ಮೂಲಸೌಕರ್ಯ ಕಾಮಗಾರಿಶೀಘ್ರ ಪೂರ್ಣಗೊಳಿಸಿ: ಸಿಎಂ

KannadaprabhaNewsNetwork |  
Published : Dec 30, 2025, 04:30 AM IST
TA Sharavana laddu 1 | Kannada Prabha

ಸಾರಾಂಶ

ರಾಜ್ಯಾದ್ಯಂತ ಕೈಗೆತ್ತಿಕೊಂಡಿರುವ ಮೂಲಸೌಕರ್ಯ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಜತೆಗೆ ಕಾಮಗಾರಿ ಗುಣಮಟ್ಟದಲ್ಲಿ ಯಾವುದೇ ರಾಜಿ ಆಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ರಾಜ್ಯಾದ್ಯಂತ ಕೈಗೆತ್ತಿಕೊಂಡಿರುವ ಮೂಲಸೌಕರ್ಯ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಜತೆಗೆ ಕಾಮಗಾರಿ ಗುಣಮಟ್ಟದಲ್ಲಿ ಯಾವುದೇ ರಾಜಿ ಆಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.

ಜತೆಗೆ ವಿವಿಧ ಕ್ಷೇತ್ರಗಳಲ್ಲಿ ಕೈಗೊಳ್ಳಬೇಕಿರುವ ವಿಶೇಷ ಅನುದಾನದ ಕಾಮಗಾರಿಗಳ ಅನುಷ್ಠಾನಕ್ಕೆ ಪ್ರಸ್ತಾವನೆ ಪಡೆಯಬೇಕು. ಟೆಂಡರ್‌ ಪ್ರಕ್ರಿಯೆ ಜ.10ರೊಳಗೆ ಪೂರ್ಣಗೊಳಿಸಬೇಕು. ಈ ವೇಳೆ ರಸ್ತೆಗಳ ದುರಸ್ತಿಗೆ ಆದ್ಯತೆ ನೀಡಬೇಕು ಎಂದು ಹೇಳಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಸೋಮವಾರ ಮೂಲಸೌಕರ್ಯ ಅಭಿವೃದ್ಧಿ ಯೋಜನೆ ಹಾಗೂ ರೈಲ್ವೆ ಯೋಜನೆಗಳ ಭೂಸ್ವಾಧೀನ ಹಾಗೂ ಕಾಮಗಾರಿಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿದರು.

ಈ ವೇಳೆ 2023-24ರಲ್ಲಿ ಮುಖ್ಯಮಂತ್ರಿಗಳ ವಿಶೇಷ ಅನುದಾನ ಯೋಜನೆಯಡಿ ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ತಲಾ 25 ಕೋಟಿ ರು.ನಂತೆ ಒಟ್ಟು 3510 ಕೋಟಿ ಬಿಡುಗಡೆಗೆ ಅನುಮೋದನೆ ನೀಡಲಾಗಿತ್ತು. ಇದರಲ್ಲಿ ಈಗಾಗಲೇ 2040 ಕೋಟಿ ರು. ಮೊತ್ತದಲ್ಲಿ ಶೇ.58ರಷ್ಟು ಕಾಮಗಾರಿಗಳು ಪೂರ್ಣಗೊಂಡಿದ್ದು, 920 ಕೋಟಿ ರು. ವೆಚ್ಚ ಭರಿಸಲಾಗಿದೆ. ಇನ್ನೂ 1205 ಕೋಟಿ ರು. ಬಿಡುಗಡೆ ಮಾಡಲು ಬೆಳಗಾವಿ ವಿಧಾನ ಮಂಡಲದ ಅಧಿವೇಶನದ ಸಂದರ್ಭದಲ್ಲಿ ಆದೇಶ ನೀಡಲಾಗಿದೆ ಎಂದು ಸಿದ್ದರಾಮಯ್ಯ ಮಾಹಿತಿ ನೀಡಿದರು.1890 ಕೋಟಿ ರು.ಗೆ ಅನುಮೋದನೆ:

2024-25ರಲ್ಲಿ ಮಳೆ ಹಾನಿಯಿಂದ ಉಂಟಾದ ರಸ್ತೆ ದುರಸ್ತಿಗಾಗಿ 1890 ಕೋಟಿ ರು. ಮೊತ್ತಕ್ಕೆ ಅನುಮೋದನೆ ನೀಡಲಾಗಿದ್ದು, 250 ಕೋಟಿ ರು. ಬಿಡುಗಡೆ ಮಾಡಲಾಗಿದೆ. ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ 2025-26 ನೇ ಸಾಲಿನಲ್ಲಿ 8666.50 ಕೋಟಿ ರು.ಗೆ ಅನುಮೋದನೆ ನೀಡಲಾಗಿದ್ದು, ಈಗಾಗಲೇ 1 ಸಾವಿರ ಕೋಟಿ ರು. ಬಿಡುಗಡೆ ಮಾಡಲಾಗಿದೆ.

ಎಲ್ಲಾ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗಾಗಿ ಪೂರ್ಣಗೊಳಿಸಿ, ಅನುದಾನ ಪಾವತಿಸುವುದು ಆಯಾ ಜಿಲ್ಲಾಧಿಕಾರಿಗಳ ಜವಾಬ್ದಾರಿ. ಬಿಲ್‌ಗಳ ಪಾವತಿಯಲ್ಲಿ ಯಾವುದೇ ವಿಳಂಬ ಮಾಡಬಾರದು ಎಂದು ಸಿದ್ದರಾಮಯ್ಯ ಸೂಚಿಸಿದರು.ಗುಣಮಟ್ಟದಲ್ಲಿ ರಾಜಿ ಬೇಡ:

ಕಾಮಗಾರಿಗಳ ಗುಣಮಟ್ಟದಲ್ಲಿ ಯಾವುದೇ ರಾಜಿ ಆಗಬಾರದು. ಜಿಲ್ಲಾ ಉಸ್ತುವಾರಿ ಸಚಿವರು ಎಲ್ಲಾ ಕಾಮಗಾರಿಗಳ ಪ್ರಗತಿ ಪರಿಶೀಲನೆ ಮಾಡಬೇಕು. 2024-25ನೇ ಸಾಲಿನಲ್ಲಿ 205 ವಿಧಾನಸಭಾ ಕ್ಷೇತ್ರಗಳಿಗೆ ಮುಖ್ಯಮಂತ್ರಿ ವಿಶೇಷ ಅನುದಾನ ಯೋಜನೆಯಡಿ ಒಟ್ಟು 8,666.50 ಕೋಟಿ ರು. ಅನುದಾನ ಹಂಚಿಕೆ ಮಾಡಲಾಗಿದೆ.ಇನ್ನು ಬಾಕಿಯಿರುವ 19 ಕ್ಷೇತ್ರಗಳಿಂದ ಪ್ರಸ್ತಾವನೆಗಳನ್ನು ಪಡೆದ ಬಳಿಕ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು. ಎಲ್ಲಾ ಟೆಂಡರ್‌ ಪ್ರಕ್ರಿಯೆಗಳನ್ನು ಜ.10ರೊಳಗಾಗಿ ಪೂರ್ಣಗೊಳಿಸಲು ಸಿದ್ದರಾಮಯ್ಯ ಸೂಚನೆ ನೀಡಿದರು.

ರೈಲ್ವೆ ಭೂಸ್ವಾಧೀನಕ್ಕೆ ಆದ್ಯತೆ ನೀಡಿ:

ರಾಜ್ಯದಲ್ಲಿ ಅನುಮೋದನೆಗೊಂಡಿರುವ ಎಲ್ಲಾ ರೈಲು ಯೋಜನೆಗಳಿಗೆ ಒಟ್ಟು 16,554 ಎಕರೆ ಭೂಮಿ ಅವಶ್ಯಕತೆ ಇದೆ. ಇದರ ಪೈಕಿ ಶೇ.84% ಭೂಮಿ ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಕಾಮಗಾರಿ, ಸ್ವಾಧೀನಕ್ಕೆ ರಾಜ್ಯದಿಂದ 5 ಸಾವಿರ ಕೋಟಿಗೂ ಹೆಚ್ಚು ಹಣ ಬಿಡುಗಡೆ ಮಾಡಲಾಗಿದೆ. ಇನ್ನೂ ಅಂದಾಜು 2,685 ಎಕರೆಗಳಷ್ಟು ಭೂಮಿ ಸ್ವಾಧೀನ ಪಡಿಸಿಕೊಳ್ಳಬೇಕಿದೆ.

ರೈಲ್ವೇ ಕಾಮಗಾರಿಗಳಿಗೆ ಬಾಕಿಯಿರುವ ಭೂಸ್ವಾಧೀನ ಪ್ರಕ್ರಿಯೆಗಳನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಬೇಕು. ಕುಡಚಿ-ಬಾಗಲಕೋಟೆ, ತುಮಕೂರು-ದಾವಣಗೆರೆ, ಬೇಲೂರು-ಹಾಸನ, ಶಿವಮೊಗ್ಗ-ರಾಣೆಬೆನ್ನೂರು, ಧಾರವಾಡ-ಬೆಳಗಾವಿ ರೈಲ್ವೇ ಮಾರ್ಗಗಳ ನಿರ್ಮಾಣ ಕಾಮಗಾರಿ ನಿಗದಿತ ಅವಧಿಯೊಳಗಾಗಿ ಕೈಗೊಳ್ಳಲು ಎಲ್ಲಾ ಅಗತ್ಯ ಪ್ರಕ್ರಿಯೆ ತ್ವರಿತಗೊಳಿಸಬೇಕು ಎಂದು ಮುಖ್ಯಮಂತ್ರಿ ಸೂಚನೆ ನೀಡಿದರು.

ಸಭೆಯಲ್ಲಿ ಸಚಿವರಾದ ಎಂ.ಬಿ.ಪಾಟೀಲ್‌, ಎಚ್.ಕೆ.ಪಾಟೀಲ್‌, ಕೆ.ಎಚ್.ಮುನಿಯಪ್ಪ, ಪ್ರಿಯಾಂಕ್‌ ಖರ್ಗೆ, ರಹೀಂ ಖಾನ್‌, ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಸೇರಿ ಹಲವರು ಹಾಜರಿದ್ದರು.

ಏರ್ಪೋರ್ಟ್‌ಗಳ ತಾಂತ್ರಿಕ ಅಡ್ಡಿ ನಿವಾರಿಸಬೇಕು: ಸಿಎಂ

ರಾಜ್ಯದಲ್ಲಿ ಒಟ್ಟು 6 ವಿಮಾನ ನಿಲ್ದಾಣಗಳ ಕಾಮಗಾರಿಗಳು ಅನುಷ್ಠಾನದ ವಿವಿಧ ಹಂತದಲ್ಲಿವೆ. ಹಾಸನ ವಿಮಾನ ನಿಲ್ದಾಣ ಭೂಸ್ವಾಧೀನ ಪರಿಹಾರವನ್ನು ರೈತರಿಗೆ ಆದಷ್ಟು ಬೇಗ ವಿತರಿಸಬೇಕು. ಎಲ್ಲಾ ವಿಮಾನ ನಿಲ್ದಾಣಗಳ ಕಾಮಗಾರಿ ಪೂರ್ಣಗೊಳಿಸಲು ಇರುವ ಎಲ್ಲಾ ತಾಂತ್ರಿಕ ಅಡಚಣೆ ನಿವಾರಿಸಬೇಕು ಎಂದು ಸಿದ್ದರಾಮಯ್ಯ ಸೂಚಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಏಕಾದಶಿ ಪ್ರಯುಕ್ತ ಶರವಣ ಟ್ರಸ್ಟ್‌ನಿಂದ ಲಕ್ಷ ಲಡ್ಡು ಹಂಚಿಕೆ
ಹಳೆ ದ್ವೇಷ: ರಸ್ತೆಯಲ್ಲಿ ಅಟ್ಟಾಡಿಸಿ ಅಪ್ಪ, ಮಗನ ಮೇಲೆ ಹಲ್ಲೆ ನಡೆಸಿ ಪರಾರಿ