ಗದಗ: ಜ. 26ರ ಗಣರಾಜ್ಯೋತ್ಸವ ವ್ಯವಸ್ಥಿತ ಆಚರಣೆಗೆ ವಿವಿಧ ಸಮಿತಿ ರಚಿಸಲಾಗಿದ್ದು, ಸಮಿತಿಯವರು ತಮಗೆ ವಹಿಸಿದ ಜವಾಬ್ದಾರಿಯನ್ನು ದಕ್ಷತೆಯಿಂದ ನಿಭಾಯಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಸೂಚಿಸಿದರು.
ಕಾರ್ಯಕ್ರಮದಲ್ಲಿ ಯಾವುದೇ ಲೋಪದೋಷಗಳಿಗೆ ಆಸ್ಪದ ನೀಡದೇ ಅಚ್ಚುಕಟ್ಟಾಗಿ ಕಾರ್ಯ ನಿರ್ವಹಿಸುವಂತೆ ನಿರ್ದೇಶನ ನೀಡಿದರು.
ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಕಾರ್ಯಕ್ರಮದ ಹಿಂದಿನ ದಿನ ಹಾಗೂ ಕಾರ್ಯಕ್ರಮದ ದಿನ ಎರಡು ದಿನಗಳ ಕಾಲ ಸರ್ಕಾರಿ ಕಚೇರಿ ಹಾಗೂ ನಗರದ ವಿವಿಧ ವೃತ್ತಗಳಲ್ಲಿ ಸ್ವಚ್ಛತೆಯೊಂದಿಗೆ ವಿದ್ಯುತ್ ದೀಪಾಲಂಕಾರಕ್ಕೆ ಕ್ರಮ ಕೈಗೊಳ್ಳಬೇಕು. ಗಣರಾಜ್ಯೋತ್ಸವ ದಿನದಂದು ಎಲ್ಲ ಕಚೇರಿ ಮತ್ತು ಶಾಲಾ ಕಾಲೇಜುಗಳ ಸಿಬ್ಬಂದಿ ತಮ್ಮ ಕಾರ್ಯಾಲಯದ ಧ್ವಜಾರೋಹಣ ಬೆಳಗ್ಗೆ 7.30 ರೊಳಗೆ ನೆರವೇರಿಸಿ ಬೆಳಗ್ಗೆ 8.30 ಗಂಟೆಗೆ ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಹಾಜರಾಗಬೇಕು. ಅಂದು ಬೆಳಗ್ಗೆ 9 ಗಂಟೆಗೆ ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಂದ ಸಾರ್ವಜನಿಕ ಧ್ವಜಾರೋಹಣ ಕಾರ್ಯಕ್ರಮ ಜರುಗಲಿದ್ದು ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಸಮಯಕ್ಕೆ ಸರಿಯಾಗಿ ಹಾಜರಿರಬೇಕು ಎಂದು ಸೂಚಿಸಿದರು.ಕಾರ್ಯಕ್ರಮದ ಸ್ಥಳದ ಸ್ವಚ್ಛತೆ ಕುರಿತು ಆದ್ಯತೆ ವಹಿಸಬೇಕು. ಅತಿಥಿಗಳಿಗೆ ಆಸನದ ವ್ಯವಸ್ಥೆ, ಅಲ್ಪೋಪಹಾರದ ವ್ಯವಸ್ಥೆ ಕುರಿತು ಕ್ರಮ ಕೈಗೊಳ್ಳಬೇಕು. ವಿವಿಧ ರಂಗಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನಿಸುವ ಕಾರ್ಯಕ್ರಮ ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗದಂತೆ ನಿಗಾವಹಿಸಬೇಕು ಎಂದರು.
ಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ವ್ಯವಸ್ಥೆ, ಎನ್‌ಎಸ್‌ಎಸ್ ಹಾಗೂ ಎನ್‌ಸಿಸಿ ಪರೇಡ್, ಮೂಲಭೂತ ಸೌಕರ್ಯಗಳ ವ್ಯವಸ್ಥೆ ವಿಷಯಗಳ ಕುರಿತು ಚರ್ಚಿಸಲಾಯಿತು. ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಉಪವಿಭಾಗಾಧಿಕಾರಿ ಗಂಗಪ್ಪ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸವರಾಜ ಕೊಟ್ಟೂರ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ವಿನೋದಕುಮಾರ್ ಹೆಗ್ಗಳಗಿ, ಡಿಎಚ್ಓ ಡಾ. ಎಸ್.ಎಸ್.ನೀಲಗುಂದ, ಭೂ ದಾಖಲೆ ಇಲಾಖೆ ಉಪನಿರ್ದೇಶಕ ರುದ್ರಗೌಡ, ಸಂಖ್ಯಾ ಸಂಗ್ರಹಣಾಧಿಕಾರಿ ಎ.ಎ. ಕಂಬಾಳಿಮಠ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.