ಕನ್ನಡಪ್ರಭ ವಾರ್ತೆ ಕುಶಾಲನಗರ
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಆಶ್ರಯದಲ್ಲಿ ಕುಶಾಲನಗರ ಗೌಡ ಸಮಾಜ ಮತ್ತು ಅಂಗಸಂಸ್ಥೆಗಳ ಹಾಗೂ ವಿವಿಧ ಗೌಡ ಸಮಾಜಗಳ ಸಂಯುಕ್ತ ಆಶ್ರಯದಲ್ಲಿ ಕುಶಾಲನಗರದಲ್ಲಿ ನಡೆದ ಅರೆ ಭಾಷೆ ಗಡಿನಾಡ ಉತ್ಸವ -2025 ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡಿದ ಅವರು, ತಾಯಿನುಡಿಗಳನ್ನು ಬಳಕೆ ಮಾಡುವ ಮೂಲಕ ಉಳಿಸುವುದರೊಂದಿಗೆ ಅಕಾಡೆಮಿ ಮೂಲಕ ಭಾಷೆಯ ಅಭಿವೃದ್ಧಿಗೆ ಕಾರ್ಯ ಸೂಚಿ ನೀಡುವ ಕೆಲಸವಾಗಬೇಕಾಗಿದೆ ಎಂದರು.
ಪ್ರಸಕ್ತ ಭಾಷೆ, ಸಂಸ್ಕೃತಿ ದಿಕ್ಕಾಪಾಲಾಗಿ ಹೋಗುತ್ತಿದ್ದು, ಜನಗಣತಿ ಮೂಲಕ ತಮ್ಮ ಸಮುದಾಯದ ಜನಸಂಖ್ಯೆ ಮಾಹಿತಿಯನ್ನು ಸರ್ಕಾರಕ್ಕೆ ಲಭಿಸುವಂತೆ ಮಾಡುವುದು, ಮುಖ್ಯ ಭಾಷೆ -ಉಪಭಾಷೆಗಳ ನಡುವೆ ಸಾಧಕ ಬಾಧಕಗಳ ಬಗ್ಗೆ ಚರ್ಚಿಸುವುದು, ಈ ಮೂಲಕ ಭಾಷೆಗಳ ಬೆಳವಣಿಗೆ ಸಾಧ್ಯ ಎಂದ ಅವರು ಅಧಿಕಾರದ ಮೂಲಕ ಭಾಷೆಗಳನ್ನು ನಿರ್ಧಾರ ಮಾಡುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಹೇಳಿದರು.ಇದೇ ಸಂದರ್ಭ ಮಾತನಾಡಿದ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಅಕಾಡೆಮಿ ಮೂಲಕ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಪ್ರಸಕ್ತ ಕುಶಾಲನಗರದಲ್ಲಿ ಗಡಿನಾಡ ಉತ್ಸವ ನಾಲ್ಕನೇ ಕಾರ್ಯಕ್ರಮವಾಗಿದ್ದು, ಅರೆ ಭಾಷೆ ಉಳಿವಿನ ಬಗ್ಗೆ ಸಮುದಾಯದ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿದ ಮಡಿಕೇರಿ ಶಾಸಕ ಡಾ ಮಂತರ್ ಗೌಡ ಮಾತನಾಡಿ, ಭಾಷೆ, ಸಂಸ್ಕೃತಿ ಆಚಾರ ವಿಚಾರ ಉಳಿಸಿ ಬೆಳೆಸುವುದು ಪೋಷಕರ ಆದ್ಯ ಕರ್ತವ್ಯವಾಗಿದೆ. ಮಕ್ಕಳಿಗೆ ಈ ಬಗ್ಗೆ ಅರಿವು ಮೂಡಿಸಬೇಕಾಗಿದೆ. ಅಕಾಡೆಮಿ ವತಿಯಿಂದ ನಿರಂತರವಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಭಾಷಾ ಜಾಗೃತಿ ಮೂಡಿಸಬಹುದು ಎಂದು ಸಲಹೆ ನೀಡಿದರು.
ಅಕಾಡೆಮಿ ಸದಸ್ಯರಾದ ಸೂದನ ಈರಪ್ಪ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮಕ್ಕೂ ಮುನ್ನ ಕುಶಾಲನಗರ ಕೊಪ್ಪ ಗಡಿಭಾಗದ ಕಾವೇರಿ ಪ್ರತಿಮೆ ಬಳಿ ಹೊರಟ ಮೆರವಣಿಗೆಗೆ ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಸೂರ್ತಲೆ ಸೋಮಣ್ಣ ಚಾಲನೆ ನೀಡಿದರು.