ಕಂಪ್ಲಿ: ತಾಲೂಕಿನ ಮೆಟ್ರಿ, ನಂ.10 ಮುದ್ದಾಪುರ, ಕಣಿವಿ ತಿಮ್ಮಲಾಪುರ ಹಾಗೂ ದೇವಸಮುದ್ರ ಗ್ರಾಮಗಳಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ಕೈಗೊಂಡಿರುವ ಕುಡಿಯುವ ನೀರಿನ ಕಾಮಗಾರಿಗಳನ್ನು ಜಿಪಂ ಸಿಇಒ ಮಹಮ್ಮದ್ ಹ್ಯಾರಿಸ್ ಸುಮೈರ್ ಗುರುವಾರ ಪರಿಶೀಲಿಸಿದರು.
ನೀರಿನ ಮೌಲ್ಯವನ್ನು ಸಾರ್ವಜನಿಕರಿಗೆ ತಿಳಿಸುವ ಮೂಲಕ ಮಿತ ಬಳಕೆಯ ಕುರಿತು ಜಾಗೃತಿ ಮೂಡಿಸಬೇಕು. ಅಗತ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ನೀರು ಬಳಕೆ ಮಾಡದಂತೆ ಹಾಗೂ ನೀರನ್ನು ವ್ಯರ್ಥವಾಗಿ ಹರಿಯಲು ಬಿಡದಂತೆ ಗ್ರಾಮಸ್ಥರಿಗೆ ತಿಳಿವಳಿಕೆ ನೀಡಬೇಕು ಎಂದರು.
ಬುಕ್ಕಸಾಗರ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಪೈಪ್‌ಲೈನ್‌ನಿಂದ ರಾಮಸಾಗರ ಗ್ರಾಮದ ಮನೆಗಳಿಗೆ ನಲ್ಲಿ ಸಂಪರ್ಕ ಕಲ್ಪಿಸುವ ಕುರಿತು ಪರಿಶೀಲನೆ ನಡೆಸಿದರು. ಯೋಜನೆಯಡಿ ಲಭ್ಯವಿರುವ ನೀರನ್ನು ಸಮರ್ಪಕವಾಗಿ ಬಳಸಿಕೊಂಡು ಪ್ರತಿಯೊಂದು ಕುಟುಂಬಕ್ಕೂ ಕುಡಿಯುವ ನೀರು ತಲುಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.ಬಳಿಕ ದೇವಸಮುದ್ರ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿದ ಸಿಇಒ, ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವಿತರಿಸಲಾಗುತ್ತಿರುವ ಬಿಸಿಯೂಟದ ಗುಣಮಟ್ಟ ಪರಿಶೀಲಿಸಿದರು.