾಕ್ಷಿ ಜಾನಕಿ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಬಸಮ್ಮ ಹತ್ತರಕಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು. ಈ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಪ್ರತಿಜ್ಞಾ ವಿಧಿ ಬೋಧಿಸಿದರು.ಜಾಗೃತಿ ಜಾಥಾಗೆ ಚಾಲನೆ : ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜಾಗೃತಿ ಜಾಥಾಕ್ಕೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಹರೀಶ.ಎ.ಚಾಲನೆ ನೀಡಿದರು. ಜಾಥಾವು ಗಾಂಧಿ ಚೌಕ್‌ದಿಂದ ವಿವಿಧ ಮಾರ್ಗಗಳಲ್ಲಿ ಸಂಚರಿಸಿ, ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಸಮಾವೇಶಗೊಂಡಿತು.

------

ಕೋಟ್‌

೧೯೮೬ರಲ್ಲಿ ಬಾಲ ಕಾರ್ಮಿಕ ನಿಷೇಧ ಹಾಗೂ ೨೦೧೬ರಲ್ಲಿ ಬಾಲ ಕಾರ್ಮಿಕ ಹಾಗೂ ಕಿಶೋರ ನಿಷೇಧ ಕಾಯ್ದೆಯೂ ಜಾರಿಗೆ ಬಂದಿದೆ. ಬಾಲ ಕಾರ್ಮಿಕ ಪದ್ಧತಿ ಹೋಗಲಾಡಿಸಲು ಎಲ್ಲರ ಸಹಕಾರ ಅಗತ್ಯವಾಗಿದೆ. ಬಾಲ ಕಾರ್ಮಿಕರು ಕಂಡು ಬಂದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕಾಗಲಿ, ಸಂಬಂಧಿಸಿದ ಇಲಾಖೆಗಳಿಗೆ ಸಾರ್ವಜನಿಕರು ಮಾಹಿತಿ ನೀಡಬೇಕು.

ನ್ಯಾ.ಅರವಿಂದ ಹಾಗರಗಿ, ಹಿರಿಯ ಸಿವಿಲ್ ನ್ಯಾಯಾಧೀಶ

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ