ಜಿಲ್ಲೆಯಲ್ಲಿ ಅತಿವೃಷ್ಟಿ/ ಪ್ರವಾಹದಿಂದ ಹಾನಿಗೊಳಗಾದ ಮನೆಗಳ ಮಹಜರು ಮಾಡಿ ವಸತಿ ನಿಗಮದ ಪೋರ್ಟಲ್‌ನಲ್ಲಿ ಮಾಹಿತಿ ಅಳವಡಿಸಿ, ತಕ್ಷಣ ಪರಿಹಾರ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು.
ಕನ್ನಡಪ್ರಭ ವಾರ್ತೆ ಬೆಳಗಾವಿ
ಜಿಲ್ಲೆಯಲ್ಲಿ ಅತಿವೃಷ್ಟಿ/ ಪ್ರವಾಹದಿಂದ ಹಾನಿಗೊಳಗಾದ ಮನೆಗಳ ಮಹಜರು ಮಾಡಿ ವಸತಿ ನಿಗಮದ ಪೋರ್ಟಲ್‌ನಲ್ಲಿ ಮಾಹಿತಿ ಅಳವಡಿಸಿ, ತಕ್ಷಣ ಪರಿಹಾರ ಒದಗಿಸಬೇಕು. ಕೃಷಿ ಹಾಗೂ ತೋಟಗಾರಿಕೆ ಬೆಳೆಯ ಹಾನಿ ಬಗ್ಗೆ ಸಂಬಂಧಿಸಿದ ಇಲಾಖೆಗಳೊಂದಿಗೆ ಜಂಟಿ ಸಮೀಕ್ಷೆ ನಡೆಸಿ ಪರಿಹಾರ ಪೋರ್ಟಲ್‌ನಲ್ಲಿ ಹಾನಿ ಕುರಿತ ದತ್ತಾಂಶ ಅಳವಡಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಕಂದಾಯ ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಸಂಪೂರ್ಣ ಹಾನಿಯಾಗಿರುವ ಮನೆಗಳ ಕುರಿತು ಮಾಹಿತಿ ಲಭ್ಯವಿದೆ. ತ್ವರಿತವಾಗಿ ಪರಿಹಾರ ವಿತರಿಸಬೇಕು. ವಿಳಂಬವಾಗಬಾರದು. ಹಾನಿಗೊಳಗಾದ ಪ್ರದೇಶಗಳಿಗೆ ಅಧಿಕಾರಿಗಳು ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ತಿಳಿಸಿದರು.
ಪೋರ್ಟಲ್‌ನಲ್ಲಿ ಮಾಹಿತಿ ಅಳವಡಿಸಲು ಸೂಚನೆ:
ಹುಕ್ಕೇರಿ ತಾಲೂಕಿನಲ್ಲಿ ಮನೆಹಾನಿ ಅರ್ಹ ಪ್ರಕರಣಗಳನ್ನು ವಸತಿ ನಿಗಮದ ಪೋಟಲ್ ಗಳಲ್ಲಿ ಅಳವಡಿಸಿ, ಕೂಡಲೇ ಪರಿಹಾರ ವಿತರಿಸಬೇಕು. ಹಾನಿಯಾದ ಮನೆಗಳನ್ನು ಎ, ಬಿ2 ಸೇರಿ ವರ್ಗಗಳ ವಿಂಗಡನೆ ಮಾಡಿ ವಸತಿ ನಿಗಮದ ಪೋರ್ಟಲ್ ನಲ್ಲಿ ದಾಖಲಿಸಬೇಕು ಎಂದು ಹುಕ್ಕೇರಿ ತಹಸೀಲ್ದಾರಗೆ ವಿಡಿಯೋ ಸಂವಾದ ಮೂಲಕ ಸೂಚನೆ ನೀಡಿದರು.
ವಾರದಲ್ಲಿ ಸಮೀಕ್ಷೆ ಪೂರ್ಣಗೊಳಿಸಿ:
ಹುಕ್ಕೇರಿ, ಅಥಣಿ, ಚಿಕ್ಕೋಡಿಯಲ್ಲಿ ಅತೀ ಹೆಚ್ಚು ಬೆಳೆಹಾನಿಯಾಗಿದೆ. ಸಂಬಂಧಿಸಿದ ಅಧಿಕಾರಿಗಳು ಹಾನಿಯಾದ ಪ್ರದೇಶಗಳಿಗೆ ಭೇಟಿ ನೀಡಿ ಬೆಳೆಹಾನಿ ವರದಿ ಸಲ್ಲಿಸಬೇಕು. ಆಯಾ ತಹಸೀಲ್ದಾರ್‌ಗಳು ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಸಮನ್ವಯದೊಂದಿಗೆ ಸಮೀಕ್ಷೆ ಕೈಗೊಳ್ಳಲು ತಂಡಗಳನ್ನು ರಚಿಸಿ, ವಾರದೊಳಗೆ ಸಮೀಕ್ಷಾ ಕಾರ್ಯ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.
ಜಿಲ್ಲೆಯಲ್ಲಿ ಮಳೆ ಹಾನಿಯಿಂದ ವಿವಿಧ ಭಾಗಗಳಲ್ಲಿ ಒಟ್ಟು 100 ಕಿ.ಮೀ ರಸ್ತೆ ಹಾಳಾಗಿರುವ ಬಗ್ಗೆ ಮಾಹಿತಿಯಿದೆ. ರಸ್ತೆಗಳು ಹಾಳಾಗಿರುವ ಕುರಿತು ಸಮೀಕ್ಷೆ ನಡೆಸಿ ಪೂರ್ಣ ಮಾಹಿತಿ ನೀಡಬೇಕು. ರಸ್ತೆಗಳ ನಿರ್ಮಾಣ, ದುರಸ್ತಿ ಕಾರ್ಯ ಕೈಗೊಳ್ಳಲು ಅನುದಾನ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.
ತ್ವರಿತ ವರದಿ ನೀಡಬೇಕು:
ಎಲ್ಲ ಅಧಿಕಾರಿಗಳು ಮನೆ ಹಾನಿಗಳ ಕುರಿತು ಪಾರದರ್ಶಕ ವರದಿ ನೀಡಬೇಕು. ಈ ಹಿಂದಿನ ಸಾಲಿನಲ್ಲಿ ಮನೆಗಳು ಹಾನಿಯಾದಲ್ಲಿ ಅವುಗಳನ್ನು ಮಾಹಿತಿ ಕೂಡ ನೀಡಿ, ಆಯಾ ಸಾಲಿನಲ್ಲಿ ಹಾನಿಯಾಗಿರುವ ಬಗ್ಗೆ ನಮೂದಿಸಬೇಕು. ಎಲ್ಲ ತಾಲೂಕಾಧಿಕಾರಿಗಳು ಗ್ರಾಪಂ ವ್ಯಾಪ್ತಿಯಲ್ಲಿ ಹಾನಿಯಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು. ಅಲ್ಲದೆ, ಹಾನಿಯಾದ ಅಂಗನವಾಡಿ, ಶಾಲೆಗಳ ಕಟ್ಟಡಗಳ ದುರಸ್ತಿ ಕಾರ್ಯ ಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗಳ ಪರಿಶೀಲಿಸಬೇಕು ಎಂದು ಜಿಪಂ ಸಿಇಒ ರಾಹುಲ್ ಶಿಂಧೆ ನಿರ್ದೇಶನ ನೀಡಿದರು.
ಮಾಹಿತಿ ಅಳವಡಿಕೆಗೆ ವಿಳಂಬ ಮಾಡದೇ ಶೀಘ್ರ ಪರಿಹಾರ ಒದಗಿಸಬೇಕು. ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕೆಂದು ಅಧಿಕಾರಿಗಳಿಗೆ ಜಿಪಂ ಸಿಇಒ ತಿಳಿಸಿದರು.
ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಮಹಾನಗರ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್. ಬಿ.ಬಸರಗಿ, ಬೆಳಗಾವಿ ಉಪವಿಭಾಗಾಧಿಕಾರಿ ಶ್ರವಣ ನಾಯಕ, ಬೆಳಗಾವಿ ತಹಸೀಲ್ದಾರ ಬಸವರಾಜ ನಾಗರಾಳ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಲ್ಲಿಕಾರ್ಜುನ್ ಕಲಾದಗಿ, ಜಿಪಂ ಮುಖ್ಯ ಯೋಜನಾ ನಿರ್ದೇಶಕ ಗಂಗಾಧರ ದಿವಿಟರ, ಯೋಜನಾ ನಿರ್ದೇಶಕ ರವಿ ಬಂಗಾರಪ್ಪನವರ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಮಹಾಂತೇಶ ಮುರಗೋಡ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಬಸವರಾಜ ಕುರಿಹುಲಿ ಸೇರಿ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು. ಎಲ್ಲ ತಹಸೀಲ್ದಾರ್‌ಗಳು, ತಾಪಂ ಅಧಿಕಾರಿಗಳು ವಿಡಿಯೋ ಸಂವಾದದಲ್ಲಿ ಪಾಲ್ಗೊಂಡಿದ್ದರು.ಸರ್ಕಾರದ ಮಾರ್ಗಸೂಚಿ ಅನ್ವಯ ಮನೆ ಹಾನಿ ಸಮೀಕ್ಷೆ ನಡೆಸಿ, ಹಾನಿಯಾಗಿರುವ ವರ್ಗಗಳನ್ನು ನಮೂದಿಸಬೇಕು. ಬೆಳಗಾವಿ ತಾಲ್ಲೂಕಿನಲ್ಲಿ ಹಾನಿಯಾಗಿರುವ 4 ಮನೆಗಳಿಗೆ ಈಗಾಗಲೇ ಪರಿಹಾರ ಬಿಡುಗಡೆ ಮಾಡಲಾಗಿದೆ. ಬಾಕಿ ಮನೆಗಳ ಕುರಿತು ಮಾಹಿತಿ ದಾಖಲಿಸಿ, ಸರ್ಕಾರದ ಹೊಸ ಮಾರ್ಗಸೂಚಿ ಅನ್ವಯ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಬೇಕು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.