- ತಾಲೂಕು ಮಟ್ಟದ ಪ್ರೌಢ, ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಸಹ ಪಠ್ಯ ಚಟುವಟಿಕೆಗಳ ಸ್ಪರ್ಧೆ
ಸಹ ಪಠ್ಯ ಚಟುವಟಿಕೆಗಳ ಸ್ಪರ್ಧೆಯಲ್ಲಿ ತಾಲೂಕಿನ ಶಿಕ್ಷಕರಿಗೆ ಏರ್ಪಡಿಸಿರುವ ವಿವಿಧ ಸ್ಪರ್ಧೆಗಳಿಂದ ಅವರರಲ್ಲಿ ಅಡಗಿರುವ ಸುಪ್ತ ಪ್ರತಿಭೆ ಅನಾವರಣಗೊಳ್ಳಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶಬನಾ ಅಂಜುಂ ತಿಳಿಸಿದರು.
ಬುಧವಾರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಪ್ರೌಢ ಶಾಲಾ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಏರ್ಪಡಿಸಿದ್ದ ವಿವಿಧ ಸ್ಪರ್ಧೆಗಳ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಶಿಕ್ಷಣ ಇಲಾಖೆಯಿಂದ ಪ್ರತಿ ವರ್ಷ ಶಿಕ್ಷಕರಿಗೆ ತಾಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದ ಸ್ಪರ್ಧೆ ನಡೆಸುತ್ತಿದ್ದೇವೆ. ಪ್ರತಿ ನಿತ್ಯ ಮಕ್ಕಳಿಗೆ ಪಾಠ ಹೇಳುವ ಶಿಕ್ಷಕರಲ್ಲಿ ಹಲವಾರು ಪ್ರತಿಭೆಗಳಿವೆ. ಇಂತಹ ವೇದಿಕೆಗಳಲ್ಲಿ ಶಿಕ್ಷಕರು ಭಾಗವಹಿಸಬೇಕು. ಸಿಕ್ಕ ಅವಕಾಶಗಳನ್ನು ಉಪಯೋಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.ಈಗಾಗಲೇ ತಾಲೂಕಿನಲ್ಲಿ ಹೊಸದಾಗಿ 2 ಕೆಪಿಎಸ್ ಶಾಲೆ ಪ್ರಾರಂಭವಾಗುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆ ಇದ್ದರೂ ಶಾಲೆ ಮುಚ್ಚುವುದಿಲ್ಲ ಎಂದು ಶಿಕ್ಷಣ ಸಚಿವರು ಭರವಸೆ ನೀಡಿದ್ದಾರೆ ಎಂದರು.
ಶಿಕ್ಷಣ ಸಂಯೋಜಕ ರಂಗಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ, ಸಹ ಪಠ್ಯ ಚಟುವಟಿಕೆಗಳ ಸ್ಪರ್ಧೆ ಕಾರ್ಯಕ್ರಮದಲ್ಲಿ ಪ್ರೌಢ ಶಾಲೆ ಶಿಕ್ಷಕರು ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಚಿತ್ರಕಲೆ, ಆಶುಭಾಷಣ,ಪ್ರಬಂಧ ಸೇರಿದಂತೆ 7 ಸ್ಪರ್ಧೆ ನಡೆಸಿ ವಿಜೇತರಾದವರಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನ ನೀಡಲಾಗುವುದು. ಇಲ್ಲಿ ವಿಜೇತರಾದವರು ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಸ್ಪರ್ಧಿಸಬಹುದು ಎಂದರು.
ಸಭೆಯಲ್ಲಿ ನಿಕಟಪೂರ್ವ ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶನಾಯಕ್, ಪ್ರೌಢ ಶಾಲಾ ಮುಖ್ಯೋಪಾಧ್ಯಾಯರ ಸಂಘದ ಕಾರ್ಯದರ್ಶಿ ಶ್ರೀಕಾಂತ್, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಂಜುಂಡಪ್ಪ, ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ಸುಬಾಸ್, ನಿರ್ದೇಶಕರಾದ ರಾಜಾನಾಯಕ್, ನಾಗೇಶ್ ಇದ್ದರು.