ಕರ್ನಾಟಕದ ಕರಾವಳಿಯ ಅಭಿವೃದ್ಧಿಗೆ ಬದ್ಧ: ಮೋದಿ

KannadaprabhaNewsNetwork |  
Published : Apr 16, 2024, 01:05 AM IST
ಮೋದಿ | Kannada Prabha

ಸಾರಾಂಶ

ಮಂಗಳೂರಿನಲ್ಲಿ ಭಾನುವಾರ ನಡೆದ ರೋಡ್‌ ಶೋನಲ್ಲಿ ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಿದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಜನತೆಗೆ ಪ್ರಧಾನಿ ನರೇಂದ್ರ ಮೋದಿಯವರು ಕೃತಜ್ಞತೆ ಸಲ್ಲಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಮಂಗಳೂರು

ಮಂಗಳೂರಿನಲ್ಲಿ ಭಾನುವಾರ ನಡೆದ ರೋಡ್‌ ಶೋನಲ್ಲಿ ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಿದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಜನತೆಗೆ ಪ್ರಧಾನಿ ನರೇಂದ್ರ ಮೋದಿಯವರು ಕೃತಜ್ಞತೆ ಸಲ್ಲಿಸಿದ್ದಾರೆ.

ಸೋಮವಾರ ಅವರು ತಮ್ಮ ‘ಎಕ್ಸ್‌’ ಖಾತೆಯಲ್ಲಿ ಮಂಗಳೂರು ಭೇಟಿಯನ್ನು ನೆನಪಿಸಿಕೊಂಡಿದ್ದು, ಕರ್ನಾಟಕದ ಕರಾವಳಿ ಭಾಗದ ಜನರು ಹಾಗೂ ಪಕ್ಷದ ನಡುವೆ ಬಲಿಷ್ಠ ಬಾಂಧವ್ಯವಿದೆ. ಉತ್ತಮ ಆಡಳಿತದ ಸಿದ್ಧಾಂತ ಮತ್ತು ಪ್ರಾಚೀನ ಸಂಸ್ಕೃತಿಯನ್ನು ಸಂರಕ್ಷಿಸುವ ಹಾಗೂ ಆಚರಿಸುವ ನಮ್ಮ ಪ್ರಯತ್ನಗಳಿಗೆ ಜನತೆ ನಮ್ಮನ್ನು ಹಲವು ವರ್ಷಗಳಿಂದ ಆಶೀರ್ವದಿಸಿದ್ದಾರೆ ಎಂದು ಹೇಳಿಕೊಂಡಿದ್ದಾರೆ.

ಮತಬ್ಯಾಂಕ್‌ ರಾಜಕಾರಣದಲ್ಲಿ ಮುಳುಗಿ ಜನರನ್ನು ವಿಭಜಿಸುವ ಕಾಂಗ್ರೆಸ್‌ಗೆ ಮತ ಹಾಕಲು ದಕ್ಷಿಣ ಕನ್ನಡಕ್ಕೆ ಸಾಧ್ಯವಿಲ್ಲ. ಕರ್ನಾಟಕದ ಕಾಂಗ್ರೆಸ್‌ ಸರ್ಕಾರ ಗುಂಪುಗಾರಿಕೆಯಲ್ಲಿ ನಿರತವಾಗಿದ್ದು, ಸಾರ್ವಜನಿಕರ ಹಣವನ್ನು ಲೂಟಿ ಮಾಡಿ ಅಭಿವೃದ್ಧಿಯನ್ನು ಕುಂಠಿತಗೊಳಿಸುತ್ತಿದೆ. ಅವರಿಗೆ ಕರ್ನಾಟಕದ ಸಂಸ್ಕೃತಿಯ ಬಗ್ಗೆ ತಿಳುವಳಿಕೆ ಇಲ್ಲ ಎಂದು ಮೋದಿ ಟೀಕಿಸಿದ್ದಾರೆ.

ಬಿಜೆಪಿಯ ಪ್ರಣಾಳಿಕೆ ʻಸಂಕಲ್ಪ ಪತ್ರʼದಲ್ಲಿ ಹೇಳಿರುವಂತೆ ಮಂಗಳೂರು ಅಭಿವೃದ್ಧಿಗಾಗಿ ನಗರಾಭಿವೃದ್ಧಿ ಮೂಲಕ ‘ಸುಗಮ ಜೀವನ’ ಕಲ್ಪಿಸಲಾಗುವುದು. ಮೀನುಗಾರಿಕೆಯಂತಹ ಕ್ಷೇತ್ರಗಳಲ್ಲಿ ನಿರೂಪಿಸಲಾದ ದೃಷ್ಟಿಕೋನ, ಕರಾವಳಿಯ ಆರ್ಥಿಕತೆಯನ್ನು ಪರಿವರ್ತಿಸುತ್ತದೆ ಎಂಬುದು ನನ್ನ ನಂಬಿಕೆ. ಇತ್ತೀಚೆಗೆ ನಾನು ಉದ್ಘಾಟಿಸಿದ ಮತ್ತು ಶಿಲಾನ್ಯಾಸ ನೆರವೇರಿಸಿದ ಕೆಲಸಗಳಿಂದ ಇಲ್ಲಿನ ಜನರ ಜೀವನಮಟ್ಟ ಸುಧಾರಣೆಗೆ ಪುಷ್ಟಿ ದೊರೆಯಲಿದೆ. ಕೊಚ್ಚಿ-ಮಂಗಳೂರು ಪೈಪ್‌ ಲೈನ್‌ ಯೋಜನೆ ಸಹ ಇದರಲ್ಲಿ ಸೇರಿದೆ. ಮುಂಬರುವ ದಿನಗಳಲ್ಲಿ ಇಲ್ಲಿನ ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ, ಬಂದರು ವಲಯಕ್ಕೆ ಸಂಬಂಧಿಸಿದಂತೆ ಮೂಲ ಸೌಕರ್ಯವನ್ನು ಆಧುನೀಕರಣಗೊಳಿಸಲಾಗುವುದು ಎಂದು ಮೋದಿ ತಿಳಿಸಿದ್ದಾರೆ.ನಮ್ಮ ಅಧಿಕಾರದ ಮೂರನೇ ಅವಧಿಯಲ್ಲಿ ಭವಿಷ್ಯದ ಶಿಕ್ಷಣಕ್ಕೆ ಸಂಬಂಧಿಸಿದ ಅಂಶಗಳನ್ನು ಸುಧಾರಿಸುವಲ್ಲಿ ಮತ್ತು ಈ ಪ್ರದೇಶದಲ್ಲಿ ಇನ್ನೂ ಉತ್ತಮ ರೀತಿಯಲ್ಲಿ ಆರೋಗ್ಯ ವಲಯದ ರಕ್ಷಣೆಗೆ ಹೆಚ್ಚಿನ ಕೆಲಸ ಮಾಡಬೇಕಾಗಿದೆ. ನಾವು ನೀಲಿ ಕ್ರಾಂತಿಯಲ್ಲಿ ಕೆಲಸ ಮಾಡಲು ಬಯಸುತ್ತಿದ್ದು, ಇದರಿಂದ ಮೀನುಗಾರರಿಗೆ ಉತ್ತೇಜನ ಸಿಗಲಿದೆ. ಇದೇ ರೀತಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸುವುದರಿಂದ ಕರ್ನಾಟಕದ ಈ ಭಾಗವನ್ನು ಹೆಚ್ಚಿನ ಜನ ನೋಡಲು ಸಹಕಾರಿಯಾಗಲಿದೆ ಎಂದಿದ್ದಾರೆ.

ತುಕ್ಡೆ ಹೇಳಿಕೆ: ಮೋದಿ ವಿರುದ್ಧ ಕಾಂಗ್ರೆಸ್‌ ದೂರು:

ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರಿನ ರ್‍ಯಾಲಿ ವೇಳೆ ಮತದಾರರನ್ನು ಸೆಳೆಯಲು ಕಾಂಗ್ರೆಸ್‌ ಪಕ್ಷ ಹಾಗೂ ಅದರ ಇಂಡಿಯಾ ಮೈತ್ರಿ ಒಕ್ಕೂಟದ ವಿರುದ್ಧ ಆಧಾರರಹಿತ ಮತ್ತು ಕಾನೂನು ಬಾಹಿರ ಹೇಳಿಕೆಗಳನ್ನು ನೀಡಿದ್ದಾರೆ. ಇದರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್‌ ಪಕ್ಷ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಹಿರಿಯ ಮುಖಂಡ ವಿ.ಎಸ್‌.ಉಗ್ರಪ್ಪ ನೇತೃತ್ವದ ಕಾಂಗ್ರೆಸ್‌ನ ಹಲವು ಮುಖಂಡರ ನಿಯೋಗವು ಸೋಮವಾರ ರಾಜ್ಯ ಚುನಾವಣಾ ಕಚೇರಿಗೆ ಭೇಟಿ ನೀಡಿ ದೂರು ಸಲ್ಲಿಸಿ ಕ್ರಮಕ್ಕೆ ಆಗ್ರಹಿಸಿದೆ.

ಮೋದಿ ಅವರು ಚುನಾವಣಾ ರ್‍ಯಾಲಿ ವೇಳೆ, ಕಾಂಗ್ರೆಸ್ ಜೊತೆಗಿನ ಇಂಡಿಯಾ ಮೈತ್ರಿಕೂಟ ತುಕ್ಡೆ ತುಕ್ಡೆ ಗ್ಯಾಂಗ್‌, ಕಾಂಗ್ರೆಸ್ಸಿಗರು ಈ ಗ್ಯಾಂಗಿನ ಸುಲ್ತಾನರು. ಅಯೋಧ್ಯೆ ರಾಮ ಮೂರ್ತಿ ಪ್ರತಿಷ್ಠಾಪನೆಗೆ ಆಹ್ವಾನಿಸಿದರೂ ಬರದೆ ಅವಮಾನ ಮಾಡಿದರು. ಸನಾತನ ಧರ್ಮದ ವಿನಾಶವೇ ಇವರ ಉದ್ದೇಶ. ಹೀಗೆ ಕಾಂಗ್ರೆಸ್‌ ಪಕ್ಷದ ವಿರುದ್ಧ ಕಾನೂನು ಬಾಹಿರ ಮತ್ತು ಆಧಾರರಹಿತವಾಗಿ ಅನೇಕ ಹೇಳಿಕೆಗಳನ್ನು ನೀಡಿ ಅಕ್ರಮವಾಗಿ ಜನರ ಮತ ಸೆಳೆಯಲು ಪ್ರಯತ್ನಿಸಿದ್ದಾರೆ. ಇದೇ ರ್‍ಯಾಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್‌ ಗಾಂಧಿ ಸೇರಿದಂತೆ ಕಾಂಗ್ರೆಸ್‌ನ ವಿವಿಧ ನಾಯಕರ ವಿರುದ್ಧ ದ್ವೇಷದ ಮಾತುಗಳನ್ನು ಆಡಿದ್ದಾರೆ. ಇದು ಸ್ಪಷ್ಟವಾದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿದೆ. ಹಾಗಾಗಿ ಪ್ರಜಾಪ್ರತಿನಿಧಿ ಕಾಯ್ದೆ 1951ರ ಐಪಿಸಿ ಸೆಕ್ಷನ್‌ ಅಡಿ ಮೋದಿ ಅವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಬೇಕೆಂದು ದೂರಿನಲ್ಲಿ ಕಾಂಗ್ರೆಸ್ಸಿಗರು ಕೋರಿದ್ದಾರೆ.ಮೇಕೆದಾಟು, ಮಹದಾಯಿ ತೊಡಕು ನಿವಾರಿಸಿ-ಮೋದಿಗೆ ಜಿಟಿಡಿ ಪತ್ರ:

ಮೇಕೆದಾಟು, ಮಹದಾಯಿ ಯೋಜನೆಗಳ ಜಾರಿಗಿರುವ ಅಡ್ಡಿ ನಿವಾರಿಸುವಂತೆ ಜೆಡಿಎಸ್ ರಾಜ್ಯ ಕೋರ್ ಕಮಿಟಿ ಅಧ್ಯಕ್ಷರೂ ಆದ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಅವರು ಪ್ರಧಾನಿ ನರೇಂದ್ರ ಮೋದಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಮೈಸೂರು, ಚಾಮರಾಜನಗರ, ಮಂಡ್ಯ ಹಾಗೂ ಹಾಸನ ಕ್ಷೇತ್ರಗಳ ಎನ್‌ಡಿಎ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲು ಮೈಸೂರಿಗೆ ಭಾನುವಾರ ಆಗಮಿಸಿದ್ದ ವೇಳೆ ಮೋದಿಗೆ ಅವರು ಈ ಮನವಿ ಪತ್ರ ನೀಡಿದ್ದಾರೆ. ಇದರಿಂದ ಬೆಂಗಳೂರು, ಹುಬ್ಬಳ್ಳಿ - ಧಾರವಾಡ ಸೇರಿದಂತೆ ಕಿತ್ತೂರು ಕರ್ನಾಟಕ ಭಾಗದ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಸಿಗಲಿದೆ. ಆದ್ದರಿಂದ ಈ ಎರಡೂ ಯೋಜನೆಗಳ ಅನುಷ್ಠಾನಕ್ಕಿರುವ ಕಾನೂನು ತೊಡಕು ನಿವಾರಿಸುವಂತೆ ಅವರು ಕೋರಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ