ಸರ್ಕಾರಿ ನೌಕರರ ಬೇಡಿಕೆ ಈಡೇರಿಸಲು ಬದ್ಧ: ಪರಿಷತ್ ಸದಸ್ಯ ರಾಮೋಜಿ ಗೌಡ

KannadaprabhaNewsNetwork |  
Published : Jun 23, 2024, 02:02 AM IST
ಫೋಟೋ: 22 ಹೆಚ್‌ಎಸ್‌ಕೆ 1ಹೊಸಕೋಟೆ ನಗರದ ಚನ್ನಭೈರೇಗೌಡ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ಪರಿಷತ್ ಸದಸ್ಯ ರಾಮೋಜಿಗೌಡ, ಜಿಲ್ಲಾಧಿಕಾರಿ ಎನ್.ಶಿವಶಂಕರ್ ಉದ್ಘಾಟಿಸಿದರು. | Kannada Prabha

ಸಾರಾಂಶ

ವಿಧಾನ ಪರಿಷತ್ ಸದಸ್ಯ ಆಗುವುದಕ್ಕೂ ಮುನ್ನ ಸರ್ಕಾರಿ ನೌಕರನಾಗಿ ಕಾರ್ಯ ನಿರ್ವಹಿಸಿ, ನೌಕರರ ಸಂಘದ ಸದಸ್ಯನಾಗಿ ಹಲವು ಕ್ರೀಡಾಕೂಟಗಳಲ್ಲಿ ಭಾಗವಹಿಸಿದ್ದೇನೆ. ನೌಕರರ ವಿವಿಧ ಬೇಡಿಕೆಗಳಾದ ೭ನೇ ವೇತನ ಆಯೋಗ, ರಾಷ್ಟ್ರೀಯ ಪಿಂಚಣಿ ಯೋಜನೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೌಕರರಿಗೆ ನಗರ ಎಚ್.ಆರ್ ಭತ್ಯೆ ಸೇರಿ ವಿವಿಧ ಬೇಡಿಕೆಗಳ ಬಗ್ಗೆ ಸರ್ಕಾರದ ಗಮನಕ್ಕೆ ತಂದು ನಿಮ್ಮ ಪರ ಕೆಲಸ ಮಾಡುತ್ತೇನೆ.

ಕನ್ನಡಪ್ರಭ ವಾರ್ತೆ ಹೊಸಕೋಟೆ

ಸರ್ಕಾರಿ ನೌಕರರ ಹಲವು ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತಂದು ನೌಕರರ ಆಶೋತ್ತರಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಬೆಂಗಳೂರು ಪದವೀಧರರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ರಾಮೋಜಿ ಗೌಡ ಹೇಳಿದರು.

ಜಿಲ್ಲಾಡಳಿತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಹಯೋಗದಲ್ಲಿ ಜಿಲ್ಲಾಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.

ವಿಧಾನ ಪರಿಷತ್ ಸದಸ್ಯ ಆಗುವುದಕ್ಕೂ ಮುನ್ನ ಸರ್ಕಾರಿ ನೌಕರನಾಗಿ ಕಾರ್ಯ ನಿರ್ವಹಿಸಿ, ನೌಕರರ ಸಂಘದ ಸದಸ್ಯನಾಗಿ ಹಲವು ಕ್ರೀಡಾಕೂಟಗಳಲ್ಲಿ ಭಾಗವಹಿಸಿದ್ದೇನೆ. ನೌಕರರ ವಿವಿಧ ಬೇಡಿಕೆಗಳಾದ ೭ನೇ ವೇತನ ಆಯೋಗ, ರಾಷ್ಟ್ರೀಯ ಪಿಂಚಣಿ ಯೋಜನೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೌಕರರಿಗೆ ನಗರ ಎಚ್.ಆರ್ ಭತ್ಯೆ ಸೇರಿ ವಿವಿಧ ಬೇಡಿಕೆಗಳ ಬಗ್ಗೆ ಸರ್ಕಾರದ ಗಮನಕ್ಕೆ ತಂದು ನಿಮ್ಮ ಪರ ಕೆಲಸ ಮಾಡುತ್ತೇನೆ ಎಂದು ಹೇಳಿದರು.

ವಿಧಾನ ಪರಿಷತ್ ಚುನಾವಣೆ ವೇಳೆ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಜಿಲ್ಲೆಯ ನಿರುದ್ಯೋಗ ಯುವಕ ಯುವತಿಯರಿಗೆ ಉದ್ಯೋಗ ಕೊಡಿಸುವ ಭರವಸೆ ನೀಡಿದ್ದೆ, ಜಿಲ್ಲೆಯ ನಿರುದ್ಯೋಗಿಗಳು ನಮ್ಮ ಕಚೇರಿಗೆ ಬಂದು ಉದ್ಯೋಗದ ಬಗ್ಗೆ ಮಾಹಿತಿ ಪಡೆದುಕೊಳ್ಳಬಹುದು. ಎರಡನೇಯದಾಗಿ ಸರ್ಕಾರಿ ನೌಕರರನ್ನು ಒಳಗೊಂಡ ಗೃಹ ನಿರ್ಮಾಣ ಸಂಘ ರಚಿಸಿ ವಸತಿ ಯೋಜನೆಯಡಿ ಮನೆ ನಿರ್ಮಿಸಿ ಕೊಡಲಾಗುವುದು ಎಂದು ಕ್ರೀಡಾಕೂಟದಲ್ಲಿ ಭಾಗಿಯಾದ ಎಲ್ಲರಿಗೂ ಶುಭ ಹಾರೈಸಿದರು.

ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಮಾತನಾಡಿ, ಸರ್ಕಾರಿ ನೌಕರರ ಬೇಡಿಕೆಗಳ ಈಡೇರಿಕೆಗೆ ನಾವು ಸದಾ ಬದ್ಧ, ಈಗಾಗಲೇ ೭ನೇ ವೇತನ ಆಯೋಗದ ಜಾರಿಗಾಗಿ ಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಗಿದ್ದು, ಜುಲೈನಲ್ಲಿ ಜಾರಿಯಾಗುವ ಆಶ್ವಾಸನೆ ವ್ಯಕ್ತಪಡಿಸಿ, ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಕ್ರೀಡಾಪಟುಗಳಿಗೆ ಅಭಿನಂದನೆ ಸಲ್ಲಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಸರ್ಕಾರಿ ನೌಕರರು ಸಾಕಷ್ಟು ಸಮಯ ಒತ್ತಡದಲ್ಲಿ ಕೆಲಸ ಮಾಡುತ್ತಾರೆ. ಕೆಲಸದ ಜೊತೆಗೆ ಯೋಗ ಮತ್ತು ಕ್ರೀಡೆಯನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ಮಾನಸಿಕವಾಗಿ ಹಾಗೂ ದೈಹಿಕವಾಗಿ ಸದೃಢ ರಾಗಬಹುದು ಎಂದು ಹೇಳಿದರು.

ಬೆಂಗಳೂರು ಗ್ರಾಮಾಂತರ ಸರ್ಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಗಂಗಾಧರ್ ಮಾತನಾಡಿ, ಬೆಂಗಳೂರು ನಗರಕ್ಕೆ ಹೊಂದಿಕೊಂಡಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ನೌಕರರಿಗೆ ಮನೆ ಬಾಡಿಗೆ ಭತ್ಯೆ(ಎಚ್.ಆರ್.ಎ)ಹೆಚ್ಚಿಸುವಂತೆ ರಾಜ್ಯಾಧ್ಯಕ್ಷರಿಗೆ ಮನವಿ ಮಾಡಿದರು. ಇದಕ್ಕೆ ರಾಜ್ಯಾಧ್ಯಕ್ಷರು ಸಕಾರಾತ್ಮಕವಾಗಿ ಸ್ಪಂದಿಸಿದರು.

ಬೆಂಗಳೂರು ಗ್ರಾಮಾಂತರ ಜಿಪಂ ಸಿಇಒ ಡಾ.ಕೆ.ಎನ್ ಅನುರಾಧ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಟಿ.ಜಯಲಕ್ಷ್ಮೀ, ಹೊಸಕೋಟೆ ತಾಲೂಕು ತಹಸೀಲ್ದಾರ್ ಎಂ.ವಿಜಯಕುಮಾರ್, ಜಿಲ್ಲಾಮಟ್ಟದ ಅಧಿಕಾರಿಗಳು, ನೌಕರರ ಸಂಘದ ಜಿಲ್ಲಾಧ್ಯಕ್ಷ ಎಚ್.ಬಾಲಕೃಷ್ಣ , ಜಿಲ್ಲಾ ಗೌರವಾಧ್ಯಕ್ಷ ಮುನಿಶಾಮಪ್ಪ, ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷೆ ಲಕ್ಷ್ಮೀ ನರಸಿಂಹಯ್ಯ ಎನ್, ನೆಲಮಂಗಲ ತಾಲೂಕು ಅದ್ಯಕ್ಷ ವಾಸುದೇವ ಮೂರ್ತಿ, ಹಿರಿಯ ಉಪಾಧ್ಯಕ್ಷ ರವಿಶಂಕರ್, ಜಿಲ್ಲೆಯ ರಾಜ್ಯ ಸರ್ಕಾರಿ ನೌಕರರ ಸಂಘದ ಎಲ್ಲಾ ಪದಾಧಿಕಾರಿಗಳು ಹಾಗೂ ಮುಖಂಡರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

PREV

Recommended Stories

ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''