ಸಾರ್ವಜನಿಕ ಗಣೇಶೋತ್ಸವವನ್ನು ಶಾಂತಿ, ಸೌಹಾರ್ದ ಹಾಗೂ ಶಿಸ್ತುಬದ್ಧವಾಗಿ ಆಚರಿಸುವ ನಿಟ್ಟಿನಲ್ಲಿ ಈ ಬಾರಿ ಹಲವು ಕಟ್ಟುನಿಟ್ಟಿನ ನಿಯಮ ಪಾಲಿಸುವುದು ಅನಿವಾರ್ಯವಾಗಿದೆ.
ಕನ್ನಡಪ್ರಭ ವಾರ್ತೆ ನರೇಗಲ್ಲ
ಸಾರ್ವಜನಿಕ ಗಣೇಶೋತ್ಸವವನ್ನು ಶಾಂತಿ, ಸೌಹಾರ್ದ ಹಾಗೂ ಶಿಸ್ತುಬದ್ಧವಾಗಿ ಆಚರಿಸುವ ನಿಟ್ಟಿನಲ್ಲಿ ಈ ಬಾರಿ ಹಲವು ಕಟ್ಟುನಿಟ್ಟಿನ ನಿಯಮ ಪಾಲಿಸುವುದು ಅನಿವಾರ್ಯವಾಗಿದೆ. ಗಣೇಶ ಪ್ರತಿಷ್ಠಾಪನೆಯಿಂದ ಹಿಡಿದು ವಿಸರ್ಜನೆಯವರೆಗೆ ಸಾರ್ವಜನಿಕರಿಗೆ ತೊಂದರೆಯಾಗದಂತೆ ಹಾಗೂ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ಆಯೋಜಕರು ಮುನ್ನೆಚ್ಚರಿಕೆ ವಹಿಸಬೇಕಾಗಿದ್ದು, ಡಿಜೆಗೆ ಸಂಪೂರ್ಣ ನಿಷೇಧವಿದೆ ಎಂದು ಸ್ಥಳೀಯ ಪಿಎಸ್ಐ ಐಶ್ವರ್ಯ ನಾಗರಾಳ ತಿಳಿಸಿದರು.
ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಶನಿವಾರ ಸಂಜೆ ನಡೆದ ಶಾಂತಿ ಸಭೆಯಲ್ಲಿ ಮಾತನಾಡಿದರು.
ಗಣೇಶೋತ್ಸವ ಹಾಗೂ ವಿಸರ್ಜನಾ ಮೆರವಣಿಗೆಯಲ್ಲಿ ಡಿಜೆ ಬಳಕೆಗೆ ಸಂಪೂರ್ಣ ನಿಷೇಧ ವಿಧಿಸಲಾಗಿದ್ದು, ನಿಯಮ ಮೀರಿ ಡಿಜೆ ಬಳಸಿದಲ್ಲಿ ಸಂಬಂಧಪಟ್ಟವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದರು.
ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಷ್ಠಾಪಿಸುವ ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆಯನ್ನು ಅನಗತ್ಯವಾಗಿ ವಿಳಂಬ ಮಾಡದೆ ರಾತ್ರಿ 10 ಗಂಟೆಯೊಳಗೆ ಕಡ್ಡಾಯವಾಗಿ ವಿಸರ್ಜನೆಗೊಳಿಸಬೇಕು. ವಿಸರ್ಜನೆ ಹೆಸರಿನಲ್ಲಿ ತಡರಾತ್ರಿವರೆಗೆ ಮೆರವಣಿಗೆ, ಅತಿಯಾದ ಧ್ವನಿವರ್ಧಕ ಬಳಕೆ ಹಾಗೂ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡುವ ಚಟುವಟಿಕೆಗಳಿಗೆ ಅವಕಾಶವಿಲ್ಲ.ಮೆರವಣಿಗೆಯನ್ನು ನಿಗದಿತ ಮಾರ್ಗದಲ್ಲಿಯೇ ನಡೆಸಬೇಕು. ಸಂಚಾರಕ್ಕೆ ಅಡ್ಡಿಯಾಗದಂತೆ ಆಯೋಜಕರು ಸ್ವಯಂ ಸೇವಕರನ್ನು ನಿಯೋಜಿಸಿ ಪೊಲೀಸ್ ಹಾಗೂ ಸ್ಥಳೀಯ ಆಡಳಿತದೊಂದಿಗೆ ಸಹಕರಿಸುವುದು ಅಗತ್ಯವಾಗಿದೆ.
ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪಿಸುವ ಸಂಘ-ಸಂಸ್ಥೆಗಳು ಹಾಗೂ ಯುವಕ ಮಂಡಳಿಗಳು ಸಂಬಂಧಪಟ್ಟ ಇಲಾಖೆಗಳಿಂದ ಅಗತ್ಯ ಅನುಮತಿಗಳನ್ನು ಮುಂಚಿತವಾಗಿಯೇ ಪಡೆದುಕೊಳ್ಳಬೇಕು. ವಿಶೇಷವಾಗಿ ವಿದ್ಯುತ್ ಸರಬರಾಜಿಗೆ ಸಂಬಂಧಿಸಿದ ಇಲಾಖೆಯಿಂದ ಅಗತ್ಯ ಅನುಮತಿ ಹಾಗೂ ಪಟ್ಟಣ ಪಂಚಾಯತಿಯಿಂದ ಅನುಮತಿ ಪಡೆಯುವುದು ಕಡ್ಡಾಯ. ಸಾರ್ವಜನಿಕ ರಸ್ತೆ, ವೃತ್ತ ಅಥವಾ ಇತರ ಸಾರ್ವಜನಿಕ ಸ್ಥಳಗಳಲ್ಲಿ ಪೆಂಡಾಲ್ ನಿರ್ಮಿಸುವಾಗ, ಬ್ಯಾನರ್ ಕಟ್ಟುವಾಗ ಸುರಕ್ಷತೆ ಮತ್ತು ಸಂಚಾರಕ್ಕೆ ಸಂಬಂಧಿಸಿದ ನಿಯಮಗಳನ್ನು ಪಾಲಿಸಬೇಕು. ಪೆಂಡಾಲ್‌ಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವಾಗ ಕಳಪೆ ತಂತಿ, ಅಸುರಕ್ಷಿತ ಸಂಪರ್ಕ ಹಾಗೂ ಅಪಾಯಕಾರಿ ರೀತಿಯಲ್ಲಿ ವಿದ್ಯುತ್ ದೀಪಾಲಂಕಾರ ಮಾಡುವುದನ್ನು ತಪ್ಪಿಸಬೇಕು. ವಿದ್ಯುತ್ ಅವಘಡಗಳಿಗೆ ಅವಕಾಶವಾಗದಂತೆ ಆಯೋಜಕರು ಸುರಕ್ಷತೆಗೆ ಮೊದಲ ಆದ್ಯತೆ ನೀಡಬೇಕು ಎಂದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.