ಕನ್ನಡಪ್ರಭ ವಾರ್ತೆ ಹಾವೇರಿ
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಮತದಾರರ ಪಟ್ಟಿ ಪರಿಷ್ಕರಣೆ, ಕಂದಾಯ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆ ಕಾರ್ಯಕ್ರಮಗಳು, ಕುಡಿಯುವ ನೀರು, ಜಾನುವಾರುಗಳಿಗೆ ಮೇವಿನ ವಸ್ತುಸ್ಥಿತಿ ಕುರಿತಂತೆ ಪರಿಶೀಲನೆ ನಡೆಸಿದರು.
ಭದ್ರಾದಿಂದ ನೀರು: ಬೇಸಿಗೆ ಅವಧಿಗೆ ಕುಡಿಯುವ ನೀರಿಗಾಗಿ ಭದ್ರಾ ಜಲಾಶಯದಿಂದ ೦.೬೩೧ ಟಿಎಂಸಿ ನೀರು ಬಿಡುಗಡೆಗೆ ಈಗಾಗಲೇ ಪ್ರಾದೇಶಿಕ ಆಯುಕ್ತರ ಮೂಲಕ ಜಿಲ್ಲಾಡಳಿತದಿಂದ ಪ್ರಸ್ತಾವನೆ ಸಲ್ಲಿಸಲಾಗಿದೆ. ಆದಷ್ಟು ತ್ವರಿತವಾಗಿ ಜಲಾಶಯಕ್ಕೆ ನೀರು ಬಿಡುಗಡೆಗೊಳಿಸಲು ಜಲಸಂಪನ್ಮೂಲ ಕಾರ್ಯದರ್ಶಿಗಳಿಗೆ ಉಸ್ತುವಾರಿ ಕಾರ್ಯದರ್ಶಿಗಳು ಫೋನ್ ಮೂಲಕ ಮನವಿ ಮಾಡಿಕೊಂಡರು.೧೪ ಗ್ರಾಮಗಳಿಗೆ ಖಾಸಗಿ ಕೊಳವೆಬಾವಿ ಬಳಕೆ: ಜಿಲ್ಲೆಯ ನಗರ ಪ್ರದೇಶದಲ್ಲಿ ಸದ್ಯಕ್ಕೆ ಯಾವುದೇ ಕುಡಿಯುವ ನೀರಿನ ಸಮಸ್ಯೆ ಇರುವುದಿಲ್ಲ. ಗ್ರಾಮೀಣ ಪ್ರದೇಶದಲ್ಲಿ ೧೪೦ ಗ್ರಾಮ ಪಂಚಾಯಿತಿ ವ್ಯಾಪ್ತಿಯ ೨೭೨ ಹಳ್ಳಿಗಳನ್ನು ಸಮಸ್ಯಾತ್ಮಕ ಹಳ್ಳಿಗಳೆಂದು ಗುರುತಿಸಲಾಗಿದೆ. ಈ ಪೈಕಿ ೨೧೪ ಹಳ್ಳಿಗಳಲ್ಲಿ ಖಾಸಗಿ ಕೊಳವೆಬಾವಿಗಳನ್ನು ಗುರುತಿಸಲಾಗಿದೆ. ಪ್ರಸ್ತುತ ಅವಶ್ಯವಿರುವ ೧೪ ಗ್ರಾಮಗಳಿಗೆ ೨೧ ಖಾಸಗಿ ಕೊಳವೆಬಾವಿಗಳನ್ನು ಒಪ್ಪಂದದ ಆಧಾರದ ಮೇಲೆ ಪಡೆದು ನೀರು ಪೂರೈಸಲಾಗುತ್ತಿದೆ. ಮುಂದಿನ ೫೧ ವಾರಗಳ ಕಾಲ ಜಾನುವಾರುಗಳಿಗೆ ಯಾವುದೇ ಮೇವಿನ ಸಮಸ್ಯೆ ಇರುವುದಿಲ್ಲ. ಜಿಲ್ಲೆಗೆ ಸರಬರಾಜಾದ ೧೦,೫೨೮ ಮೇವಿನ ಕಿಟ್‌ಗಳ ವಿತರಣೆ ಕುರಿತಂತೆ ಅಧಿಕಾರಿಗಳು ಉಸ್ತುವಾರಿ ಕಾರ್ಯದರ್ಶಿಗಳಿಗೆ ವಿವರಿಸಿದರು.
ಮೂರರಿಂದ ಆರು ತಿಂಗಳ ಅವಧಿಯ ಕೋರ್ಟ್ ಕೇಸ್‌ಗಳನ್ನು ತಹಸೀಲ್ದಾರ್ ಹಾಗೂ ಉಪವಿಭಾಗಾಧಿಕಾರಿಗಳು ಶೂನ್ಯಕ್ಕೆ ಇಳಿಸಬೇಕು. ಆರ್‌ಟಿಸಿ ಮ್ಯೂಟೇಷನ್ ಹಾಗೂ ಆರ್‌ಟಿಸಿ ಕರೆಕ್ಸನ್ ತ್ವರಿತವಾಗಿ ಕಾಲಮಿತಿಯೊಳಗೆ ವಿಲೇಗೊಳಿಸಬೇಕು. ಭೂಮಾಪನ ಬಾಕಿ ಪ್ರಕರಣಗಳನ್ನು ತ್ವರಿತವಾಗಿ ವಿಲೇಗೊಳಿಸುವಂತೆ ಸೂಚನೆ ನೀಡಿದರು.
ವಾರದಲ್ಲಿ ಜನ್‌ದನ್ ವರದಿ: ಒಂದು ವಾರದೊಳಗಾಗಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬ್ಯಾಂಕುಗಳ ಶಾಖಾವಾರು ಜನ್‌ದನ್ ಖಾತೆಗಳ ಮಾಹಿತಿಯನ್ನು ಸಂಗ್ರಹಿಸಿ ಸಲ್ಲಿಸಬೇಕು. ಅಭಿಯಾನದ ರೀತಿಯಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನ್‌ದನ್ ಖಾತೆ ತೆರೆಯಲು ಕ್ರಮವಹಿಸಬೇಕು ಎಂದು ಲೀಡ್ ಬ್ಯಾಂಕ್ ವ್ಯವಸ್ಥಾಪಕರಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಕೈಗೊಂಡಿರುವ ಮತದಾರರ ಪಟ್ಟಿ ಪರಿಷ್ಕರಣೆ ಕುರಿತಂತೆ ಪರಿಶೀಲನೆ ನಡೆಸಿದರು. ಲಿಂಗಾನುಪಾತ, ವಿಕಲಚೇತನ, ಸೇವಾ ಮತದಾರರ ನೋಂದಣಿ, ಯುವ ಮತದಾರರ ನೋಂದಣಿ, ಸೇರ್ಪಡೆ, ಮಾರ್ಪಾಡು, ತಿದ್ದುಪಡಿ, ಮತದಾರರ ಪಟ್ಟಿಯಿಂದ ಕೈಬಿಟ್ಟಿರುವ ವಿವರಗಳನ್ನು ಪಡೆದುಕೊಂಡರು.