ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ಸರ್ಕಾರಿ ಶಾಲೆಗಳು ಸ್ಪರ್ಧಾತ್ಮಕವಾಗಿ ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುತ್ತಿವೆ. ಸರ್ಕಾರದ ಅನುದಾನ ಬಳಕೆ ಮಾಡಿಕೊಂಡು ಶಿಕ್ಷಕರು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಿ ಉತ್ತಮ ಫಲಿತಾಂಶ ತರಬೇಕು ಎಂದು ಶಾಸಕ ರಮೇಶ ಬಂಡಿಸಿದ್ದೇಗೌಡ ಹೇಳಿದರು.ಪಟ್ಟಣದ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ತಾಲೂಕು ಪ್ರೌಢಶಾಲೆ ಮುಖ್ಯ ಶಿಕ್ಷಕರ ಸಂಘದ ಸಭೆಯಲ್ಲಿ ಮಾತನಾಡಿದ ಅವರು, ಪ್ರತಿಯೊಬ್ಬರಿಗೂ ಶಿಕ್ಷಣ ಅಗತ್ಯ. ಶಿಕ್ಷಣ ಮಾನವನ ಮೂಲಭೂತ ಹಕ್ಕು. ಶಿಕ್ಷಣ ಇಲ್ಲದಿದ್ದರೆ ಮಾನವನು ಅಪೂರ್ಣ ಎಂದರು.
ನಾವೆಲ್ಲರೂ ಸರ್ಕಾರಿ ಶಾಲೆಯಲ್ಲಿ ಓದಿದ್ದು. ಎಲ್ಲರೂ ಒಂದೊಂದು ಉತ್ತಮ ಸ್ಥಾನದಲ್ಲಿದ್ದೇವೆ. ಅದರಂತೆ ಸರ್ಕಾರಿ ಶಾಲೆಗಳನ್ನು ಕಡೆಗಾಣಿಸಬಾರದು. ಮುಂದಿನ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ತಾಲೂಕು, ಜಿಲ್ಲಾ ಮತ್ತು ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿಕೊಡುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.ಇತ್ತೀಚೆಗೆ ಖಾಸಗಿ ಶಾಲೆಗಳ ಹಾವಳಿಯಿಂದ ತಾಲೂಕಿನ ಹಲವು ಗ್ರಾಮಗಳಲ್ಲಿ ನೂರಾರು ವಿದ್ಯಾರ್ಥಿಗಳಿದ್ದ ಸರ್ಕಾರಿ ಶಾಲೆಗಳು ಮುಚ್ಚಲ್ಪಟ್ಟಿವೆ. ಜೊತೆಗೆ ಶಿಕ್ಷಕರು ಒಂದು ವೇಳೆ ಮೈ ಮರೆತರೆ ಇನ್ನು ಅನೇಕ ಸರ್ಕಾರಿ ಶಾಲೆಗಳು ಮುಚ್ಚಲ್ಪಡುತ್ತವೆ ಎಂದು ಎಚ್ಚರಿಸಿದರು.
ಶಿಕ್ಷಕರು ಎಚ್ಚೆತ್ತುಕೊಂಡು ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಉತ್ತಮ ತರಬೇತಿ ನೀಡಬೇಕು. ನೂರಕ್ಕೆ ನೂರು ಫಲಿತಾಂಶದೊಂದಿಗೆ ಉತ್ತಮ ಶ್ರೇಣಿಯಲ್ಲಿ ವಿದ್ಯಾರ್ಥಿಗಳು ತೇರ್ಗಡೆಯಾಗಲು ಶ್ರಮಿಸಬೇಕು ಎಂದು ಕಿವಿಮಾತು ಹೇಳಿದರು.ವಿಧಾನ ಪರಿಷತ್ತಿನ ಸದಸ್ಯ ಮರಿತಿಬ್ಬೇಗೌಡ ಶಿಕ್ಷಕರನ್ನು ಕುರಿತು ಮಾತನಾಡಿದರು. ಈ ವೇಳೆ ಶಾಸಕರು ಪ್ರೌಢಶಾಲೆ ಮುಖ್ಯ ಶಿಕ್ಷಕರ ಡೈರಿ ಬಿಡುಗಡೆ ಗೊಳಿಸಿದರು.
ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಮಹದೇವಸ್ವಾಮಿ ಗಾಮನಹಳ್ಳಿ ಮಾತನಾಡಿ, ಮುಖ್ಯ ಶಿಕ್ಷಕರು ಒತ್ತಡದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸನ್ನಿವೇಶ ನಿರ್ಮಾಣವಾಗಿದೆ. ಬೋಧನಾ ಕೆಲಸಕ್ಕಿಂತ ಇನ್ನಿತರೆ ಕಚೇರಿ ಕೆಲಸಗಳೇ ಹೆಚ್ಚಾಗಿವೆ. ಇತರೆ ಕರ್ತವ್ಯದಿಂದ ಬಿಡುಗಡೆಗೊಳಿಸಿ ಮುಕ್ತವಾಗಿ ಮಕ್ಕಳಿಗೆ ಪಾಠ ಮಾಡಲು ಅನುವು ಮಾಡಿಕೊಡಲು ಶಾಸಕರು ವಿಧಾನಸಭೆ ಹಾಗೂ ಪರಿಷತ್ತಿನಲ್ಲಿ ಚರ್ಚಿಸಿ ಸರ್ಕಾರದ ಮೇಲೆ ಒತ್ತಡ ಹೇರುವಂತೆ ಮನವಿ ಮಾಡಿದರು.ಈ ವೇಳೆ ಬಿಇಒ ಎಂ.ಆರ್.ಅನಂತರಾಜು, ಗಾಂಧಿವಾದಿ ಡಾ.ಸುಜಯ್ ಕುಮಾರ್, ಸಹ ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರು, ಶಿಕ್ಷಣ ಸಂಯೋಜಕಿ ಪ್ರತಿಮಾ, ಪ್ರಾಂಶುಪಾಲ ಅಶೋಕ್ ಕುಮಾರ್, ಸಂಘದ ಪದಾಧಿಕಾರಿಗಳು ಸೇರಿದಂತೆ ಶಿಕ್ಷಕರು ಹಾಜರಿದ್ದರು.