ಕನ್ನಡಪ್ರಭ ವಾರ್ತೆ ತುಮಕೂರುಕನ್ನಡ ನೆಲ, ಜಲ, ನಾಡು, ಭಾಷೆ ಉಳಿವಿಗಾಗಿ ಪ್ರತಿಯೊಬ್ಬರೂ ಕಂಕಣಬದ್ಧರಾಗಬೇಕು ಎಂದು ಶಾಸಕ ಜಿ.ಬಿ. ಜ್ಯೋತಿಗಣೇಶ್ ಕರೆ ನೀಡಿದರು. ನಗರದ ಎಸ್.ಎಸ್.ಪುರಂ ಮುಖ್ಯರಸ್ತೆಯಲ್ಲಿರುವ ಹಳ್ಳಿ ಮರದ ಸರ್ಕಲ್‌ನಲ್ಲಿ ಮಯೂರ ವೇದಿಕೆ ವತಿಯಿಂದ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ನಾಡಧ್ವಜಾರೋಹಣ ನೆರವೇರಿಸಿ, ಕನ್ನಡಾಂಬೆ ಭುವನೇಶ್ವರಿ ತಾಯಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದ ಅವರು, ಪ್ರಸ್ತುತ ದಿನಗಳಲ್ಲಿ ಕನ್ನಡ ಭಾಷೆಯ ಅಭಿವೃದ್ಧಿಗೆ ಸರ್ಕಾರಗಳ ಜತೆಗೆ ನಾಡಿನಲ್ಲಿರುವ ಪ್ರತಿಯೊಬ್ಬರೂ ಮುಂದಾಗಬೇಕು ಎಂದರು.ಕನ್ನಡ ನೆಲ, ಜಲ, ಭಾಷೆಯ ಬಗ್ಗೆ ಪ್ರತಿಯೊಬ್ಬ ಕನ್ನಡಿಗರು ಅಭಿಮಾನ ಬೆಳೆಸಿಕೊಳ್ಳಬೇಕು. ಈ ಮೂಲಕ ನಮ್ಮ ನೆಲ, ಜಲ ಹಾಗೂ ಭಾಷೆಗೆ ಧಕ್ಕೆ ಬಂದಾಗ ಹೋರಾಟ ನಡೆಸುವ ಮನೋಭಾವ ಹೊಂದಬೇಕು. ಕನ್ನಡ ರಾಜ್ಯೋತ್ಸವ ಆಚರಣೆ ಕೇವಲ ನವೆಂಬರ್ ತಿಂಗಳಿಗೆ ಮಾತ್ರ ಸೀಮಿತವಾಗಬಾರದು, ಬದಲಿಗೆ ನಿತ್ಯೋತ್ಸವವಾಗಬೇಕು ಎಂದರು. ಸಾಮಾಜಿಕ ಕಾರ್ಯಕ್ರಮದ ಮೂಲಕ ರಾಜ್ಯೋತ್ಸವ ಆಚರಣೆ ಮಾಡುತ್ತಿರುವುದು ಇತರರಿಗೆ ಮಾದರಿಯಾಗಿದೆ ಎಂದ ಅವರು, ಮಯೂರ ವೇದಿಕೆಯ ಕನ್ನಡಾಭಿಮಾನ ಹೀಗೆ ಮುಂದುವರೆಯಲಿ, ನಮ್ಮ ಮಾತೃಭಾಷೆಯ ಅಭಿವೃದ್ಧಿಗೆ ಶ್ರಮಿಸಲಿ ಎಂದು ಹೇಳಿದರು.