ಕುಡಿಯುವ ನೀರಿನ ಕಾಮಗಾರಿಗಳನ್ನು ಆದ್ಯತೆಯಲ್ಲಿ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ

KannadaprabhaNewsNetwork | Published : Jan 21, 2025 12:31 AM

ಸಾರಾಂಶ

ಫೆಬ್ರವರಿ ಮೊದಲನೇ ವಾರದಲ್ಲಿ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಕಾರವಾರ: ನಗರ, ಸ್ಥಳೀಯ ಸಂಸ್ಥೆಗಳಲ್ಲಿನ ಕುಡಿಯುವ ನೀರಿನ ಅನುಮೋದಿತ ಕ್ರಿಯಾ ಯೋಜನೆಯ ಕಾಮಗಾರಿಗಳನ್ನು ಶೀಘ್ರದಲ್ಲಿ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ನಿರ್ದೇಶನ ನೀಡಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ನಗರ, ಸ್ಥಳೀಯ ಸಂಸ್ಥೆಗಳ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿನ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅನುಮೋದಿತ ಕ್ರಿಯಾ ಯೋಜನೆಗಳ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆಯನ್ನು ವಿಳಂಬ ಮಾಡುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸದ ಜಿಲ್ಲಾಧಿಕಾರಿ ಅವರು, ಅನುಮೋದನೆ ನೀಡಿದ ನಂತರವೂ ವಿಳಂಬ ಧೋರಣೆ ತೋರುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುವ ಎಚ್ಚರಿಕೆ ನೀಡಿ, ಫೆಬ್ರವರಿ ಮೊದಲನೇ ವಾರದಲ್ಲಿ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.

ಕಾಮಗಾರಿಗಳು ಪೂರ್ಣಗೊಂಡ ಕೂಡಲೇ ಗುತ್ತಿಗೆದಾರರಿಗೆ ಹಣ ಪಾವತಿ ಮಾಡಬೇಕು. ನಗರ, ಸ್ಥಳೀಯ ಸಂಸ್ಥೆಗಳು ಕಾಮಗಾರಿ ಪೂರ್ಣಗೊಂಡರೂ ಹಣ ಪಾವತಿ ಮಾಡದೇ ಇರುವುದರಿಂದ ಆರ್ಥಿಕ ಪ್ರಗತಿ ಕುಂಠಿತವಾಗಿದೆ. ಅಧಿಕಾರಿಗಳು ವಿಳಂಬ ಧೋರಣೆ ಅನುಸರಿಸದೇ ಪೂರ್ಣಗೊಂಡ ಕಾಮಗಾರಿಗಳಿಗೆ ಸಕಾಲದಲ್ಲಿ ಹಣ ಪಾವತಿಸಬೇಕು. ಜಿಲ್ಲೆಯಲ್ಲಿ 15ನೇ ಹಣಕಾಸು ಯೋಜನೆಯಡಿ ಬಾಕಿ ಉಳಿದಿರುವ 17 ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ ಶೇ. 100ರಷ್ಟು ಭೌತಿಕ ಮತ್ತು ಆರ್ಥಿಕ ಪ್ರಗತಿ ಸಾಧಿಸಬೇಕು. ಅಧಿಕಾರಿಗಳು ಸರಿಯಾಗಿ ಕಾರ್ಯನಿರ್ವಹಿಸದಿದ್ದರೆ ಅಂತಹ ಅಧಿಕಾರಿಗಳಿಗೆ ನೋಟಿಸ್ ನೀಡುವಂತೆ ನಗರಾಭಿವೃದ್ಧಿಕೋಶದ ಯೋಜನಾ ನಿರ್ದೇಶಕರಿಗೆ ನಿರ್ದೇಶನ ನೀಡಿದರು.

ನಗರಾಭಿವೃಧ್ಧಿಕೋಶದ ಯೋಜನಾ ನಿರ್ದೇಶಕಿ ಸ್ಟೇಲಾ ವರ್ಗಿಸ್ ಮಾತನಾಡಿ, ನಗರ, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳಿಗೆ ₹2 ಲಕ್ಷದ ವರೆಗೆ ಕಾಮಗಾರಿಗಳಿಗೆ ಮಂಜೂರಾತಿ ನೀಡಲು ಅವಕಾಶವಿದ್ದು, ₹2 ಲಕ್ಷದೊಳಗಿನ ಕಾಮಗಾರಿಗಳನ್ನು ಶೀಘ್ರದಲ್ಲಿ ಪೂರ್ಣಗೊಳಿಸಲು ಸಾಧ್ಯವಿದೆ. ಆ ನಿಟ್ಟಿನಲ್ಲಿ ಎಲ್ಲ ಪೌರಾಯುಕ್ತರು ಮತ್ತು ಮುಖ್ಯಾಧಿಕಾರಿಗಳು ಕಾರ್ಯಪ್ರರ್ವತರಾಗಿ ಕಾಮಗಾರಿಗಳನ್ನು ಶೀಘ್ರದಲ್ಲೇ ಪೂರ್ಣಗೊಳಿಸಬೇಕು ಎಂದರು.

ನಗರಾಭಿವೃದ್ಧಿ ಕೋಶದ ಕಾರ್ಯಪಾಲಕ ಅಭಿಯಂತರ ಕೆ.ಎಂ. ರವಿಕುಮಾರ, ಸಹಾಯಕ ಕಾರ್ಯಪಾಲಕ ಅಭಿಯಂತರ ಭಾಸ್ಕರ ಗೌಡ, ನಗರ, ಸ್ಥಳೀಯ ಸಂಸ್ಥೆಗಳ ಪೌರಾಯುಕ್ತರು, ಮುಖ್ಯಾಧಿಕಾರಿಗಳು ಮತ್ತಿತರರು ಇದ್ದರು.

Share this article